ಹೊಸಪೇಟೆ: ಮಹಿಳೆಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದರ ಜತೆಗೆ ವಿವಿಧ ಇಲಾಖೆಗಳಲ್ಲಿನ ಲೋಪದೋಷ ಸರಿಪಡಿಸಿ ಸಾರ್ವಜನಿಕರಿಗೆ ಸಮರ್ಪಕ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ಇಲಾಖೆ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯವಾಗಿದ್ದು, ಪ್ರಕರಣಗಳು ವರದಿಯಾಗದಿದ್ದರೂ ನಿಯಮಿತವಾಗಿ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚಿಸಿದರು.
ಸಮೃದ್ಧ ಸಂಪನ್ಮೂಲ ಹೊಂದಿರುವ ವಿಜಯನಗರ ಜಿಲ್ಲೆ ಇನ್ನಷ್ಟು ಅಭಿವೃದ್ಧಿಪಡಿಸುವ ಅಗತ್ಯವಿದೆ. ಯಾವುದೇ ರೀತಿಯ ಸಮಸ್ಯೆ ಅಥವಾ ಲೋಪದೋಷ ಕಂಡುಬಂದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿರುವುದು ಬೇಸರದ ಸಂಗತಿಯಾಗಿದ್ದು, ಈ ದುರ್ವ್ಯವಸ್ಥೆಗೆ ಕಡಿವಾಣ ಹಾಕಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಗಡಿ ಭಾಗ ಹಾಗೂ ಗಣಿ ಬಾಧಿತ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಂತ್ರಸ್ತರನ್ನು ಶೀಘ್ರ ಸ್ಥಳಾಂತರಿಸಿ ಸೂಕ್ತ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಬೇಕು. ಈ ಪ್ರಕ್ರಿಯೆ ಪೂರ್ಣಗೊಳಿಸಲು ಎಷ್ಟು ಕಾಲಾವಕಾಶ ಬೇಕಾಗುತ್ತದೆ ಎಂಬುದರ ಕುರಿತು ಮಾಹಿತಿ ಪಡೆದರು.ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಈಗಾಗಲೇ ನಿವೇಶನ ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಂಪಿ ವಿಶ್ವವಿದ್ಯಾಲಯದ ವಸತಿ ನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ವಚ್ಛತೆಯ ಕೊರತೆ ಹಾಗೂ ಅಲ್ಲಿನ ಅವ್ಯವಸ್ಥೆ ಕಂಡು ಮನಸ್ಸಿಗೆ ನೋವಾಗಿದೆ. ಇಂತಹ ಸಮಸ್ಯೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು.
ಸಂಚಾರಿ ಕುರಿಗಾಹಿಗಳಿಗೆ ದೊರೆಯಬೇಕಾದ ಅಗತ್ಯ ಔಷಧಿ, ಗುರುತಿನ ಚೀಟಿಗಳು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ಗಂಭೀರ ಆರೋಪ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕುರಿಗಾಹಿಗಳ ಸಮಸ್ಯೆ ತಕ್ಷಣ ಪರಿಹರಿಸಿ ಅವರಿಗೆ ದೊರೆಯಬೇಕಾದ ಎಲ್ಲ ಸೌಲಭ್ಯ ವಿಳಂಬವಿಲ್ಲದೆ ಒದಗಿಸಬೇಕು.
ಇದಕ್ಕೆ ಪ್ರತಿಕ್ರಿಯಿಸಿದ ಸಂಬಂಧಪಟ್ಟ ಅಧಿಕಾರಿಗಳು, ಹೊಸಪೇಟೆ ತಾಲೂಕಿನಲ್ಲಿ ಮೂರು ಎಕರೆ ಜಾಗ ಗುರುತಿಸಲಾಗಿದ್ದು, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.