ಯೋಗೇಶ್ವರ್‌ ವಿರುದ್ಧ ನಿಖಿಲ್‌ ದೋಸ್ತಿ ಅಭ್ಯರ್ಥಿ - 3ನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದ ಸಚಿವ ಎಚ್‌ಡಿಕೆ ಪುತ್ರ

KannadaprabhaNewsNetwork |  
Published : Oct 25, 2024, 01:06 AM ISTUpdated : Oct 25, 2024, 05:37 AM IST
Nikhil Kumaraswamy | Kannada Prabha

ಸಾರಾಂಶ

ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮರದಲ್ಲಿ ‘ಸೈನಿಕ’ನ ಚಕ್ರವ್ಯೂಹವನ್ನು ಭೇದಿಸಲು ‘ಅಭಿಮನ್ಯು’ ನಿಖಿಲ್‌ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ಎನ್‌ಡಿಎ ಮೈತ್ರಿಕೂಟ ಸರ್ವಾನುಮತದಿಂದ ನಿರ್ಣಯಿಸಿದೆ.

 ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮರದಲ್ಲಿ ‘ಸೈನಿಕ’ನ ಚಕ್ರವ್ಯೂಹವನ್ನು ಭೇದಿಸಲು ‘ಅಭಿಮನ್ಯು’ ನಿಖಿಲ್‌ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ಎನ್‌ಡಿಎ ಮೈತ್ರಿಕೂಟ ಸರ್ವಾನುಮತದಿಂದ ನಿರ್ಣಯಿಸಿದೆ.

ಉಪಚುನಾವಣೆಯ ಅಖಾಡ ಸಜ್ಜಾಗಿದ್ದು, ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಅವರನ್ನು ಎದುರಿಸಲು ಜೆಡಿಎಸ್‌-ಬಿಜೆಪಿ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಘೋಷಿಸಿದೆ. ಇದರಿಂದಾಗಿ ಯೋಗೇಶ್ವರ್ ಮತ್ತು ನಿಖಿಲ್ ನಡುವೆ ನೇರ ಹಣಾಹಣಿ ನಡೆಯಲಿದೆ.

ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಜೆಡಿಎಸ್‌ ಚಿಂತನೆ ನಡೆಸಿತ್ತು. ಆ ಪ್ರಕಾರ ಗುರುವಾರ ಮಧ್ಯಾಹ್ನ ಜೆಡಿಎಸ್ ನಾಯಕರು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಕೆಲಕಾಲ ಸಭೆ ನಡೆಸಿದರು. ಬಳಿಕ ಸ್ವತಃ ಯಡಿಯೂರಪ್ಪ ಅವರೇ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದರು.

ತಂದೆ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರಕ್ಕೆ ಈಗ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿಯೇ ಅಖಾಡಕ್ಕಿಳಿಯಲಿದ್ದು, ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಹಿಂದೆ ಮಂಡ್ಯ ಲೋಕಸಭಾ ಚುನಾವಣೆ, ರಾಮನಗರ ವಿಧಾನಸಭಾ ಚುನಾವಣೆ ಸೇರಿ ಎರಡು ಬಾರಿ ಚುನಾವಣೆಯಲ್ಲಿ ಸೋಲು ಕಂಡಿದ್ದ ನಿಖಿಲ್ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. ಎನ್‌ಡಿಎ ಮೈತ್ರಿಕೂಟದಿಂದ ಟಿಕೆಟ್‌ ಸಿಗದ ಕಾರಣಕ್ಕಾಗಿ ಯೋಗೇಶ್ವರ್‌ ಬಿಜೆಪಿ ತೊರೆದು ಕಾಂಗ್ರೆಸ್‌ನಿಂದ ಚುನಾವಣಾ ಕಣಕ್ಕಿಳಿದಿದ್ದಾರೆ.

ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ನಾಯಕರಾದ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್‌ಬಾಬು, ಸಾ.ರಾ.ಮಹೇಶ್‌, ಬಂಡೆಪ್ಪ ಕಾಶೆಂಪೂರ್‌, ಬಿಜೆಪಿ ನಾಯಕರಾದ ಆರ್‌.ಅಶೋಕ್‌, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ದೇವೇಗೌಡ ಸಮ್ಮುಖದಲ್ಲಿ ಸಭೆ:

ಯಡಿಯೂರಪ್ಪ ನಿವಾಸದಲ್ಲಿ ಸಭೆ ನಡೆಸುವ ಮುನ್ನ ಜೆಡಿಎಸ್‌ ಕಚೇರಿಯಲ್ಲಿ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಸಮ್ಮುಖದಲ್ಲಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಭೆಗೆ ಕುಮಾರಸ್ವಾಮಿ ಬರುತ್ತಿದ್ದಂತೆ ಅವರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ನಿಖಿಲ್ ಹೆಸರು ಘೋಷಣೆ ಮಾಡುವಂತೆ ಒತ್ತಾಯ ಮಾಡಿದರು. ಒಂದು ಹಂತದಲ್ಲಿ ಹೈಡ್ರಾಮಾವೇ ನಡೆಯಿತು. ನಿಖಿಲ್ ಅವರೇ ಅಭ್ಯರ್ಥಿಯಾಗಬೇಕೆಂದು ಕಾರ್ಯಕರ್ತರು ಪಟ್ಟು ಹಿಡಿದಿದರು. ನಂತರ ನಿಖಿಲ್ ಆಗಮಿಸಿದಾಗ, ಅವರನ್ನು ಸುತ್ತುವರಿದ ಕಾರ್ಯಕರ್ತರು ಚನ್ನಪಟ್ಟಣದಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಿದರು.

ಜೆಡಿಎಸ್‌ ಸಭೆಯಲ್ಲಿ ದೇವೇಗೌಡ ಅವರು ಮೊದಲು ನಿಖಿಲ್‌ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ತೀರ್ಮಾನ ಕೈಗೊಂಡರು. ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ್‌ ವಿರುದ್ಧ ಸಮರ್ಥ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹೊರತುಪಡಿಸಿ ಮತ್ಯಾರೂ ಇಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಬಳಿಕ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸಭೆಯ ನಿರ್ಣಯಗಳ ಕುರಿತು ಚರ್ಚಿಸಲಾಯಿತು. ಅಲ್ಲಿಯೂ ನಿಖಿಲ್‌ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಕುರಿತು ಒಮ್ಮತದ ನಿರ್ಧಾರ ಕೈಗೊಂಡು ಅಧಿಕೃತವಾಗಿ ಪ್ರಕಟಿಸಲಾಯಿತು ಎಂದು ಹೇಳಲಾಗಿದೆ.

ಮಾಧ್ಯಮಗಳ ಮುಂದೆ ಯಡಿಯೂರಪ್ಪ ಅವರು ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದರು. ತದನಂತರ ನಿಖಿಲ್‌ ಕುಮಾರಸ್ವಾಮಿ ಅವರು ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು.

PREV

Recommended Stories

ವಿಶ್ವಾದ್ಯಂತ ಒಂದೇ ದಿನ ಕಾಂತಾರ ಚಾಪ್ಟರ್ 1 ಬಿಡುಗಡೆ
ಈರುಳ್ಳಿ, ಹೂ, ಪಚ್ಚ ಬಾಳೆ ಬೆಲೆ ಧರೆಗೆ!