ನಾಡಪ್ರಭು ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತರಲ್ಲ: ನಿಶ್ಚಲಾನಂದನಾಥ ಸ್ವಾಮೀಜಿ

KannadaprabhaNewsNetwork | Published : Jul 1, 2025 12:47 AM

ಬೆಂಗಳೂರಿನ ನಿರ್ಮಿಸಿ ಎಲ್ಲ ಸಮುದಾಯಗಳ ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿರುವ ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತವಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಮುನ್ನುಡಿ ಬರೆದಿರುವ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಪ್ರಸ್ತುತದ ಸಂದರ್ಭದಲ್ಲಿ ಉತ್ತಮ ಆಡಳಿತ ನೀಡಬಹುದು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಜಾತಿ, ವರ್ಗಕ್ಕೆ ಸೀಮಿತರಲ್ಲ. ಅವರ ತತ್ವಾದರ್ಶಗಳನ್ನು ಯುವಪೀಳಿಗೆ ಅಳವಡಿಸಿಕೊಂಡು ಮುಂದೆ ಸಾಗಬೇಕು ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಪೀಠಾಧಿಪತಿ ನಿಶ್ಚಲಾನಂದನಾಥ ಸ್ವಾಮೀಜಿ ಕರೆ ನೀಡಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಭಾನುವಾರ ವಿವಿಧ ಸಂಘ- ಸಂಸ್ಥೆಗಳು, ಯುವಕರ ಮಿತ್ರರು, ರಕ್ತದಾನಿಗಳ ಒಕ್ಕೂಟ, ಮಿಮ್ಸ್ ರಕ್ತಕೋಶ ಹಾಗೂ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕೆಂಪೇಗೌಡರ ಜಯಂತಿ ನಿಮಿತ್ತ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ತಾಲೂಕಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಾಡಪ್ರಭು ಕೆಂಪೇಗೌಡರ ದೇಶದ ಅತಿ ಎತ್ತರದ ಪ್ರತಿಮೆ ನೀಲನಕ್ಷೆ ಅನಾವರಣಗೊಳಿಸಿ ಮಾತನಾಡಿದರು.

ಬೆಂಗಳೂರಿನ ನಿರ್ಮಿಸಿ ಎಲ್ಲ ಸಮುದಾಯಗಳ ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿರುವ ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತವಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಮುನ್ನುಡಿ ಬರೆದಿರುವ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಪ್ರಸ್ತುತದ ಸಂದರ್ಭದಲ್ಲಿ ಉತ್ತಮ ಆಡಳಿತ ನೀಡಬಹುದು ಎಂದರು.

ಯಾವುದೇ ಸ್ಪಾರ್ಥವಿಲ್ಲದೇ ನಾಡಿನ ಅಭಿವೃದ್ಧಿಗಾಗಿ ಬೆಂಗಳೂರು ಕಟ್ಟಿರುವ ಅವರ ಹೆಸರಿನಲ್ಲಿ ನೂರಾರು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.

ದೇಶ ಹಾಗೂ ನಾಡಿಗೆ ನಾನಾ ರೀತಿಯಲ್ಲಿ ಸೇವೆ ಸಲ್ಲಿಸಿರುವ ಮಹನೀಯರ ಹೆಸರಿನಲ್ಲಿ ಇಂಥ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿರಲಿ. ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಹಲವರ ಜೀವ ಉಳಿಸುವ ಕಾರ್ಯ ಶ್ಲಾಘನೀಯ. ನಾಡಿಗಾಗಿ ನಾಡಪ್ರಭು ಕೆಂಪೇಗೌಡ ಅವರು ಸಲ್ಲಿಸಿದ ಸೇವೆಯ ಸ್ಮರಣಾರ್ಥವಾಗಿ ರಕ್ತದಾನದಂಥ ಸಮಾಜಮುಖಿ ಕಾರ್ಯಗಳು ಮಾದರಿಯಾಗಿವೆ ಎಂದು ಬಣ್ಣಿಸಿದರು.

ಶಿಬಿರದಲ್ಲಿ ಸುಮಾರು 306ಕ್ಕೂ ಹೆಚ್ಚು ಯುನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ರಕ್ತದಾನಿಗಳಿಗೆ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು. ವಿವಿಧ ಪಕ್ಷಗಳ ಮುಖಂಡರು ಹಾಗೂ ಹಲವು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.