ಯೋಜನೆ ಹೆಸರೇಳಿ ಮತ ಕೇಳಿ

KannadaprabhaNewsNetwork | Published : Apr 6, 2025 1:45 AM

ಸಾರಾಂಶ

ಜೂನ್, ಜುಲೈ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಘೋಷಣೆ ಆಗಬಹುದು. ಈಗಿನಿಂದಲೇ ಕಾರ್ಯಕರ್ತರ ಜತೆ ಸಭೆ ನಡೆಸುವಂತೆ ಸಿಎಂ ಸೂಚಿಸಿದ್ದಾರೆ. ಶಾಸಕ ಬಸವರಾಜ ರಾಯರಡ್ಡಿ ಅವರ ಕ್ಷೇತ್ರದಿಂದ ಸಭೆ ಪ್ರಾರಂಭಿಸಿದ್ದು ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ.

ಯಲಬುರ್ಗಾ:

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಟ್ಟ ಮಾತಿನಂತೆ ನಡೆದು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಬಡಜನರಿಗೆ ಆಧಾರವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಪಟ್ಟಣದ ಕಾಂಗ್ರೆಸ್‌ ಪಕ್ಷದ ಕಾರ್ಯಾಲಯದಲ್ಲಿ ಶನಿವಾರ ತಾಲೂಕು ಯಲಬುರ್ಗಾ-ಕುಕನೂರ ಬ್ಲಾಕ್ ಕಾಂಗ್ರೆಸ್‌ ಸಮಿತಿ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯ ಪೂರ್ವಭಾವಿ ಸಭೆ ಹಾಗೂ ಯಲಬುರ್ಗಾ ಬ್ಲಾಕ್ ಕಾಂಗ್ರೆಸ್‌ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜೂನ್, ಜುಲೈ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಘೋಷಣೆ ಆಗಬಹುದು. ಈಗಿನಿಂದಲೇ ಕಾರ್ಯಕರ್ತರ ಜತೆ ಸಭೆ ನಡೆಸುವಂತೆ ಸಿಎಂ ಸೂಚಿಸಿದ್ದಾರೆ. ಶಾಸಕ ಬಸವರಾಜ ರಾಯರಡ್ಡಿ ಅವರ ಕ್ಷೇತ್ರದಿಂದ ಸಭೆ ಪ್ರಾರಂಭಿಸಿದ್ದು ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಹೀಗಾಗಿ 7 ಜಿಪಂ ಹಾಗೂ ಎಲ್ಲ ತಾಪಂ ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಬೇಕು. ಸರ್ಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸಿ ಮತ ಕೇಳಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಶಾಸಕ ಬಸವರಾಜ ರಾಯರಡ್ಡಿ ಅವರು ತಳಕಲ್‌ನ ಎಂಜಿನಿಯರಿಂಗ್‌ ಕಾಲೇಜ್‌, ಗುನ್ನಾಳ ಪಾಲಟೆಕ್ನಿಕ್‌ ಕಾಲೇಜು, ತಳಬಾಳನ ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ನಿಲಯ ಮಂಜೂರು ಮಾಡುವಂತೆ ಕೋರಿದ್ದಾರೆ. ಜೂನ್ ತಿಂಗಳಲ್ಲಿ ಅವುಗಳನ್ನು ಪ್ರಾರಂಭಿಸಲು ಮಂಜೂರಾತಿ ಕೊಡಿಸುತ್ತೇನೆಂದು ಭರವಸೆ ನೀಡಿದರು.

ನೂತನ ಬ್ಲಾಕ್ ಕಾಂಗ್ರೆಸ್‌ ತಾಲೂಕಾಧ್ಯಕ್ಷ ಕೆರಿಬಸಪ್ಪ ನಿಡಗುಂದಿ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪೂರ ಅವರಿಂದ ಪಕ್ಷದ ಧ್ವಜ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ನಿಷ್ಠೆ, ಪ್ರಾಮಾಣಿಕತೆಯಿಂದ ಪಕ್ಷ ಸಂಘಟಿಸುವೆ ಎಂದು ಹೇಳಿದರು.

ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತ ಕೇಳುವ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಯಂಕಣ್ಣ ಯರಾಶಿ, ಸಂಸದ ರಾಜಶೇಖರ ಹಿಟ್ನಾಳ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಮರೇಗೌಡ ಭಯ್ಯಾಪುರ ಮಾತನಾಡಿದರು.

ನೂತನ ಪದಾಧಿಕಾರಿಗಳಾದ ರೇವಣೆಪ್ಪ ಸಂಗಟಿ, ಶರಣಪ್ಪ ಗಾಂಜಿ, ಆನಂದ ಉಳ್ಳಾಗಡ್ಡಿ, ಸಂಗಣ್ಣ ಟೆಂಗಿನಕಾಯಿ, ರಾಘವೇಂದ್ರ ಜೋಶಿ, ವೀರನಗೌಡ ಬಳೂಟಗಿ, ಹನುಮಂತಗೌಡ ಪಾಟೀಲ, ಬಿ.ಎಂ. ಶಿರೂರ, ಮಹೇಶ ಹಳ್ಳಿ, ಮಂಜುನಾಥ ಕಡೇಮನಿ, ಡಾ. ಶಿವನಗೌಡ ದಾನರಡ್ಡಿ ಇದ್ದರು.

Share this article