ಬ್ಯಾಡಗಿ: ಪಟ್ಟಣದಲ್ಲಿ (ಜಿಪಂ ಇಲಾಖೆ ಕಚೇರಿ ಜಾಗದಲ್ಲಿ) ಸುಸಜ್ಜಿತ ಹೊಸ ಬಸ್ ನಿಲ್ದಾಣದ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದ್ದಾರೆ.
ಹೊಸ ಬಸ್ ನಿಲ್ದಾಣ ಅತ್ಯಗತ್ಯ: ಬ್ಯಾಡಗಿ ಪಟ್ಟಣ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಜನಸಂಖ್ಯೆ ಈಗಾಗಲೇ 40 ಸಾವಿರ ಗಡಿ ದಾಟಿದೆ. ಪ್ರತಿದಿನ ಸಾವಿರಾರು ವಾಹನಗಳು ಪಟ್ಟಣಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಪ್ರಸ್ತುತ ಬಸ್ ನಿಲ್ದಾಣ ತುಂಬಾ ಚಿಕ್ಕದಾಗಿದೆ, ಹೀಗಾಗಿ ಹೊಸ ಬಸ್ ನಿಲ್ದಾಣ ನಿರ್ಮಾಣ ಅವಶ್ಯಕವಾಗಿದೆ ಎಂದು ಹೇಳಿದರು.ನೀರಿನ ಕೊರತೆಗೆ ಅಧಿಕಾರಿಗಳೇ ಹೊಣೆ: ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಪಿಡಿಒ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಅಗತ್ಯವಿದ್ದಲ್ಲಿ ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಬೇಕು. ನೀರಿನ ಸಮಸ್ಯೆ ಉಂಟಾದರೆ ಅಧಿಕಾರಿಗಳೇ ಹೊಣೆ ಎಂದು ಎಚ್ಚರಿಸಿದರು.ಸಮರ್ಪಕ ವಿದ್ಯುತ್ ಒದಗಿಸಿ: ಹೆಸ್ಕಾಂ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ವಿದ್ಯುತ್ ವ್ಯತ್ಯಯ ಉಂಟಾದಲ್ಲಿ ಕೂಡಲೇ ಕಂಬಗಳ ದುರಸ್ತಿ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಕನಿಷ್ಠ 7 ಗಂಟೆಗಳ ವಿದ್ಯುತ್ ಪೂರೈಕೆ ಹಾಗೂ ನಗರ ಪ್ರದೇಶದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು.ಕುಡಿಯುವ ನೀರಿನ ಘಟಕ ದುರಸ್ತಿ
ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ದುರಸ್ತಿ ಮಾಡಿಸಿ ಜನರಿಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು.ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲಿ: ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನರಿಗೆ ಸಕಾಲದಲ್ಲಿ ಸಿಗುವುದಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ, ಇದಕ್ಕೆ ಅವಕಾಶ ಕೊಡದೆ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು ಜನರಿಗೆ ಸೇವೆ ನೀಡಬೇಕು. ಜನರನ್ನು ಕಚೇರಿಗೆ ಅಲೆದಾಡಿಸುವುದನ್ನು ನಿಲ್ಲಿಸಬೇಕು ಎಂದು ಖಡಕ್ ಸೂಚನೆ ನೀಡಿದರು...ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.ತಹಸೀಲ್ದಾರರು, ಪಿಡಿಇ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಯಾವುದೇ ಸಬೂಬು ಹೇಳದೇ ಉಳಿದಿರುವ ಕಂದಾಯ ಪ್ರಕರಣಗಳನ್ನು ಕೂಡಲೇ ಇತ್ಯರ್ಥಗೊಳಿಸಬೇಕು, ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ ಗಮನ ವಹಿಸಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.