ಜು. 11ರಂದು ರಾಷ್ಟ್ರೀಯ ಲೋಕ ಅದಾಲತ್, ಸದುಪಯೋಗಕ್ಕೆ ಕರೆ

KannadaprabhaNewsNetwork |  
Published : Jun 27, 2026, 01:00 AM IST
ಹಾವೇರಿ ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಜು. 11ರಂದು ಜರುಗಲಿದ್ದು, ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಂಡಾಗ ಸಮಯ, ಹಣದ ಉಳಿತಾಯವಾಗುತ್ತದೆ. ಜತೆಗೆ ನೆಮ್ಮದಿ ಕಾಣಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಹೇಳಿದರು.

ಹಾವೇರಿ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಜು. 11ರಂದು ಜರುಗಲಿದ್ದು, ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಂಡಾಗ ಸಮಯ, ಹಣದ ಉಳಿತಾಯವಾಗುತ್ತದೆ. ಜತೆಗೆ ನೆಮ್ಮದಿ ಕಾಣಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ ಅದಾಲತ್‌ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಮೋಟರ್ ಅಪಘಾತ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ವಾಣಿಜ್ಯ ಪ್ರಕರಣಗಳು, ವ್ಯಾಜ್ಯಪೂರ್ವ ಪ್ರಕರಣಗಳು, ಸೇವಾ ಪ್ರಕರಣಗಳು, ರಾಜಿ ಆಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕ ವ್ಯಾಜ್ಯ ಪ್ರಕರಣಗಳು, ಪಾಲುದಾರಿಕಾ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಪ್ರಕರಣಗಳನ್ನು ಲೋಕ ಅದಾಲತ್‌ನ ಮೂಲಕ ತಕ್ಷಣ ಪರಿಹಾರ ಪಡೆದುಕೊಳ್ಳಲು ಒಂದು ಸುವರ್ಣಾವಕಾಶವಾಗಿರುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

45 ಸಾವಿರ ಪ್ರಕರಣ ಬಾಕಿ: ಜಿಲ್ಲಾ ನ್ಯಾಯಾಲಯದಲ್ಲಿ 45,068 ಪ್ರಕರಣಗಳು ಬಾಕಿ ಇದ್ದು, ಈ ಪೈಕಿ 8,262 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಗುರುತಿಸಲಾಗಿದೆ. ಇವುಗಳಲ್ಲಿ ಈಗಾಗಲೇ 283 ಪ್ರಕರಣಗಳು ರಾಜಿ ಹಂತಕ್ಕೆ ಬಂದಿವೆ. ರಾಷ್ಟ್ರೀಯ ಲೋಕ ಅದಾಲತ್ ಕುರಿತು ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ನೀಡಲಾಗಿದೆ ಎಂದರು.

ಸುಪ್ರೀಂ ಕೋರ್ಟನಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ವಾಸವಿದ್ದ ಸ್ಥಳದಲ್ಲಿ ರಾಜೀ ಸಂಧಾನ ಮಾಡಿಕೊಳ್ಳಲು ಆಗಸ್ಟ್ 21ರಿಂದ 23ರ ವರೆಗೆ ಸಮಾದಾನ ಸಮಾರೋಹ-2026ರ ಹೆಸರಿನಲ್ಲಿ ನಡೆಸಲಾಗುತ್ತಿದೆ. ಹಾವೇರಿ ಜಿಲ್ಲೆಗೆ ಸಂಬಂಧಿಸಿದಂತೆ 82 ಪ್ರಕರಣಗಳಿದ್ದು, ಹಾವೇರಿ ತಾಲೂಕಿನ 17 ಪ್ರಕರಣಗಳಿವೆ. ಅವುಗಳಲ್ಲಿ ಎರಡು ಪ್ರಕರಣಗಳು ರಾಜೀ ಹಂತಕ್ಕೆ ಬಂದಿವೆ ಎಂದರು.

ಮಧ್ಯಸ್ಥಿಕೆ-2.0 ಹಾಗೂ ಧಾರವಾಡದಲ್ಲಿ ಕಾಯಂ ಜನತಾ ನ್ಯಾಯಾಲಯ ಇದೆ. ಕಕ್ಷಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಸಂಚಾರ ನಿಯಮ ಉಲ್ಲಂಘನೆಯ ಬಾಕಿ ಪ್ರಕರಣಗಳ ದಂಡ ಮೊತ್ತ ಪಾವತಿಗೆ ಕರ್ನಾಟಕ ಸರ್ಕಾರ ಆದೇಶದಂತೆ ಶೇ.50ರಷ್ಟು ರಿಯಾಯತಿ ದರದಲ್ಲಿ ದಂಡ ಪಾವತಿಸಲು ಜೂ.21ರಿಂದ ಜು.10ರವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥವಾದ ಪ್ರಕರಣಗಳ ಮೇಲೆ ಅಪೀಲ್ ಹೋಗಲು ಅವಕಾಶವಿರುವುದಿಲ್ಲ. ಕಾನೂನು ನೆರವಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿಗಳನ್ನು ಹಾಗೂ ಟೋಲ್ ಫ್ರಿ ಸಂಖ್ಯೆ 15100 ಸಂಪರ್ಕಿಸಬಹುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಉಪಸ್ಥಿತರಿದ್ದರು.

ಲೋಕ ಅದಾಲತ್‌ನ ಪ್ರಯೋಜನಗಳು: ನ್ಯಾಯಾಲಯಗಳಲ್ಲಿ ಉಭಯ ಪಕ್ಷದಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ಮಾಡಲಾಗುವುದು, ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು (ವ್ಯಾಜ್ಯಪೂರ್ವ ಪ್ರಕರಣಗಳು) ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವ್ಯಾಜ್ಯಪೂರ್ವ ಪ್ರಕರಣಗಳಲ್ಲಿ ನ್ಯಾಯಾಲಯ ಶುಲ್ಕ ಕೊಡಬೇಕಾಗಿಲ್ಲ, ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೃತ್ತಿ ಪರಿಣತಿ ಹೆಚ್ಚಿಸಲು ತರಬೇತಿ ಅಗತ್ಯ: ಅನುರಾಧ
ಉಡುಪಿ - ಮಹಿಳಾ ಸಹಕಾರಿಗಳಿಗೆ ತರಬೇತಿ ಕಾರ್ಯಾಗಾರ ಸಂಪನ್ನ