ಕನ್ನಡಪ್ರಭ ವಾರ್ತೆ ಶಿವಮೊಗ್ಗ ವಿಧಾನ ಪರಿಷತ್‍ನ ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ಅರ್ಹ ಯುವ ಮತದಾರರು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಹಾಗೂ ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿರುವ ಮತದಾರರು ಪುನರ್ ಸೇರ್ಪಡೆಗೊಳಿಸಿಕೊಳ್ಳಲು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮನವಿ ಮಾಡಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡಿ, ಹೊಸ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಿಕೊಳ್ಳಬೇಕು. ಮತದಾರರ ವಿವರಗಳನ್ನು ನಿಗದಿತ ನಮೂನೆಯಲ್ಲಿ ಸಂಗ್ರಹಿಸುವಂತೆ ಜಿಲ್ಲೆಯ ಎಲ್ಲ ಮತಗಟ್ಟೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಿಕ್ಷಣ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತಾವು ಈಗಾಗಲೇ ಸಂಗ್ರಹಿಸಲಾಗಿರುವ ಮತದಾರರ ವಿವರಗಳನ್ನು ಚುನಾವಣಾ ಶಾಖೆಗೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ಸಂಕ್ಷಿಪ್ತ ವಿಶೇಷ ಪರಿಷ್ಕರಣೆ ಮಾಡಿದೆ. ಅ.27ರಂದು ಪ್ರಕಟಿಸಿದೆ. ಕರಡು ಮತದಾರರ ಪಟ್ಟಿ ಪರಿಶೀಲಿಸಿ ಸೇರ್ಪಡೆ, ತಿದ್ದುಪಡಿ ಅಥವಾ ಕೈಬಿಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ, ಡಿ.9ರೊಳಗೆ ವಿಧಾನಸಭಾ ಕ್ಷೇತ್ರವಾರು ಸಹಾಯಕ ಮತದಾರರ ನೋಂದಣಾಧಿಕಾರಿಗಳ ಸಂಪರ್ಕಿಸಿ ಆಕ್ಷೇಪಣೆ ಸಲ್ಲಿಸಬಹುದು. ಅಥವಾ ಮತದಾರರೇ ನೇರವಾಗಿ http://www.nvsp.in ಅಥವಾ http://voterportal.eci.gov.in ಅಥವಾ Voter helpline App ಗಳ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಡಿ.2 ಮತ್ತು 3ರಂದು ವಿಶೇಷ ಅಭಿಯಾನ ನಡೆಸಲಿದೆ. ಈ ಅವಧಿಯಲ್ಲಿ ಸ್ವೀಕರಿಸಲಾದ ಎಲ್ಲಾ ಆಕ್ಷೇಪಣೆಗಳನ್ನು ಡಿ.26ರಂದು ಇತ್ಯರ್ಥಗೊಳಿಸಲಾಗುವುದು. 2024ರ ಜ.5ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು. ಹೆಚ್ಚಿನ ಮಾಹಿತಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಜಿಲ್ಲೆಯ ಎಲ್ಲ 7 ತಾಲೂಕುಗಳ ತಾಲೂಕು ಕಚೇರಿ ಮತದಾರರ ಸಹಾಯಕ ನೋಂದಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. ಸಭೆಯಲ್ಲಿ ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಮತ್ತಿತರರು ಇದ್ದರು.