ಎನ್‌ಐಆರ್‌ಎಫ್ ರ‍್ಯಾಂಕಿಂಗ್ : 100ರೊಳಗೆ ಕುವೆಂಪು ವಿವಿ

KannadaprabhaNewsNetwork |  
Published : Sep 07, 2025, 01:00 AM IST
ಪೋಟೋ: 05ಎಸ್‌ಎಂಜಿಕೆಪಿ01 | Kannada Prabha

ಸಾರಾಂಶ

  ಸಚಿವ ಧರ್ಮೇಂದ್ರ ಪ್ರಧಾನ್  ಬಿಡುಗಡೆಗೊಳಿಸಿರುವ 2025ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್  ನಲ್ಲಿ ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ 51ರಿಂದ 100ರ ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಗಳಿಸುವುದರೊಂದಿಗೆ  ಗಮನ ಸೆಳೆದಿದೆ.  

 ಶಿವಮೊಗ್ಗ :  ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ಬಿಡುಗಡೆಗೊಳಿಸಿರುವ 2025ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ 51ರಿಂದ 100ರ ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಗಳಿಸುವುದರೊಂದಿಗೆ ಮತ್ತೊಮ್ಮೆ ರಾಷ್ಟ್ರದ ಗಮನ ಸೆಳೆದಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಮೂರನೇ ಸ್ಥಾನ ಪಡೆದಿದೆ.

ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು ಭಾಗವಹಿಸಿದ್ದ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ 51ರಿಂದ 100ರೊಳಗೆ ಸ್ಥಾನ ಪಡೆದಿದೆ. ಉಳಿದಂತೆ ಮೈಸೂರು ವಿವಿ 20ನೇ ಸ್ಥಾನ, ಬೆಂಗಳೂರು ವಿವಿ 26ನೇ ಸ್ಥಾನ, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ 37ನೇ ಸ್ಥಾನ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 50ನೇ ಸ್ಥಾನ ಪಡೆದಿದೆ.

ಕೇಂದ್ರೀಯ ವಿಶ್ವವಿದ್ಯಾಲಯಗಳು, ಕೇಂದ್ರ ಸರ್ಕಾರದ ಉನ್ನತ ಶೈಕ್ಷಣಿಕ ಸಂಸ್ಥೆಗಳು, ಎಂಜಿನಿಯರಿಂಗ್ ನಂತಹ ವೃತ್ತಿಪರ ಕೋರ್ಸ್ ಗಳನ್ನು ನಡೆಸುವ ಖಾಸಗಿ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ದೇಶಾದ್ಯಂತ (4,100) ಶಿಕ್ಷಣ ಸಂಸ್ಥೆಗಳು ಶ್ರೇಣೀಕರಣಕ್ಕೆ ಒಳಪಟ್ಟಿವೆ.

ದೇಶದ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಮತ್ತು ಒಟ್ಟಾರೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 2015ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಪ್ರಾರಂಭಿಸಿದ್ದು, ಈಗ ಹತ್ತನೇ ಆವೃತ್ತಿಯನ್ನು ಬಿಡುಗಡೆಗೊಳಿಸಿದೆ. ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟ್, ವೈದ್ಯಕೀಯ, ವಾಸ್ತುಶಿಲ್ಪ, ಕಾನೂನು ವಿಷಯಗಳ ಶಿಕ್ಷಣ ಸಂಸ್ಥೆಗಳ ಜೊತೆಗೆ ವಿಶ್ವವಿದ್ಯಾಲಯಗಳ ಶ್ರೇಣೀಕರಣವನ್ನು ಎನ್‌ಐಆರ್‌ಎಫ್ ಅಡಿಯಲ್ಲಿ ಮಾನವ ಸಂಪನ್ಮೂಲ ಇಲಾಖೆ ಪ್ರತಿ ವರ್ಷ ಕೈಗೊಳ್ಳುತ್ತದೆ.

