ಬೆಳೆ, ಕೃಷಿ ಸಾಲ ಬಲವಂತ ವಸೂಲಿ ಸಲ್ಲ: ಜಿಲ್ಲಾಧಿಕಾರಿ ಶ್ರೀರೂಪ

KannadaprabhaNewsNetwork |  
Published : Oct 24, 2026, 01:30 AM IST
ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.  | Kannada Prabha

ಸಾರಾಂಶ

ಜಿಲ್ಲೆಯನ್ನು ಬರಪೀಡಿತವೆಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳೆ ಹಾಗೂ ಕೃಷಿ ಸಂಬಂಧಿತ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯನ್ನು ಬರಪೀಡಿತವೆಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳೆ ಹಾಗೂ ಕೃಷಿ ಸಂಬಂಧಿತ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರೈತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ರೈತ ಮುಖಂಡರು, ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆಲ ಸಹಕಾರ ಬ್ಯಾಂಕ್‌ಗಳಲ್ಲಿ ಸಾಲ ಪಾವತಿಗಾಗಿ ಒತ್ತಾಯಿಸಲಾಗುತ್ತಿದೆ ಎಂದು ರೈತ ಮುಖಂಡರು ಸಭೆಯಲ್ಲಿ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲೆಯ ಎಲ್ಲಾ ತಾಲೂಕು ತೀವ್ರ ಬರಪೀಡಿತ ಎಂದು ಘೋಷಣೆಯಾಗಿದೆ. ಪ್ರಸ್ತುತ ಬರಗಾಲದ ಕಾರಣದಿಂದ ಅರ್ಹ ಬೆಳೆ ಸಾಲಗಳು ಹಾಗೂ ಕೃಷಿ ಆಧಾರಿತ ಸಾಲಗಳ ಮರುಪಾವತಿಯನ್ನು ೧೨ ತಿಂಗಳ ಕಾಲ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಹೀಗಾಗಿ ರೈತರಿಂದ ಬಲವಂತವಾಗಿ ಸಾಲ ವಸೂಲಾತಿ ಮಾಡಬಾರದು ಎಂದು ಬ್ಯಾಂಕ್ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಿಗೆ ಸೂಚನೆ ನೀಡಿ ಸಾಲ ವಸೂಲಾತಿಗೆ ಒತ್ತಾಯ ಮಾಡದಂತೆ ಸಂಬಂಧಿತ ಅಧಿಕಾರಿಗಳು ನಿರ್ದೇಶನ ನೀಡಬೇಕು ಎಂದು ತಿಳಿಸಿದರು.

ಚಂಗಡಿ ಗ್ರಾಮದ ಮುಖಂಡ ಕರಿಯಪ್ಪ ಮಾತನಾಡಿ, ಚಂಗಡಿ ಗ್ರಾಮ ಸ್ಥಳಾಂತರ ಘೋಷಣೆ ೨೦೨೦ರಲ್ಲೇ ಆಗಿದೆ. ಆದರೂ ಇನ್ನೂ ಕಾರ್ಯ ರೂಪಕ್ಕೆ ತಂದಿಲ್ಲ. ಗ್ರಾಮದಲ್ಲಿ ಮೂಲಸೌಕರ್ಯಗಳು ಇಲ್ಲ ಎಂದು ಪ್ರಸ್ತಾಪಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿ ಉತ್ತರಿಸಿ, ಮುಂದಿನ ವಾರವೇ ಚಂಗಡಿ ಗ್ರಾಮದ ಸಂಬಂಧ ಪ್ರತ್ಯೇಕ ಸಭೆ ಕರೆಯಲಾಗುವುದು. ಹಿರಿಯ ಅರಣ್ಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದು, ಅಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಕಾಡಂಚಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕಕ್ಕಾಗಿ ಕೈಗೆತ್ತಿಕೊಂಡಿರುವ ಕಾಮಗಾರಿ ವಿಳಂಬವಾಗುತ್ತಿದೆ ಎಂಬ ದೂರಿನ ಬಗ್ಗೆ ಉತ್ತರಿಸಿದ ಜಿಲ್ಲಾಧಿಕಾರಿ, ಈಗಾಗಲೇ ನಾನು ಹಲವು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಅಧಿಕಾರಿಗಳಿಗೆ ಕಾಮಗಾರಿ ತ್ವರಿತವಾಗಿ ಪೂಣಗೊಳಿಸಲು ಸೂಚಿಸಿದ್ದೇನೆ ಎಂದರು.

