ಕನ್ನಡಪ್ರಭ ವಾರ್ತೆ ಆಳಂದ
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕು ಆರೋಗ್ಯ ಇಲಾಖೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನ, ಸಾಧನೆಯ ಗುರಿ ಹಾಗೂ ಆಸ್ಪತ್ರೆವಾರು ಪ್ರಗತಿಯನ್ನು ಸಮಗ್ರವಾಗಿ ಪರಿಶೀಲಿಸಿದರು.ಸಭೆಯಲ್ಲಿ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಸಾರ್ವಜನಿಕ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಪ್ರತ್ಯೇಕವಾಗಿ ಮಾಹಿತಿ ಪಡೆದುಕೊಂಡ ಅವರು, ಪ್ರತಿ ಆರೋಗ್ಯ ಕೇಂದ್ರಕ್ಕೆ ನಿಗದಿಪಡಿಸಿರುವ ಗುರಿ, ಸಾಧಿಸಿರುವ ಪ್ರಗತಿ ಮತ್ತು ಬಾಕಿ ಉಳಿದಿರುವ ಕಾರ್ಯಗಳ ಕುರಿತು ವಿವರವಾಗಿ ಚರ್ಚಿಸಿದರು. ಕೇವಲ ಅಂಕಿ-ಅಂಶಗಳ ವರದಿ ನೀಡುವುದರಿಂದ ಸಾಲದು. ಕ್ಷೇತ್ರಮಟ್ಟದಲ್ಲಿ ಕಾರ್ಯಕ್ರಮಗಳು ಎಷ್ಟರಮಟ್ಟಿಗೆ ಅನುಷ್ಠಾನಗೊಂಡಿವೆ ಎಂಬುದನ್ನು ಪರಿಶೀಲಿಸಿ ವಾಸ್ತವಿಕ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಆರೋಗ್ಯ ಇಲಾಖೆಯ ಮಾತೃ ಮತ್ತು ಶಿಶು ಆರೋಗ್ಯ ಸೇವೆಗಳು, ಕುಟುಂಬ ಕಲ್ಯಾಣ ಕಾರ್ಯಕ್ರಮಗಳು, ಕ್ಷಯರೋಗ ನಿಯಂತ್ರಣ, ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಸೇರಿದಂತೆ ಎಲ್ಲ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ನಿಗದಿತ ಗುರಿ ತಲುಪದ ಆರೋಗ್ಯ ಕೇಂದ್ರಗಳ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಬಾಕಿ ಉಳಿದಿರುವ ಗುರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಕೆಲಸ ನಿರ್ವಹಿಸಬೇಕು. ಮೇಲಧಿಕಾರಿಗಳ ಸಭೆಗೆ ಹಾಜರಾಗಿ ಮಾಹಿತಿ ನೀಡುವುದಷ್ಟೇ ಕರ್ತವ್ಯವಲ್ಲ, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವುದೇ ಇಲಾಖೆಯ ಮುಖ್ಯ ಉದ್ದೇಶ ಎಂದು ಕಿವಿಮಾತು ಹೇಳಿದರು.ವಿವಿಧ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಂಡುಬರುವ ಲೋಪದೋಷಗಳನ್ನು ತಕ್ಷಣ ಸರಿಪಡಿಸಬೇಕು. ಕ್ಷೇತ್ರಮಟ್ಟದ ಸಿಬ್ಬಂದಿ ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ನಿಯಮಿತವಾಗಿ ಭೇಟಿ ನೀಡಿ ಆರೋಗ್ಯ ಸೇವೆಗಳ ಸ್ಥಿತಿಗತಿ ಪರಿಶೀಲಿಸಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತೆ ನೋಡಿಕೊಳ್ಳಬೇಕು. ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಸಕಾಲದಲ್ಲಿ ಚಿಕಿತ್ಸೆ ಮತ್ತು ಅಗತ್ಯ ಸೇವೆಗಳು ದೊರೆಯುವಂತೆ ವೈದ್ಯಾಧಿಕಾರಿಗಳು ಮೇಲ್ವಿಚಾರಣೆ ವಹಿಸಬೇಕು ಎಂದು ಡಾ. ಮಹಾಂತಪ್ಪ ಸಲಹೆ ನೀಡಿದರು.ಪ್ರತಿ ಆರೋಗ್ಯ ಕೇಂದ್ರದ ಕಾರ್ಯಕ್ಷಮತೆ ಮತ್ತು ಸಿಬ್ಬಂದಿಯ ಸಾಧನೆಯನ್ನು ನಿರಂತರವಾಗಿ ಪರಿಶೀಲಿಸಲಾಗುವುದು. ಕರ್ತವ್ಯದಲ್ಲಿ ನಿಷ್ಕಾಳಜಿ, ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬ ಅಥವಾ ಸುಳ್ಳು ಮಾಹಿತಿ ನೀಡಿರುವುದು ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು. ಆರೋಗ್ಯ ಇಲಾಖೆಯ ಎಲ್ಲ ಕಾರ್ಯಕ್ರಮಗಳಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಆಳಂದ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಉಮಾಕಾಂತ ರಾಜಗಿರಿ ಆಸ್ಪತ್ರೆಯ ಕಾರ್ಯಚಟುವಟಿಕೆಗಳು ಹಾಗೂ ವಿವಿಧ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಸಮರ್ಪಕ ವರದಿ ಮಂಡಿಸಿದರು. ಆಳಂದ ನಗರ ಪ್ರಾಥಮಿಕ ಆರೋಗ್ಯಾಧಿಕಾರಿ ಡಾ. ಸಂಗೀತಾ ಪಾಟೀಲ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ವಿವಿಧ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು.