ಇಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ

KannadaprabhaNewsNetwork | Published : Dec 9, 2024 12:46 AM

ಸಾರಾಂಶ

ದೇಶದಾದ್ಯಂತ ಡಿ. 9ರಂದು ಜಂತು ಹುಳು ನಿವಾರಣಾ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದ ಉದ್ಘಾಟನೆ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ.

ಮಡಿಕೇರಿ: ದೇಶದಾದ್ಯಂತ ಡಿ.9 ರಂದು ‘ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ’ (ಎನ್‌ಡಿಡಿ) ಹಾಗೂ ಡಿ.16 ರಂದು ಮಾಪ್ ಅಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, 1-19 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಆಲ್‌ಬೆಂಡಜೋಲ್- 400ಎಂಜಿ ಮಾತ್ರೆಗಳನ್ನು ನೀಡಲು ಉದ್ದೇಶಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯು ಡಿ.9 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ 1-5 ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. 6-19 ವರ್ಷದ ಮಕ್ಕಳಿಗೆ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ.

ಆಶಾ ಕಾರ್ಯಕರ್ತೆಯರು 6-19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 1-2 ವರ್ಷದ ಮಕ್ಕಳಿಗೆ ಅರ್ಧ ಆಲ್‌ಬೆಂಡಜೋಲ್ ಮಾತ್ರೆ ಹಾಗೂ 2-19 ವರ್ಷದ ಮಕ್ಕಳಿಗೆ ಒಂದು ಆಲ್‌ಬೆಂಡಜೋಲ್ ಮಾತ್ರೆಯನ್ನು ನೀಡಬೇಕು.

ಡಿ9ರಂದು ನಡೆಯುವ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯಲ್ಲಿ 1-19 ವರ್ಷದೊಳಗಿನ ಮಕ್ಕಳ ಗುರಿ 1,33,794 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 31,558, ಅಂಗನವಾಡಿಯಿಂದ ಹೊರಗುಳಿದ ಮಕ್ಕಳು 1,661, ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 75,369 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 10,059 ಡಿಗ್ರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 8, 330 ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 1, 746 ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು 5,071 ಇರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Share this article