ಮಳಲಿ ಲಕ್ಷ್ಮೀದೇವಿ ದೇಗುಲದ ಆಡಳಿತಕ್ಕೆ ಹೊಸ ನಿಯಮಾವಳಿ

KannadaprabhaNewsNetwork |  
Published : Sep 19, 2026, 01:45 AM IST
18ಎಚ್ಎಸ್ಎನ್11 :  | Kannada Prabha

ಸಾರಾಂಶ

ಹೊಳೆನರಸೀಪುರ ತಾಲೂಕಿನ ಹಳೇಕೋಟೆ ಹೋಬಳಿಯ ಮಳಲಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಾಲಯದ ಆಡಳಿತ ಮತ್ತು ಪೂಜಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗದಂತೆ ಆವರಣದ ಚಟುವಟಿಕೆಗಳ ಮೇಲೆ ನಿಗಾ ವಹಿಸುವುದರ ಜೊತೆಗೆ ಅರ್ಚಕರ ನೇಮಕ ಹಾಗೂ ಕಾಣಿಕೆ ನಿರ್ವಹಣೆಯನ್ನು ನಿಯಮ ಬದ್ಧಗೊಳಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಜಗದೀಶ್ ಗಂಗಣ್ಣ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಹೊಳೆನರಸೀಪುರ ತಾಲೂಕಿನ ಹಳೇಕೋಟೆ ಹೋಬಳಿಯ ಮಳಲಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಾಲಯದ ಆಡಳಿತ ಮತ್ತು ಪೂಜಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗದಂತೆ ಆವರಣದ ಚಟುವಟಿಕೆಗಳ ಮೇಲೆ ನಿಗಾ ವಹಿಸುವುದರ ಜೊತೆಗೆ ಅರ್ಚಕರ ನೇಮಕ ಹಾಗೂ ಕಾಣಿಕೆ ನಿರ್ವಹಣೆಯನ್ನು ನಿಯಮ ಬದ್ಧಗೊಳಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಜಗದೀಶ್ ಗಂಗಣ್ಣ ತಿಳಿಸಿದರು.

ಜಿಲ್ಲಾ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ದೇವಸ್ಥಾನದ ಅರ್ಚಕರ ನೇಮಕ ಹಾಗೂ ಪೂಜಾ ಕಾರ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ದೇವಸ್ಥಾನದ ಆವರಣದಲ್ಲಿ ಅರ್ಚಕರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ವಂಶಪಾರಂಪರ್ಯವಾಗಿ ಸೇವೆ ಸಲ್ಲಿಸುತ್ತಿದ್ದ ೨೪ ಅರ್ಚಕರ ಪೈಕಿ ಕೆಲವರು ಮೃತಪಟ್ಟಿದ್ದು, ಉಳಿದ ಅರ್ಚಕರು ಹಾಗೂ ಮೃತರ ವಾರಸುದಾರರ ಅರ್ಹತೆ ಮತ್ತು ಕಾನೂನುಬದ್ಧ ವಾರಸುದಾರಿಕೆಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಅರ್ಹ ದಾಖಲೆಗಳನ್ನು ಸಲ್ಲಿಸಲು ಸಂಬಂಧಪಟ್ಟವರಿಗೆ ಕಾಲಾವಕಾಶ ನೀಡಲಾಗಿದೆ. ಸರ್ಕಾರದ ಆದೇಶ, ಸುತ್ತೋಲೆ ಹಾಗೂ ನಿಯಮಗಳನ್ನು ಉಲ್ಲಂಘಿಸಿ ದೇವಸ್ಥಾನದ ಪೂಜಾ ವ್ಯವಸ್ಥೆಯಲ್ಲಿ ಯಾರಾದರೂ ನಡೆದುಕೊಂಡರೆ ಅವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ದೇವಸ್ಥಾನದ ಆವರಣದಲ್ಲಿ ಆನ್‌ಲೈನ್ ಸಿಸಿಟಿವಿ ವ್ಯವಸ್ಥೆ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದೇವಸ್ಥಾನದಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಲಿದ್ದು, ಅಗತ್ಯ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸ್ ಠಾಣೆಯವರು ದೃಶ್ಯಾವಳಿಗಳನ್ನು ಪರಿಶೀಲಿಸಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗುವುದು. ನಿಯಮ ಉಲ್ಲಂಘನೆ ಅಥವಾ ಅಹಿತಕರ ಚಟುವಟಿಕೆ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದೇವಸ್ಥಾನಕ್ಕೆ ಭಕ್ತರು ನೀಡುವ ಕಾಣಿಕೆಗಳ ಸಂಗ್ರಹ ಮತ್ತು ನಿರ್ವಹಣೆಯಲ್ಲೂ ಪಾರದರ್ಶಕತೆ ತರಲು ನಿರ್ಧರಿಸಲಾಗಿದೆ. ಕಾಣಿಕೆ ಸಂಗ್ರಹ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿರುವ ವ್ಯವಸ್ಥೆ ಮಾಡಲಾಗುವುದು. ಸಂಗ್ರಹವಾದ ಕಾಣಿಕೆಗಳ ವಿವರವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿ, ಭಕ್ತರಿಗೆ ರಸೀದಿ ನೀಡಲಾಗುವುದು. ಪ್ರತಿ ತಿಂಗಳು ದೇವಸ್ಥಾನದ ಆದಾಯ ಮತ್ತು ವೆಚ್ಚದ ಲೆಕ್ಕಪತ್ರವನ್ನು ಪರಿಶೀಲಿಸಿ, ಅದರ ವಿವರವನ್ನು ಗ್ರಾಮಸ್ಥರ ಮುಂದಿಡುವ ವ್ಯವಸ್ಥೆ ಮಾಡಲಾಗುವುದು. ದೇವಸ್ಥಾನದ ಹಣಕಾಸು ವ್ಯವಹಾರಗಳು ಸಾರ್ವಜನಿಕವಾಗಿ ಸ್ಪಷ್ಟವಾಗಿರಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ. ದೇವಸ್ಥಾನದ ಆವರಣದಲ್ಲಿ ಹೈಟೆಕ್ ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಅಂದಾಜು ಸಿದ್ಧಪಡಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಅನುಮೋದನೆ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ದೇವಸ್ಥಾನದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮೇಲೂ ಗಮನ ಹರಿಸಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಾಪ ಅಧ್ಯಕ್ಷ ಚುನಾವಣೆಗೆ ಜಾಣಗೆರೆ ವೆಂಕಟರಾಮಯ್ಯ ಸ್ಪರ್ಧೆ
ದೇಶದ ಅಭಿವೃದ್ಧಿಗೆ ವಿಶ್ವೇಶ್ವರಯ್ಯ ಕೊಡುಗೆ ಅಪಾರ