ಕನ್ನಡಪ್ರಭ ವಾರ್ತೆ ದಾವಣಗೆರೆ
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಾ.9ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.ನಗರದ ದೇವರಾಜ ಅರಸು ಬಡಾವಣೆಯ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತೀ ಹೆಚ್ಚು ಪ್ರಕರಣ ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜಿಲ್ಲಾ ಪ್ರಾಧಿಕಾರದಿಂದ ಜಿಲ್ಲಾದ್ಯಂತ ಎಲ್ಲಾ ನ್ಯಾಯಾಲಯಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಲೋಕ್ ಅದಾಲತ್ ಹಮ್ಮಿಕೊಂಡಿವೆ ಎಂದರು.
ನ್ಯಾಯಾಲಯದಲ್ಲಿ ಚಾಲ್ತಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ, ಶೀಘ್ರ ಪರಿಹಾರ ಕಂಡುಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಇದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣ, ಚೆಕ್ ಅಮಾನ್ಯ ಕೇಸ್, ಭೂ ಸ್ವಾಧೀನ ಪರಿಹಾರ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಎಂಎಂಡಿಆರ್ ಕಾಯ್ದೆಯಡಿ ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ಪರಿಹರಿಸಿಕೊಳ್ಳಲು ಅವಕಾಶ ಇದೆ ಎಂದು ಹೇಳಿದರು.ವಿಚ್ಛೇದನ ಹೊರತುಪಡಿಸಿ ಕೌಟುಂಬಿದ ನ್ಯಾಯಾಲಯದ ಪ್ರಕರಣಗಳು, ಪಿಂಚಣಿ ಪ್ರಕರಣ, ವೇತನ, ಭತ್ಯೆಗೆ ಸಂಬಂಧಿಸಿದ ಕೇಸ್ಗಳು, ವಿದ್ಯುತ್, ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣ ಪರಸ್ಪರ ಮಾತುಕತೆ ಮೂಲಕ ಪರಿಹರಿಸಿಕೊಳ್ಳಲು ಅವಕಾಶ ಇದೆ. ರಾಜಿ ಬಗ್ಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ರಾಜಿ ಪೂರ್ವ ಸಮಾಲೋಚನೆಗೆ ಅವಕಾಶ ಕಲ್ಪಿಸಿದೆ. ಸಮಾಲೋಚನೆಗಳಲ್ಲಿ ನ್ಯಾಯಾಧೀಶರು ಮತ್ತು ನುರಿತ ವಕೀಲರು ಭಾಗವಹಿಸಿ, ಪಕ್ಷಗಾರರಿಗೆ ಮಾಹಿತಿ ನೀಡುತ್ತಾರೆ ಎಂದು ತಿಳಿಸಿದರು.
ಜುಲೈ 2023ರಿಂದ ಡಿಸೆಂಬರ್ ವರೆಗೆ ಒಟ್ಟು 3 ಲೋಕ್ ಅದಾಲತ್ ಆಯೋಜಿಸಿದ್ದು, ಒಟ್ಟು 15,300 ಜಾರಿಯಲ್ಲಿದ್ದ ಪ್ರಕರಣಷ 4,93,179 ವ್ಯಾಜ್ಯ ಪೂರ್ವ ಪ್ರಕರಣಗಳು ಮುಕ್ತಾಯಗೊಂಡಿವೆ. ನ್ಯಾಯಾಲಯಗಳಲ್ಲಿ ಪ್ರಕರಣಗಳ ಭಾರವೂ ಪ್ರತಿ ಲೋಕ್ ಅದಾಲತ್ ವೇಳೆಯೂ ಕಡಿಮೆಯಾಗುತ್ತಿದೆ. ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್‌ನ ಅವಕಾಶ ಸಂಪೂರ್ಣ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ.ಕರೆಣ್ಣವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣಕುಮಾರ ಇತರರಿದ್ದರು.
ಪ್ರಾಧಿಕಾರದ ಕಚೇರಿ ಸಂಪರ್ಕಿಸಿ:ಲೋಕ್ ಅದಾಲತ್ ಹಾಗೂ ಇತರೆ ಹೆಚ್ಚಿನ ಮಾಹಿತಿಗೆ ದಾವಣಗೆರೆ ಹಳೆ ನ್ಯಾಯಾಲಯ ಸಂಕೀರ್ಣದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿ(ದೂ-08192-296364), ಆಯಾ ತಾಲೂಕುಗಳ ಕಾನೂನು ಸೇವಾ ಸಮಿತಿಗಳಾದ ಹರಿಹರ(08192-296885), ಹೊನ್ನಾಳಿ(08188- 251732), ಚನ್ನಗಿರಿ(08189-229195) ಜಗಳೂರು(08196-227600)ರಿನಲ್ಲಿ ಪ್ರಾಧಿಕಾರದ ಕಚೇರಿಗೆ ಸಂಪರ್ಕಿಸಬಹುದು.