ಬೆಂಗಳೂರು : ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನಿರ್ದೇಶಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಮಾ.18ರವರೆಗೆ ಹೈಕೋರ್ಟ್ ವಿಸ್ತರಿಸಿದೆ.
ಸಂಜಯನಗರ ಠಾಣಾ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಸುರೇಶ್‌ಬಾಬು ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ಚಂದ್ರಶೇಖರ್ ಅವರ ಪರ ವಕೀಲ ವೆಂಕಟೇಶ್ ಅರಬಟ್ಟಿ ಹಾಜರಾಗಿ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಪೊಲೀಸರಿಗೆ ನಿರ್ದೇಶಿಸಿ 2024ರ ನ.6ರಂದು ಹೊರಡಿಸಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಬಗ್ಗೆ ಸೂಕ್ತ ಅರ್ಜಿ ಸಲ್ಲಿಸಿದರೆ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿ ಅರ್ಜಿ ವಿಚಾರಣೆಯನ್ನು ಮಾ.18ಕ್ಕೆ ಮುಂದೂಡಿತು. ಅಲ್ಲಿಯವರೆಗೆ 2024ರ ನ.6ರಂದು ಹೊರಡಿಸಿರುವ ಮಧ್ಯಂತರ ಆದೇಶವನ್ನು ವಿಸ್ತರಿಸಿತು.
ಪ್ರಕರಣದ ಹಿನ್ನೆಲೆ:
ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್‌ಐಟಿ ಎಡಿಜಿಪಿ ಚಂದ್ರಶೇಖರ್ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಎಚ್‌ಡಿಕೆ, ಚಂದ್ರಶೇಖರ್ ವಿರುದ್ಧ ಹೇಳಿಕೆ ನೀಡಿದ್ದರು.
ಇದರಿಂದ ಎಡಿಜಿಪಿ ಚಂದ್ರಶೇಖರ್ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳು ದುರುದ್ದೇಶಪೂರಿತವಾಗಿ ಆರೋಪ ಮಾಡಿದ್ದಾರೆ. ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಆಕ್ಷೇಪಿಸಿದ್ದರು. ಈ ಹಿನ್ನೆಲೆಯಲ್ಲಿ ಎಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಜೆಡಿಎಸ್ ಮುಖಂಡ ಸುರೇಶ್‌ಬಾಬು ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ 42ನೇ ಎಸಿಎಂಎಂ ನ್ಯಾಯಾಲಯವು ಸಂಜಯನಗರ ಠಾಣಾ ಪೊಲೀಸರಿಗೆ ನಿರ್ದೇಶಿಸಿತ್ತು. ಅದರಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.