ಹಲವು ಭಾಗಗಳಲ್ಲಿ ಕಾಡುಪ್ರಾಣಿಗಳ ಹಾವಳಿಯಿಂದ ಜನರು ಕಂಗಾಲಾಗಿದ್ದಾರೆ. ಅರಣ್ಯ ಅಧಿಕಾರಿಗಳು ಚಿರತೆ, ಹುಲಿ ಸೆರೆಹಿಡಿಯಲು ಬೋನು ಇಡುವಂತೆ ಮನವಿ ಮಾಡುತ್ತಿದ್ದೇವೆ. ಆದರೂ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂಬ ಪ್ರಸ್ತಾಪಕ್ಕೆ ಜಿಲ್ಲಾಧಿಕಾರಿ ಸ್ಥಳದಲ್ಲಿಯೇ ಇದ್ದ ಅರಣ್ಯ ಅಧಿಕಾರಿಗಳಿಗೆ ತ್ವರಿತವಾಗಿ ಕ್ರಮವಹಿಸುವಂತೆ ನಿರ್ದೆಶನ ನೀಡಿದರು.

ಖಾತೆ, ಒತ್ತುವರಿ ತೆರವು, ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಸಮಸ್ಯೆಗಳು, ಕಾಡುಪ್ರಾಣಿಗಳ ತಡೆಗೆ ರೈಲ್ವೆ ಬ್ಯಾರಿಕೇಡ್ ಅಳವಡಿಕೆ, ಬಗರ್ ಹುಕುಂ ಸಾಗುವಳಿ, ಕಾಡುಪ್ರಾಣಿಗಳಿಂದ ಹಾನಿಗೊಳಗದ ಬೆಳೆಗಳಿಗೆ ವೈಜ್ಞಾನಿಕ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆ ಸೇರಿ ಇತರ ವಿಷಯಗಳ ಬಗ್ಗೆ ವಿವರವಾಗಿ ಸಭೆಯಲ್ಲಿ ಚರ್ಚಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯದರ್ಶಿನಿ, ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ರೈತ ಮುಖಂಡರಾದ ಬಂದಿಗೌಡನಹಳ್ಳಿ ನಟರಾಜ್, ಚಂಗಡಿ ಕರಿಯಪ್ಪ, ಪೃಥ್ವಿ, ಇನ್ನಿತರ ಮುಖಂಡರು, ರೈತ ಸಂಘಟನೆಯ ಪ್ರತಿನಿಧಿಗಳು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಭಾನುಪ್ರಕಾಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗಿರೀಶ್, ತಹಶೀಲ್ದಾರರಾದ ತನ್ಮಯ್, ಚೈತ್ರ, ನಯನ, ಡಿವೈಎಸ್‌ಪಿ ಸ್ನೇಹರಾಜ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯಪಾಲಕ ಎಂಜಿನಿಯರ್ ಪ್ರದೀಪ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಸುರೇಖ, ವಿವಿಧ ಇಲಾಖೆಗಳ ಅಧಿಕಾರಿಗಳು, ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ಅಂತಾರಾಷ್ಟ್ರೀಯ ಬೌದ್ದ ಮಹಾಸಮ್ಮೇಳನ
ಎಸ್‌ಐಆರ್ ರದ್ದು ಮಾಡಿ, ಸಿಇಸಿ ರಾಜೀನಾಮೆ ನೀಡಿ