ಮೇ 3ರಂದು ನೀಟ್ ಪರೀಕ್ಷೆ, ಲೋಪವಾಗದಂತೆ ಎಚ್ಚರಿಕೆ ವಹಿಸಲು ಸೂಚನೆ

KannadaprabhaNewsNetwork |  
Published : Apr 29, 2026, 02:15 AM IST
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ನೀಟ್ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿದರು. | Kannada Prabha

ಸಾರಾಂಶ

ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ನೀಟ್ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿದರು.

ಹಾವೇರಿ: ಜಿಲ್ಲೆಯಲ್ಲಿ 2026ನೇ ಸಾಲಿನ ನೀಟ್ ಪರೀಕ್ಷೆ ಮೇ 3ರಂದು ನಗರದ ಐದು ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ನೀಟ್ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಎಲ್ಲರೂ ಪರೀಕ್ಷಾ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದರು.ನೀಟ್ ಪರೀಕ್ಷೆ ಬಹಳ ಸೂಕ್ಷ್ಮವಾಗಿದೆ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಸ್ವ್ಕಾಡ್‌ಗಳು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕೆಲಸಮಾಡಬೇಕು ಎಂದು ನಿರ್ದೇಶನ ನೀಡಿದರು.ಸಿಸಿ ಟಿವಿ-ಜಾಮರ್: ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಕೆ, ಜಾಮರ್ ಹಾಗೂ ಕೊಠಡಿಯೊಳಗೆ ಗಡಿಯಾರ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದರು.ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ತಪಾಸಣಾ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಬಂದೋಬಸ್ತ್: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಮಾತನಾಡಿ, ಪರೀಕ್ಷೆಗಳು ಪಾರದರ್ಶಕವಾಗಿ ಶಾಂತಯುತವಾಗಿ ನಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಉಪಯೋಗಿಸುವ ಕೊಠಡಿಗಳನ್ನು ಹೊರತುಪಡಿಸಿ ಹೆಚ್ಚುವರಿ ಕೊಠಡಿಗಳಿಗೆ ಬೀಗಹಾಕಬೇಕು ಎಂದು ಸಲಹೆ ನೀಡಿದರು. ಫ್ರಿಸ್ಕಿಂಗ್: ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್ ಮಾತನಾಡಿ, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಫ್ರಿಸ್ಕಿಂಗ್ ಮಾಡಲಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮೊದಲು ಅವರ ತಪಾಸಣೆ ನಡೆಸಬೇಕು ಎಂದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಾಚಾರ್ಯರು ಉಪಸ್ಥಿತರಿದ್ದರು.ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ: ನಿಗದಿಪಡಿಸಿದ ವಸ್ತ್ರ ಸಂಹಿತೆ(ಡ್ರೆಸ್ ಕೋಡ್)ನ್ನು ಪ್ರತಿಯೊಬ್ಬ ಅಭ್ಯರ್ಥಿಯು ಕಡ್ಡಾಯವಾಗಿ ಪಾಲಿಸಬೇಕು. ಉದ್ದ ತೋಳಿನ ಹಾಗೂ ತಲೆ ಮುಚ್ಚುವ ಉಡುಪು ಧರಿಸಿ ಬರುವಂತಿಲ್ಲ. ಬೆಲ್ಟ್, ಟೋಪಿ ಹಾಗೂ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ(ಮಂಗಳಸೂತ್ರ ಹೊರತು ಪಡಿಸಿ). ಶೂ ಹಾಕಿಕೊಂಡು ಬರುವಂತಿಲ್ಲ, ಸಾದಾ ಚಪ್ಪಲಿಗಳನ್ನು ಧರಿಸಿರಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಪರೀಕ್ಷಾ ಕೇಂದ್ರಗಳು: ಜಿಲ್ಲೆಯಲ್ಲಿ 2,360 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಹಾವೇರಿ ನಗರದ ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕರ ಪದವಿ ಪೂರ್ವ ಕಾಲೇಜು, ದೇವಗಿರಿ ಸರ್ಕಾರಿ ಎಂಜಿನೀಯರಿಂಗ್ ಕಾಲೇಜ್‌ ಹಾಗೂ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯಲಿವೆ.ಎಲೆಕ್ಟ್ರಾನಿಕ್ ಉಪಕರಣಗಳ ನಿಷೇಧ: ಪರೀಕ್ಷಾರ್ಥಿಗಳು ಹಾಗೂ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಎಲೆಕ್ಟ್ರಾ ನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಇಯರ್ ಫೋನ್‌ಗಳು, ಮೈಕ್ರೋಫೋನ್, ಪೇಜರ್, ವೈರಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲಕ್ಯುಲೇಟರ್ ಹಾಗೂ ಗಡಿಯಾರಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ಸದೃಢ: ವಿವೇಕ ಯಾವಗಲ್‌
ವಿಮಾನ ನಿಲ್ದಾಣಗಳಿಗೆ ಸಾಧಕರ ಹೆಸರಿಡಲು ಆಗ್ರಹ