ವಿಶ್ವವಿದ್ಯಾಲಯದ ರ‍್ಯಾಂಕಿಂಗ್ ಬಗ್ಗೆ ಪ್ರತಿಕ್ರಿಯಿಸಿರುವ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ದೇಶದ ಶೈಕ್ಷಣಿಕ ರಂಗವನ್ನು ಹಲವಾರು ಸಮಸ್ಯೆಗಳು ಭಾದಿಸುತ್ತಿದ್ದರೂ, ವಿಶ್ವವಿದ್ಯಾಲಯದ ಅಧ್ಯಾಪಕರು ಗುಣಮಟ್ಟದ ಸಂಶೋಧನೆ, ಪ್ರಕಟಣೆ ಮತ್ತು ವಿಸ್ತರಣಾ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಶೈಕ್ಷಣಿಕ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಮುಂಬರುವ ದಿನಗಳಲ್ಲಿ ರ‍್ಯಾಂಕಿಂಗ್ ಉತ್ತಮಪಡಿಸುವ ನಿಟ್ಟಿನಲ್ಲಿ ಸುಧಾರಣೆ ತರಲಾಗುವುದು ಎಂದು ತಿಳಿಸಿದರು.

ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಮಾನದಂಡಗಳು: ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ ಫ್ರೇಂವರ್ಕ್ ಐದು ಪ್ರಮುಖ ಮಾನದಂಡಗಳ ಆಧಾರದ ಮೇಲೆ ಶ್ರೇಣೀಕರಣ ನೀಡುತ್ತದೆ.  

ರ‍್ಯಾಂಕಿಂಗ್‌ಗೆ ಒಳಪಡುವ ಶೈಕ್ಷಣಿಕ ಸಂಸ್ಥೆಗಳಲ್ಲಿನ ಬೋಧನೆ, ಕಲಿಕೆಗಾಗಿ ಅಸ್ತಿತ್ವದಲ್ಲಿರುವ ಸಂಪನ್ಮೂಲಗಳ ಸೌಲಭ್ಯ, ಸಂಸ್ಥೆಗಳಲ್ಲಿ ನಡೆಯುತ್ತಿರುವ ಸಂಶೋಧನೆ ಮತ್ತು ವೃತ್ತಿಪರ ಚಟುವಟಿಕೆಗಳು, ಕೋರ್ಸ್ಗಳ ಮೂಲಕ ಸಂಸ್ಥೆ ಸೃಷ್ಟಿಸುತ್ತಿರುವ ಉದ್ಯೋಗಾವಕಾಶ ಮತ್ತು ಪರೀಕ್ಷೆಯ ಉತ್ತೀರ್ಣದ ಪ್ರಮಾಣ ಸೇರಿದಂತೆ ಉನ್ನತ ಶಿಕ್ಷಣದ ಫಲಿತಾಂಶ, ಶೈಕ್ಷಣಿಕ ಸಂಸ್ಥೆಯ ಮೂಲಕ ನಡೆಯುತ್ತಿರುವ ವಿಸ್ತರಣೆ ಮತ್ತು ಸಾಮಾಜಿಕ ಒಳಗೊಳ್ಳುವಿಕೆಯ ಚಟುವಟಿಕೆಗಳು ಮತ್ತು ಸಂಸ್ಥೆಯ ಕುರಿತು ಸಿಬ್ಬಂದಿ, ಸಂಶೋಧಕರು, ಸಾರ್ವಜನಿಕರ ಗ್ರಹಿಕೆ ಮತ್ತು ಅಭಿಪ್ರಾಯ, ಈ ಐದು ಮಾನದಂಡಗಳ ಮೂಲಕ ಮೌಲ್ಯಮಾಪನ ಮಾಡಿ ಶ್ರೇಣೀಕರಣ ನೀಡಲಾಗುತ್ತದೆ.

PREV
Read more Articles on

Recommended Stories

ನಟ ದರ್ಶನ್‌ಗೆ ಜೈಲಿನಲ್ಲಿ ಹರಿದ ಚಾದರ : ವಕೀಲರ ವಾದ
ಉಪನಗರ ರೈಲು ಯೋಜನೆಗೆ ಗ್ರಹಣ - ಪ್ರಧಾನಿ ಗಡುವು ಇಂದು ಮುಕ್ತಾಯ