ಕನ್ನಡಪ್ರಭ ವಾರ್ತೆ ಪುತ್ತೂರು
ಬ್ರಹ್ಮಶ್ರೀ ನಾರಾಯಣ ಗುರುಗಳು ಯಾವುದೇ ಜಾತಿಗೆ ಸೀಮಿತರಾಗಿಲ್ಲ. ಅವರನ್ನು ಜಾತಿಗೆ ಸೀಮಿತಗೊಳಿಸಿದ ಮಾತನಾಡುವುದು ವಿಷಾದನೀಯ. ನಾನು ನಡೆದಂತೆ ನಡೆಯದೆ ನುಡಿದಂತೆ ನಡೆ ಎಂದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳು ಸಾರ್ವಕಾಲಿಕವಾಗಿದೆ ಎಂದು ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಜೇಶ್ ನೆಲ್ಲಿತ್ತಡ್ಕ ಹೇಳಿದ್ದಾರೆ. ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಪುತ್ತೂರು ತಾಲೂಕು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಸಹಯೋಗದಲ್ಲಿ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಸೋಮವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ೧೭೧ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ಮಾತನಾಡಿ, ಜಾತಿಯ ಹೆಸರಿನಲ್ಲಿ ಮೇಲ್ವರ್ಗದವರು ಕೆಳ ವರ್ಗದ ಜನರನ್ನು ಶೋಷಣೆ ಮಾಡುತ್ತಿದ್ದ ಆ ಕಾಲದಲ್ಲಿ ನಾರಾಯಣ ಗುರುಗಳು ಅಹಿಂಸೆಯ ಮೂಲಕ ಅದನ್ನು ಮೆಟ್ಟಿ ನಿಂತರು. ದೇವಾಲಯ ಪ್ರವೇಶ ನಿಷೇಧ ಮಾಡಿರುವುದನ್ನು ವಿರೋಧಿಸಿ ತಾನೇ ಶಿವ ದೇವಾಲಯ ಸ್ಥಾಪಿಸಿದರು ಎಂದರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ ಚಿದಾನಂದ ಸುವರ್ಣ, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಮಾನಾಥ ಶೆಟ್ಟಿ, ತಾ.ಪಂ. ಕಾರ್ಯನಿರ್ವಹಣಾ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ನಗರಸಭೆ ಪೌರಾಯುಕ್ತೆ ವಿದ್ಯಾ ಎಸ್ ಕಾಳೆ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಉಪಸ್ಥಿತರಿದ್ದರು. ತಾಲೂಕು ಕಚೇರಿಯ ದಯಾನಂದ್ ಸ್ವಾಗತಿಸಿದರು. ಶ್ರೀಕಲಾ ನಿರೂಪಿಸಿದರು. ಆರ್‌ಐ ಗೋಪಾಲ ವಂದಿಸಿದರು.