ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡುವಂತೆ ನಾಗೇಶ್ ಆಗ್ರಹ

KannadaprabhaNewsNetwork |  
Published : Jun 02, 2026, 01:45 AM IST
1ಎಚ್ಎಸ್ಎನ್13 :  | Kannada Prabha

ಸಾರಾಂಶ

ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಸಿರುವ ಮನವಿಯಲ್ಲಿ, ಕರ್ನಾಟಕದಲ್ಲಿ ಸುಮಾರು ೧೯ ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಯಾದವ (ಗೊಲ್ಲ) ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ದೊರೆಯುತ್ತಿಲ್ಲ. ಹೀಗಾಗಿ ಸಮುದಾಯದ ಪರವಾಗಿ ಹೋರಾಟ ನಡೆಸುತ್ತಿರುವ ಡಿ.ಟಿ. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಶ್ರೀನಿವಾಸ್, ಆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ಗೆ ಗೆಲುವು ತಂದುಕೊಟ್ಟ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಸಂಘಟನಾ ಸಾಮರ್ಥ್ಯ ಹಾಗೂ ರಾಜಕೀಯ ತಂತ್ರಗಾರಿಕೆ ಪಕ್ಷದ ಬಲವರ್ಧನೆಗೆ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಹಾಸನ

ಕರ್ನಾಟಕ ರಾಜ್ಯ ಯಾದವ (ಗೊಲ್ಲ) ಸಮುದಾಯದ ಪ್ರಮುಖ ನಾಯಕ, ವಿಧಾನ ಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಯಾದವ ಗೊಲ್ಲ ಸಂಘದ ಅಧ್ಯಕ್ಷ ಡಿ.ಟಿ. ಶ್ರೀನಿವಾಸ್ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಸಮಾಜದ ಉಪಾಧ್ಯಕ್ಷ ಕೃಷ್ಣಮೂರ್ತಿ ಮತ್ತು ಸಂಚಾಲಕ ನಾಗೇಶ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಸಿರುವ ಮನವಿಯಲ್ಲಿ, ಕರ್ನಾಟಕದಲ್ಲಿ ಸುಮಾರು ೧೯ ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಯಾದವ (ಗೊಲ್ಲ) ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ದೊರೆಯುತ್ತಿಲ್ಲ. ಹೀಗಾಗಿ ಸಮುದಾಯದ ಪರವಾಗಿ ಹೋರಾಟ ನಡೆಸುತ್ತಿರುವ ಡಿ.ಟಿ. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಡಿ.ಟಿ. ಶ್ರೀನಿವಾಸ್ ಅವರು ರಾಜ್ಯಾದ್ಯಂತ ಸಮಾಜವನ್ನು ಸಂಘಟಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ದಿವಂಗತ ಎ. ಕೃಷ್ಣಪ್ಪ ಅವರ ನಂತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯ ಮೂಲಕ ಆಯ್ಕೆಯಾದ ಮೊದಲ ಅಧ್ಯಕ್ಷರಾಗಿರುವ ಅವರು, ತಮ್ಮ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಸಮಾಜದ ಸಂಘಟನೆಗೆ ವಿಶೇಷ ಒತ್ತು ನೀಡಿದ್ದಾರೆ. ತುಮಕೂರು, ಚಿತ್ರದುರ್ಗ ಹಾಗೂ ಚಿಕ್ಕೋಡಿ ಸೇರಿದಂತೆ ಹಲವು ಕಡೆ ಬೃಹತ್ ಯಾದವ ಸಮಾವೇಶಗಳನ್ನು ಯಶಸ್ವಿಯಾಗಿ ಆಯೋಜಿಸಿ ಸಮುದಾಯದ ಶಕ್ತಿಯನ್ನು ಒಗ್ಗೂಡಿಸಿದ್ದಾರೆ ಎಂದರು. ೨೦೨೪ರ ಕರ್ನಾಟಕ ಆತ್ಮೀಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯ ಸಾಧಿಸಿರುವ ಡಿ. ಟಿ. ಶ್ರೀನಿವಾಸ್, ಆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ಗೆ ಗೆಲುವು ತಂದುಕೊಟ್ಟ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಸಂಘಟನಾ ಸಾಮರ್ಥ್ಯ ಹಾಗೂ ರಾಜಕೀಯ ತಂತ್ರಗಾರಿಕೆ ಪಕ್ಷದ ಬಲವರ್ಧನೆಗೆ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಶೈಕ್ಷಣಿಕ ಕ್ಷೇತ್ರದಲ್ಲಿಯೂ ವಿಶೇಷ ಸಾಧನೆ ಮಾಡಿರುವ ಡಿ.ಟಿ. ಶ್ರೀನಿವಾಸ್ ಅವರು ಹಲವು ಉನ್ನತ ಪದವಿಗಳನ್ನು ಪಡೆದಿದ್ದಾರೆ. ಶಿಕ್ಷಣ ತಜ್ಞರಾಗಿ ಗುರುತಿಸಿಕೊಂಡಿರುವ ಅವರು ಸಮಾಜದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅಲ್ಲದೆ ಕರ್ನಾಟಕ ರಾಜ್ಯ ಪ್ರವರ್ಗ-೧ರ ಜಾತಿಗಳ ಒಕ್ಕೂಟದ ಅಧ್ಯಕ್ಷರಾಗಿ ಸುಮಾರು ೯೫ಕ್ಕೂ ಹೆಚ್ಚು ಅತಿ ಹಿಂದುಳಿದ ಸಮುದಾಯಗಳನ್ನು ಸಂಘಟಿಸಿ ಅವರ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ ಎಂದರು. ರಾಜ್ಯದ ಹಿಂದುಳಿದ ವರ್ಗಗಳ ಆಶೋತ್ತರಗಳನ್ನು ಸಚಿವ ಸಂಪುಟದಲ್ಲಿ ಸಮರ್ಥವಾಗಿ ಪ್ರತಿನಿಧಿಸುವ ಸಾಮರ್ಥ್ಯ ಡಿ.ಟಿ. ಶ್ರೀನಿವಾಸ್ ಅವರಿಗಿದೆ. ಆದ್ದರಿಂದ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಯಾದವ ಸಮುದಾಯ ಹಾಗೂ ಪ್ರವರ್ಗ-೧ರ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಡಿ.ಟಿ. ಶ್ರೀನಿವಾಸ್ ಅವರ ಸಚಿವ ಸಂಪುಟ ಸೇರ್ಪಡೆಯಿಂದ ಹಿಂದುಳಿದ ವರ್ಗಗಳ ಧ್ವನಿ ಸರ್ಕಾರದಲ್ಲಿ ಮತ್ತಷ್ಟು ಬಲವಾಗಿ ಪ್ರತಿಧ್ವನಿಸಲಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಗೋವಿಂದರಾಜು, ಕಾರ್ಯದರ್ಶಿ ಕೇಶವೇಗೌಡ, ಬೊಮ್ಮೇಗೌಡ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿ ವೆಚ್ಚ ಕಡಿಮೆ ಮಾಡಿಕೊಳ್ಳುವ ಕುರಿತ ಜಾಗೃತಿ ಮೂಡಿಸಿ
ರಜೆ ಬಳಿಕ ಶಾಲೆಗೆ ಮರಳಿದ ಮಕ್ಕಳಿಗೆ ಗುಲಾಬಿ ಹೂ ಜೊತೆ ಸಿಹಿ ಸ್ವಾಗತ