ಆಗಸ್ಟ್‌ ೧೯ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್: ನ್ಯಾ. ಪ್ರಭಾವತಿ

KannadaprabhaNewsNetwork |  
Published : Sep 12, 2026, 02:00 AM IST
ಸೆ.೧೯ರಂದು ರಾಷ್ಟ್ರೀಯ ಲೋಕ ಅದಾಲತ್ ಸದುಪಯೋಗಪಡಿಸಿಕೊಳ್ಳಿ-ಜಿ.ಪ್ರಭಾವತಿ | Kannada Prabha

ಸಾರಾಂಶ

ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿ ಯೋಗ್ಯ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಅನುಕೂಲವಾಗುವಂತೆ ಸೆ.೧೯ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಭಾವತಿ ಜಿ. ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿ ಯೋಗ್ಯ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಅನುಕೂಲವಾಗುವಂತೆ ಸೆ.೧೯ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಭಾವತಿ ಜಿ. ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಎಡಿಆರ್ ಕಟ್ಟಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ನಡೆಯಲಿದೆ. ಸೆ.೧೯ರಂದು ಮಧ್ಯಾಹ್ನ ೨ರಿಂದ ಸಂಜೆ ೫.೩೦ರವರೆಗೆ ಕಾರ್ಯಕ್ರಮ ನಡೆಯಲಿದೆ ಎಂದರು.

ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸುವವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಾಮರಾಜನಗರ ಹಾಗೂ ಯಳಂದೂರು, ಕೊಳ್ಳೇಗಾಲ ಮತ್ತು ಗುಂಡ್ಲುಪೇಟೆ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು. ಆನ್‌ಲೈನ್, ವಿಡಿಯೋ ಕಾನ್ಫರೆನ್ಸ್, ಇ-ಮೇಲ್, ಎಸ್‌ಎಂಎಸ್, ವಾಟ್ಸ್‌ಆ್ಯಪ್ ಅಥವಾ ಖುದ್ದಾಗಿ ಹಾಜರಾಗಿ ಪ್ರಕರಣಗಳನ್ನು ದಾಖಲಿಸಿಕೊಳ್ಳಬಹುದು ಎಂದು ಹೇಳಿದರು.

ಲೋಕ ಅದಾಲತ್ ನಿಮಿತ್ತ ಚಾಮರಾಜನಗರದ ಎಡಿಆರ್ ಕಟ್ಟಡದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಪೂರ್ವಭಾವಿ ಸಮಾಲೋಚನಾ ಕೇಂದ್ರವನ್ನು ತೆರೆಯಲಾಗಿದೆ. ಉಭಯ ಪಕ್ಷಕಾರರಿಗೆ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದರು.

ರಾಜಿಯಾಗುವ ಪ್ರಕರಣದಲ್ಲಿ ಇಬ್ಬರೂ ಪಕ್ಷಕಾರರ ಒಪ್ಪಿಗೆಯ ಮೇರೆಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಇದರಿಂದ ವಿವಾದಕ್ಕೆ ಅಂತಿಮ ಪರಿಹಾರ ದೊರೆಯುವುದರೊಂದಿಗೆ ಪರಸ್ಪರ ಬಾಂಧವ್ಯ ಉಳಿಸಿಕೊಳ್ಳಲು ಸಹಕಾರಿಯಾಗಲಿದೆ. ನ್ಯಾಯಾಲಯದಲ್ಲಿ ದಾಖಲಾಗದ ವ್ಯಾಜ್ಯಪೂರ್ವ ಪ್ರಕರಣಗಳನ್ನೂ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.

ಲೋಕ ಅದಾಲತ್‌ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಸಾಲ ವಸೂಲಾತಿ, ಚೆಕ್ ಅಮಾನ್ಯ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವಿದ್ಯುತ್ ಮತ್ತು ನೀರಿನ ಶುಲ್ಕ, ಭೂಸ್ವಾಧೀನ, ವೇತನ- ಭತ್ಯೆ ಹಾಗೂ ಪಿಂಚಣಿ, ಗ್ರಾಹಕರ ವ್ಯಾಜ್ಯಗಳು, ರಿಯಲ್ ಎಸ್ಟೇಟ್ ಪ್ರಕರಣಗಳು, ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬಂಧಿಸಿದ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಪ್ರಕರಣಗಳು ಸೇರಿದಂತೆ ರಾಜಿಯೋಗ್ಯ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದರು.

ಕುಟುಂಬ ನ್ಯಾಯಾಲಯದ ಪ್ರಕರಣಗಳಲ್ಲಿಯೂ (ವಿವಾಹ ವಿಚ್ಛೇದನ ಹೊರತುಪಡಿಸಿ) ರಾಜೀ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳಲು ಅವಕಾಶವಿದೆ. ಲೋಕ ಅದಾಲತ್ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಿರುವ ನ್ಯಾಯಾಲಯ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುವುದು. ಕಡಿಮೆ ವೆಚ್ಚದಲ್ಲಿ ಹಾಗೂ ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಈಶ್ವರ್ ಇದ್ದರು.

ಸಹಾಯವಾಣಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ-೧೫೧೦೦, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ: ೧೮೦೦-೪೨೫-೯೦೯೦೦, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಾಮರಾಜನಗರ: ೦೮೨೨೬-೨೨೬೦೨೨, ಯಳಂದೂರು: ೦೮೨೨೬-೨೪೦೨೨೯, ಕೊಳ್ಳೇಗಾಲ: ೦೮೨೨೪-೨೫೬೭೮೮, ಗುಂಡ್ಲುಪೇಟೆ: ೦೮೨೨೯-೨೨೩೨೭೯.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಣೇಶ ಮೂರ್ತಿಗಳ ಮಾರಾಟಕ್ಕೆ ಡಿಜಿಟಲ್ ಟಚ್!
ವೇತನ ಬಿಡುಗಡೆಗೆ ಆಗ್ರಹಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