ಕೂಜಿಮಲೆಗೆ ಬಂದವರು ನಕ್ಸಲ್‌ ಸಂಘಟನೆ ಸದಸ್ಯರು: ಕೊಡಗು ಎಸ್ಪಿ

KannadaprabhaNewsNetwork | Published : Mar 20, 2024 1:16 AM

ಸಾರಾಂಶ

ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಶಸ್ತ್ರ ಸಜ್ಜಿತರಾಗಿ ಮಾ. ೧೭ರ ಸಂಜೆ ವೇಳೆ ಕೂಜಿಮಲೆ ರಬ್ಬರ್ ಎಸ್ಟೇಟ್‌ನ ಅಂಗಡಿಗೆ ಆಗಮಿಸಿ ೨೫ ಕೆ.ಜಿ ಅಕ್ಕಿ ಸಹಿತ ಇತರ ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಈ ವೇಳೆ ಕನ್ನಡ ಭಾಷೆಯಲ್ಲಿ ತಮ್ಮನ್ನು ನಕ್ಸಲ್ ಹೋರಾಟಗಾರರು ಎಂದೇ ಪರಿಚಯಿಸಿಕೊಂಡಿದ್ದರು ಎಂದು ಕೊಡಗು ಎಸ್ಪಿ ರಾಮರಾಜನ್ ಮಂಗಳವಾರ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು-ದಕ್ಷಿಣ ಕನ್ನಡದ ಗಡಿ ಭಾಗದ ಕೂಜಿಮಲೆ ರಬ್ಬರ್ ಎಸ್ಟೇಟ್ ಅಂಗಡಿಗೆ ಬಂದು ದಿನಸಿ ಪದಾರ್ಥ ತೆಗೆದುಕೊಂಡು ಹೋಗಿರುವ ಶಂಕಿತ ವ್ಯಕ್ತಿಗಳು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಎಸ್.ಪಿ. ರಾಮರಾಜನ್, ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಶಸ್ತ್ರ ಸಜ್ಜಿತರಾಗಿ ಮಾ. ೧೭ರ ಸಂಜೆ ವೇಳೆ ಕೂಜಿಮಲೆ ರಬ್ಬರ್ ಎಸ್ಟೇಟ್‌ನ ಅಂಗಡಿಗೆ ಆಗಮಿಸಿ ೨೫ ಕೆ.ಜಿ ಅಕ್ಕಿ ಸಹಿತ ಇತರ ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಈ ವೇಳೆ ಕನ್ನಡ ಭಾಷೆಯಲ್ಲಿ ತಮ್ಮನ್ನು ನಕ್ಸಲ್ ಹೋರಾಟಗಾರರು ಎಂದೇ ಪರಿಚಯಿಸಿಕೊಂಡಿದ್ದಲ್ಲದೇ, ನಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ತಿಳಿಸಿದ್ದಾರೆ ಎಂದು ಹೇಳಿದರು. ತನಿಖೆ ಸಂದರ್ಭ ಅಂಗಡಿ ಮಾಲೀಕರಿಗೆ ಕೆಲವು ಫೋಟೋಗಳನ್ನು ತೋರಿಸಿದ ಸಂದರ್ಭ ಓರ್ವ ವ್ಯಕ್ತಿ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಹೋಲುತ್ತಿರುವುದಾಗಿ ಹೇಳಿದ್ದಾರೆ. ಇನ್ನುಳಿದ ೩ ಮಂದಿಯ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ವಿವರಿಸಿದರು. ಈ ನಕ್ಸಲ್ ಓಡಾಟ ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದು ಎಸ್.ಪಿ. ರಾಮರಾಜನ್ ಸ್ಪಷ್ಟಪಡಿಸಿದರು. ನಕ್ಸಲ್ ಮುಖಂಡ ವಿಕ್ರಂ ಗೌಡ ಸಹಿತ ಇತರ ಮೂರು ಮಂದಿ ಶಸ್ತç ಸಜ್ಜಿತ ವ್ಯಕ್ತಿಗಳಿಗೆ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಕ್ಸಲ್ ನಿಗ್ರಹ ದಳದ ಕಮಾಂಡೋಗಳ ಸಹಿತ ಶ್ವಾನ ದಳ ಮತ್ತು ಡ್ರೋನ್ ಕ್ಯಾಮರಾಗಳನ್ನು ಕೂಡ ಬಳಸಲಾಗುತ್ತಿದೆ. ಕೂಜಿಮಲೆ ಅರಣ್ಯ ಪ್ರದೇಶ ದಟ್ಟ ಕಾಡಿನ ಸಹಿತ ತೀವ್ರ ಕಣಿವೆಗಳಿಂದ ಕೂಡಿರುವ ಹಿನ್ನೆಲೆಯಲ್ಲಿ ಈ ರೀತಿಯ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಕ್ಸಲ್ ನಿಗ್ರಹ ದಳದ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಕೂಡ ಜಿಲ್ಲೆಗೆ ಆಗಮಿಸಿ ಕೂಂಬಿಂಗ್ ಕಾರ್ಯಾಚರಣೆ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಕೂಜಿಮಲೆ ರಬ್ಬರ್ ಎಸ್ಟೇಟ್‌ನ ಅಂಗಡಿಗೆ ಬಂದಿರುವ ನಕ್ಸಲರು ಎತ್ತ ಕಡೆ ತೆರಳಿರುವ ಸಾಧ್ಯತೆ ಇದೆ ಎಂದು ಗುಪ್ತಚರ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ. ಈ ಕುರಿತು ನೆರೆ ಜಿಲ್ಲೆಗಳು ಮತ್ತು ಕೇರಳ ರಾಜ್ಯದ ಗುಪ್ತಚರ ಇಲಾಖೆಗಳಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ವಿವರಿಸಿದರು. ಈ ಹಿಂದಿನ ಪ್ರಕರಣಗಳನ್ನೂ ಗಮನಿಸಲಾಗುತ್ತಿದ್ದು, ಇದೀಗ ಕಂಡು ಬಂದಿರುವ ನಕ್ಸಲರ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ ಅವರು, ನಕ್ಸಲ್ ಮುಖಂಡ ವಿಕ್ರಂ ಗೌಡ ವಿರುದ್ದ ೨೦೧೮ರಲ್ಲಿ ಸಂಪಾಜೆ ಭಾಗದಲ್ಲಿ ಗ್ರಾಮಸ್ಥರಿಗೆ ಬೆದರಿಕೆ ಒಡ್ಡಿದ ಬಗ್ಗೆಯೂ ೧ ಪ್ರಕರಣ ದಾಖಲಾಗಿದೆ. ನಕ್ಸಲ್ ನಿಗ್ರಹ ದಳದ ತಂಡದೊಂದಿಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ೨೫ ಮಂದಿ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಿ ಇಂತಹ ಕಠಿಣ ಪರಿಸ್ಥಿತಿಗಳನ್ನು ಎದುರಿಸಲು ಸಜ್ಜುಗೊಳಿಸಲಾಗಿದೆ ಎಂದು ವಿವರಿಸಿದರು. ಅಪ್ರಾಪ್ತನಿಂದ ಅಪರಾಧ: ಸುಂಟಿಕೊಪ್ಪ ಹೇರೂರು ರೆಸಾರ್ಟ್ ಒಂದರ ಬಳಿ ಅಪ್ರಾಪ್ತ ಬಾಲಕ ಚಲಾಯಿಸಿದ ಕಾರು ಅಪಘಾತಕ್ಕೀಡಾಗಿ ಇಬ್ಬರು ಮಹಿಳೆಯರಿಗೆ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನ ಪೋಷಕರ ವಿರುದ್ದ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಎಸ್.ಪಿ. ರಾಮರಾಜನ್ ಮಾಹಿತಿ ನೀಡಿದರು. ಬಾಲಕ ೯ನೇ ತರಗತಿ ವಿದ್ಯಾರ್ಥಿಯಾಗಿದ್ದು, ಆತನ ಬಳಿ ಡ್ರೈವಿಂಗ್ ಲೈಸನ್ಸ್ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಆತನ ಪೋಷಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಅಪಘಾತ ಪ್ರಕರಣದ ತನಿಖೆಯ ವೇಳೆ ಕಾರು ಚಲಾಯಿಸಿದ ಬಾಲಕ ಸಹಿತ ಇತರರನ್ನು ಮಾದಕ ವಸ್ತು ಸೇವನೆಯ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆ ವರದಿಯನ್ನು ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಕುಶಾಲನಗರದ ಬಸವನಹಳ್ಳಿ ಸಮೀಪದ ತೆಪ್ಪದಕಂಡಿ ಎಂಬಲ್ಲಿಗೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಪಿರಿಯಾಪಟ್ಟಣ ತಾಲೂಕಿನ ದೊಡ್ಡಹೊಸೂರು ಗ್ರಾಮದ ನಿವಾಸಿ ಬಸವರಾಜು ಎಂಬಾತನ ವಿರುದ್ದ ಈ ಮೊದಲು ಪ್ರಕರಣವೊಂದು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಆತನ ಮೇಲೆ ತೀವ್ರ ನಿಗಾ ಇಟ್ಟಿದ್ದ ಪೊಲೀಸರು. ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು.

Share this article