ನಾಳೆಯಿಂದ ನಾಯಕನಹಟ್ಟಿ ತಿಪ್ಪೇಶನ ಜಾತ್ರೆ, 26ಕ್ಕೆ ರಥೋತ್ಸವ: ಎಂ.ಕಾರ್ತಿಕ್

KannadaprabhaNewsNetwork | Published : Mar 18, 2024 1:47 AM

ಸಾರಾಂಶ

ಮಾರ್ಚ್ 19ರಿಂದ ಏಪ್ರಿಲ್ 1ರವರೆಗೆ ನಡೆಯಲಿದ್ದು, ದೊಡ್ಡ ರಥೋತ್ಸವ ಮಾರ್ಚ್ 26ರಂದು ನಡೆಯಲಿದೆ.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ನಾಯಕನಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಇಲಾಖೆಯ ವಸ್ತು ಪ್ರದರ್ಶನ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು.

ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯ ಅಂಗವಾಗಿ ವಸ್ತು ಪ್ರದರ್ಶನ ಕಾರ್ಯಕ್ರಮ ನೆರವೇರಿಸುವ ನೆರವೇರಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಾತ್ರೆಯು ಮಾರ್ಚ್ 19ರಿಂದ ಏಪ್ರಿಲ್ 1ರವರೆಗೆ ನಡೆಯಲಿದ್ದು, ದೊಡ್ಡ ರಥೋತ್ಸವ ಮಾರ್ಚ್ 26ರಂದು ನಡೆಯಲಿದೆ. ಜಾತ್ರೆಯ ಅಂಗವಾಗಿ ವಿವಿಧ ಇಲಾಖೆಗಳು ವಸ್ತು ಪ್ರದರ್ಶನ ಏರ್ಪಡಿಸ ಬೇಕು. ಆರೋಗ್ಯ ಇಲಾಖೆಯವರು ಸ್ವಚ್ಛತೆ ಹಾಗೂ ಬೇಸಿಗೆಯಲ್ಲಿ ಕಂಡುಬರುವ ರೋಗಗಳ ಕುರಿತು ಮುಂಜಾಗ್ರತಾ ಕ್ರಮಗಳ ಕುರಿತು ಸಾರ್ವಜಕರಿಗೆ ಮಾಹಿತಿ ಶಿಕ್ಷಣ ನೀಡಬೇಕು ಎಂದರು. ಜಿಲ್ಲಾ ಪಂಚಾಯಿತಿಯವರು ಸ್ವ ಸಹಾಯ ಗುಂಪಿನ ಮಹಿಳೆಯರಿಂದ ತಯಾರಿತ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯಬೇಕು ಎಂದು ಹೇಳಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿಇರುವುದರಿಂದ ವಸ್ತು ಪ್ರದರ್ಶನ ದಲ್ಲಿ ಯಾವುದೇ ಜನಪ್ರತಿನಿಧಿಗಳ ಭಾವಚಿತ್ರ ಹಾಕಬಾರದು ಹಾಗೂ ನೀತಿ ಸಂಹಿತೆಯ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ಕಾಶೀ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ ಚೌಧರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಕೈಗಾರಿಕೆ ಇಲಾಖೆ ಉಪನಿರ್ದೇಶಕ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share this article