ಕನ್ನಡಪ್ರಭ ವಾರ್ತೆ ಮೈಸೂರು
ಆಷಾಢ ಮಾಸದ 2ನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ವರುಣ ಸಿಂಚನದೊಂದಿಗೆ ಭಕ್ತಿಯ ಸಿಂಚನವೂ ಆಯಿತು. ಮಳೆ, ಮಂಜು, ಚಳಿಯನ್ನೂ ಲೆಕ್ಕಿಸದೆ ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಚಾಮುಂಡೇಶ್ವರಿಯ ದರ್ಶನ ಪಡೆದು ಭಕ್ತಿಭಾವ ಮೆರೆದರು.
ಮುಂಜಾನೆಯಿಂದಲೇ ರಾಜ್ಯದ ಮೂಲೆ ಮೂಲೆಯಿಂದ ಬೆಟ್ಟಕ್ಕೆ ಆಗಮಿಸಿದ್ದ ಭಕ್ತರು, ಸರತಿ ಸಾಲಿನಲ್ಲಿ ನಿಂತು ಜೈ ಚಾಮುಂಡಿ ಜಯ ಘೋಷ ಕೂಗುತ್ತ ಚಾಮುಂಡೇಶ್ವರಿ ದರ್ಶನ ಪಡೆದು ಧನ್ಯರಾದರು.ಬಸ್ ವ್ಯವಸ್ಥೆ
ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 50 ರೂ. 100 ರೂ. ಹಾಗೂ 300 ರೂ. ವಿಶೇಷ ದರ್ಶನದ ಸರತಿ ಸಾಲಿನಲ್ಲೂ ಹೆಚ್ಚು ಜನ ಕಂಡುಬಂದರು. ಮಳೆಯ ಕಾರಣಕ್ಕೆ ಬೆಳಗ್ಗೆ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ಮಳೆ ಬಿಡುವು ನೀಡಿದ ಬಳಿಕ ಭಕ್ತರ ಸಂಖ್ಯೆ ಹೆಚ್ಚಾಯಿತು.
ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮುಂಜಾನೆ 3 ಗಂಟೆಯಿಂದಲೇ ಚಾಮುಂಡಿಬೆಟ್ಟದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡವು. ಪ್ರತಿ ವಾರದಂತೆ ಮೊದಲಿಗೆ ದೇವಿಗೆ ಅಭಿಷೇಕ, ರುದ್ರಾಭೀಷೇಕ, ಪಂಚಾಮೃತ ಅಭಿಷೇಕ ಸಲ್ಲಿಸಿದ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು.
ಚಾಮುಂಡೇಶ್ವರಿಗೆ ನಾಗಲಕ್ಷ್ಮೀ ಅಲಂಕಾರ
--ಬಾಕ್ಸ್ 2--
ಆಷಾಢ ಶುಕ್ರವಾರದ ಅಂಗವಾಗಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಭಕ್ತರಿಗೆ ಅಚ್ಚುಕಟ್ಟಾಗಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಕಳೆದ 13 ವರ್ಷಗಳಿಂದ ಪ್ರತಿ ವರ್ಷ 2ನೇ ಆಷಾಢ ಶುಕ್ರವಾರದಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಿಸುವ ನಂಜನಗೂಡಿನ ಚಾಮುಂಡಿ ಟೌನ್ ಷಿಪ್ ಹಾಗೂ ಕೊಯಮತ್ತೂರಿನ ದುರ್ಗಾ ಏಜೆನ್ಸಿಯ ಶಾಂತಿ ಮತ್ತು ತಿರುಮಲೈಸ್ವಾಮಿ ತಂಬು ದಂಪತಿಯಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಬೆಳಕ್ಕೆ ಉಪಾಹಾರಕ್ಕೆ ಉಪ್ಪಿಟ್ಟು, ಕೇಸರಿ ಬಾತ್, ಪೊಂಗಲ್, ಬೋಂಡಾ, ಮಧ್ಯಾಹ್ನ ಊಟಕ್ಕೆ ಅನ್ನ, ಸಾಂಬಾರ್, ಮೊಸರನ್ನ, ಜಹಂಗೀರ್, ಪಕೋಡ ವಿತರಿಸಲಾಯಿತು.
--ಗಣ್ಯರಿಂದ ದರ್ಶನ--
2ನೇ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದ ಅಸಂಖ್ಯಾತ ಭಕ್ತರೊಂದಿಗೆ ಹಲವು ಗಣ್ಯರು ದೇವಿಯ ದರ್ಶನ ಪಡೆದರು. ಪ್ರಮುಖವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಟುಂಬ, ನಟಿ ಸುಧಾರಾಣಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ ಹಲವು ಗಣ್ಯರು ಬೆಟ್ಟಕ್ಕೆ ಭೇಟಿ ನೀಡಿ ಅಮ್ಮನ ದರ್ಶನ ಪಡೆದರು.