ಅಂಬೇಡ್ಕರ್ ಪ್ರತಿಮೆ ಮುಂದೆ ಧರಣಿ । ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್-ಯುಜಿ-೨೦೨೬ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಉಂಟಾಗಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಿ, ಪ್ರಕರಣದ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂಸದರಾದ ಶ್ರೇಯಸ್ ಎಂ. ಪಟೇಲ್ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ರವಾನಿಸಿದರು.
ಇದೆ ವೇಳೆ ಸಂಸದರು ಮಾತನಾಡಿ, ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಪ್ರವೇಶ ಪಡೆಯಲು ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಹಲವು ವರ್ಷಗಳ ಕಾಲ ಕಠಿಣ ಪರಿಶ್ರಮದೊಂದಿಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಗಂಭೀರ ಆರೋಪಗಳು ಕೇಳಿಬಂದಿರುವುದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಾಢ ಪರಿಣಾಮ ಬೀರಿದೆ ಎಂದರು.ಸುಮಾರು ೨೩ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದು, ಪರೀಕ್ಷೆ ರದ್ದುಗೊಂಡಿರುವ ಪರಿಣಾಮ ವಿದ್ಯಾರ್ಥಿಗಳು ಮಾನಸಿಕ ಒತ್ತಡ, ಅನಿಶ್ಚಿತತೆ ಮತ್ತು ಭವಿಷ್ಯದ ಆತಂಕವನ್ನು ಎದುರಿಸುವಂತಾಗಿದೆ. ಮರು ಪರೀಕ್ಷೆಯ ಸಾಧ್ಯತೆ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ.
ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಉಳಿಸಿಕೊಳ್ಳುವ ದೃಷ್ಟಿಯಿಂದ ಕೇಂದ್ರ ಸರ್ಕಾರ ತ್ವರಿತ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಈ ಪ್ರಕರಣದ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.ಈ ವೇಳೆ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್, ಮುಖಂಡರಾದ ದೇವರಾಜೇಗೌಡ, ತಾರಾಚಂದನ್, ರಘು ದಾಸರ ಕೊಪ್ಪಲು, ರಾಮಚಂದ್ರ, ಇಸ್ಮಾಯಿಲ್ ಇತರರು ಉಪಸ್ಥಿತರಿದ್ದರು.