ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ಜೂ.30ರಂದು ನಾಡಪ್ರಭು ಕೆಂಪೇಗೌಡರ 515 ಜಯಂತ್ಯುತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯುವ ಸಮಾರಂಭವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯ ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿಯಮಂಜು, ಕೆ.ಎಂಉದಯ್, ವಿಧಾನ ಪರಿಷತ್ ಸದಸ್ಯರಾದ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಕೆ.ವಿವೇಕಾನಂದ ಭಾಗವಹಿಸಲಿದ್ದಾರೆ ಎಂದರು.ಹಿರಿಯ ಸಾಹಿತಿ ಹಾಗೂ ಸಂಶೋಧಕ ತೈಲೂರು ವೆಂಕಟ ಕೃಷ್ಣ ಅವರು ಕೆಂಪೇಗೌಡರ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು. ನಗರದ ಡೀಸಿ ಕಚೇರಿಯಿಂದ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅಲಂಕೃತ ವಾಹನದೊಂದಿಗೆ ಜನಪದ ಕಲಾ ಪ್ರಕಾರಗಳೊಂದಿಗೆ ಬೃಹತ್ ಸಾಂಸ್ಕೃತಿಕ ಮೆರವಣಿಗೆಯು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತ, ಮಹಾವೀರ ವೃತ್ತದ ಮೂಲಕ ಪ್ರಮುಖ ರಸ್ತೆಗಳಲ್ಲಿ ಸಾಗಿ ಅಂಬೇಡ್ಕರ್ ಭವನ ತಲುಪಲಿದೆ. ಭವನದ ಆವರಣದಲ್ಲಿ ವಸ್ತು ಪ್ರದರ್ಶನ, ಆಹಾರ ಮೇಳ, ವಿದ್ಯಾರ್ಥಿಗಳಿಗೆ ಕೆಂಪೇಗೌಡ ವೇಷಭೂಷಣ ಸ್ಪರ್ಧೆ ನಡೆಯಲಿದೆ ಎಂದರು.
ಇದೇ ವೇಳೆ ಕೆಂಪೇಗೌಡರ 515ನೇ ಜಯಂತಿಯ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಮುಂದಿನ 6 ತಿಂಗಳ ಕಾಲ ರಾಜಕೀಯವಾಗಿ ಯಾವುದೇ ವಿಷಯಗಳನ್ನು ಮಾತನಾಡುವುದಿಲ್ಲ ಎಂದು ಇದೇ ವೇಳೆ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯ ಉಪಾಧ್ಯಕ್ಷ ಎಲ್.ಕೃಷ್ಣ, ಸುಜಾತ ಕೃಷ್ಣ , ಮಲ್ಲಿಕಾರ್ಜುನ್ , ಎಸ್.ನಾರಾಯಣ, ರವೀಂದ್ರ, ಸಿ.ಕೆ.ರವಿ, ರಮೇಶ್ ಇತರರು ಉಪಸ್ಥಿತರಿದ್ದರು.
ಟಿಎಪಿಸಿಎಂಎಸ್‌ನಲ್ಲಿ ಕೇಪೇಗೌಡರ ಜಯಂತ್ಯುತ್ಸವನಾಗಮಂಗಲ:ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯುತ್ಸವವನ್ನು ಆಚರಿಸಲಾಯಿತು.
ಸಂಸ್ಥೆ ಅಧ್ಯಕ್ಷ ಎಚ್.ಎನ್.ಗಿರೀಶ್, ಉಪಾಧ್ಯಕ್ಷ ಡಿ.ಬಿ.ರಾಜಯ್ಯ, ಕಾರ್ಯದರ್ಶಿ ಎಂ.ಕೆ.ಮೋಹನ್‌ರಾಜ್ ಸೇರಿದಂತೆ ಆಡಳಿತ ಮಂಡಳಿಯ ನಿರ್ದೇಶಕರು ನಾಡಪ್ರಭುವಿನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.ಹಲವೆಡೆ ಜಯಂತ್ಯುತ್ಸವ:ಪಟ್ಟಣದ ಪುರಸಭೆ, ಪಿಎಲ್‌ಡಿ ಬ್ಯಾಂಕ್, ತಾಲೂಕು ಒಕ್ಕಲಿಗರ ಸಂಘ, ಬ್ಲಾಕ್ ಕಾಂಗ್ರೆಸ್ ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳು, ಬೆಳ್ಳೂರು ಪಟ್ಟಣ ಪಂಚಾಯ್ತಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.