ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಬಂದ್ ಗೆ ಜಿಲ್ಲೆಯಲ್ಲಿ ಯಾವುದೇ ಬೆಂಬಲವನ್ನು ಯಾವುದೇ ಸಂಘಟನೆಗಳು ನೀಡಲಿಲ್ಲ. ಎಂದಿನಂತೆ ಸರ್ಕಾರಿ ಹಾಗೂ ಖಾಸಗಿ ಬಸ್ ಗಳ ಸಂಚಾರ, ಆಟೋ- ಕ್ಯಾಬ್ ಸೇರಿ ಇತರೆ ವಾಹನಗಳ ಓಡಾಟ, ಹೊಟೇಲ್, ರೆಸ್ಟೋರೆಂಟ್ ಗಳು, ಅಂಗಡಿ ಮುಂಗಟ್ಟುಗಳು, ಸಿನಿಮಾ ಥಿಯೇಟರ್, ಪೆಟ್ರೋಲ್ ಬಂಕ್ ಗಳು ತೆರೆದು ವಹಿವಾಟು ನಡೆಸಿದವು. ಶಾಲಾ- ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳಿ ಪಾಠ ಪ್ರವಚನಗಳನ್ನು ಕೇಳಿದರು.
ಕನ್ನಡ ಸೇನೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ:ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಹಾಗೂ ಕರ್ನಾಟಕ ರಾಜ್ಯದಲ್ಲಿನ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಿ, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಐಕ್ಯತೆಯನ್ನು ಸಾರುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ, ಕನ್ನಡ ಸೇನೆ ಪದಾಧಿಕಾರಿಗಳು ಮನವಿ ನೀಡಿದರು.
ಮಹದಾಯಿ, ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಕೂಡಲೇ ಕಾರ್ಯಗತವಾಗಬೇಕು. ರಾಜ್ಯದಲ್ಲಿ ಪರಭಾಷೆ ದಬ್ಬಾಳಿಕೆ ನಿಲ್ಲಿಸಬೇಕು. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂ.ಇ.ಎಸ್. ನಿಷೇಧ ಮಾಡಬೇಕು. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಸರ್ಕಾರವು ಅನುದಾನವನ್ನು ಬಿಡುಗಡೆಗೊಳಿಸಿ ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕು. ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ರಾಜ್ಯ ಸರ್ಕಾರದ ಅನೇಕ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಬೇಕು. ಐಸಿಎಸ್ಸಿ, ಸಿಬಿಎಸ್ಸಿ ಪರೀಕ್ಷೆಗಳಲ್ಲಿ ಕನ್ನಡವನ್ನು ಕಡೆಗಣಿಸಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕನ್ನಡ ಭಾಷೆಯನ್ನು ಕಾರ್ಯರೂಪಕ್ಕೆ ತರಬೇಕು ಎಂದು ಹೇಳಿದರು.