ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸೆ.19ರಂದು ನಗರದ ತಾಲೂಕು ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಬಹುಕಾಲದಿಂದ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರಿಗೆ ಉತ್ತಮ ಅವಕಾಶ ಕಲ್ಪಿಸಲಾಗಿದೆ ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಸುರಪುರ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸೆ.19ರಂದು ನಗರದ ತಾಲೂಕು ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಬಹುಕಾಲದಿಂದ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರಿಗೆ ಉತ್ತಮ ಅವಕಾಶ ಕಲ್ಪಿಸಲಾಗಿದೆ ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ತಿಳಿಸಿದರು.
ನಗರದ ತಾಲೂಕು ನ್ಯಾಯಾಲಯದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ ಅದಾಲತ್‌ನಲ್ಲಿ ರಾಜಿ ಮಾಡಿಕೊಳ್ಳಬಹುದಾದ ಭೂ ವ್ಯಾಜ್ಯಗಳು, ಆಸ್ತಿ ವಿಭಜನೆ, ಅಡಮಾನ ಹಣ ಹಿಂತಿರುಗಿಸುವಿಕೆ, ಕ್ರಯ ಒಪ್ಪಂದ, ಹಣ ವಸೂಲಾತಿ ದಾವೆಗಳು, ಚೆಕ್ ಬೌನ್ಸ್, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು ಹಾಗೂ ಗಂಡ-ಹೆಂಡತಿ ನಡುವಿನ ಮನಸ್ತಾಪ, ಜೀವನಾಂಶ ಮತ್ತು ದಾಂಪತ್ಯ ಪುನರ್‌ಸ್ಥಾಪನೆಗೆ ಸಂಬಂಧಿಸಿದ ಪ್ರಕರಣಗಳನ್ನು ಪರಸ್ಪರ ಒಪ್ಪಿಗೆಯ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಫಕೀರವ್ವ ಕೇಳಗೇರಿ ಮಾತನಾಡಿ, ವಾಹನ ಅಪಘಾತ ಪರಿಹಾರ ಪ್ರಕರಣಗಳು ಹಾಗೂ ವಿಮೆ ಇಲ್ಲದ ವಾಹನಗಳಿಂದ ಸಂಭವಿಸಿದ ಅಪಘಾತಗಳಿಗೆ ಸಂಬಂಧಿಸಿದಂತೆ ವಾಹನ ಮಾಲೀಕರು ಮತ್ತು ಸಂತ್ರಸ್ತರ ನಡುವೆ ಸೂಕ್ತ ಪರಿಹಾರ ಮೊತ್ತಕ್ಕೆ ರಾಜಿ ಸಂಧಾನ ಮಾಡಿಕೊಳ್ಳಬಹುದು. ಬಾಕಿ ಇರುವ ವಿದ್ಯುತ್ ಬಿಲ್ (ಜೆಸ್ಕಾಂ), ನೀರಿನ ಬಿಲ್, ನಗರಸಭೆ ಹಾಗೂ ತಾಲೂಕು ಪಂಚಾಯಿತಿ ತೆರಿಗೆ ಬಾಕಿ ಪ್ರಕರಣಗಳನ್ನೂ ಬಗೆಹರಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.
ತಾಲೂಕು ಕಾನೂನು ಸೇವಾ ಸಮಿತಿಯ ಸಹಯೋಗದಲ್ಲಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಜನನ ಮತ್ತು ಮರಣ ಪ್ರಮಾಣ ಪತ್ರಗಳ ಪ್ರಕರಣಗಳು ಸೇರಿದಂತೆ ದಾವೆಪೂರ್ವ ಹಾಗೂ ರಾಜಿ ಮಾಡಿಕೊಳ್ಳಬಹುದಾದ ವಿವಿಧ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಕಾನೂನುಬದ್ಧವಾಗಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ಲೋಕ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವುದರಿಂದ ಸಮಯ ಮತ್ತು ಹಣ ಉಳಿತಾಯವಾಗುವುದರ ಜತೆಗೆ ನ್ಯಾಯಾಲಯಕ್ಕೆ ಪದೇಪದೇ ಅಲೆದಾಡುವ ಪರಿಸ್ಥಿತಿಯಿಂದ ಮುಕ್ತಿ ದೊರೆಯಲಿದೆ. ಅದಾಲತ್ ಮೂಲಕ ವ್ಯಾಜ್ಯ ಬಗೆಹರಿಸಿಕೊಂಡರೆ ನ್ಯಾಯಾಲಯದ ಶುಲ್ಕ ವಿಧಿಸಲಾಗುವುದಿಲ್ಲ. ಈಗಾಗಲೇ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನೂ ಮರುಪಾವತಿಸಲಾಗುತ್ತದೆ. ಲೋಕ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥಗೊಂಡ ಬಳಿಕ ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಹೇಳಿದರು.
ಹಿಂದಿನ ಲೋಕ ಅದಾಲತ್‌ನಲ್ಲಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಯಾದಗಿರಿ ಜಿಲ್ಲೆಯಲ್ಲೇ ಸುರಪುರ ಎರಡನೇ ಸ್ಥಾನ ಪಡೆದಿತ್ತು. ಈ ಬಾರಿಯೂ ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.
ಲೋಕ ಅದಾಲತ್ ಕುರಿತು ಗ್ರಾಮ ಪಂಚಾಯಿತಿ, ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರು, ಕಕ್ಷಿದಾರರು ಹಾಗೂ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಷ್ಟ್ರೀಯ ಲೋಕ ಅದಾಲತ್‌ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜೆಎಂಎಫ್‌ಸಿ ನ್ಯಾಯಾಧೀಶರಾದ ಕೆ.ಎಂ. ಪಾಟೀಲ್, ನ್ಯಾಯಾಧೀಶ ಮುದಕಪ್ಪ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.