ಕನ್ನಡಪ್ರಭ ವಾರ್ತೆ ಮಂಡ್ಯ/ಹಾಸನ ನಾಡಿನ ಜೀವನದಿ ಕಾವೇರಿ ಈಗ ಪರಿಶುದ್ಧವಾಗಿ ಉಳಿದಿಲ್ಲ ಎಂದು ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳ ವರದಿಗಳು ಹೇಳುತ್ತಿವೆ. ಕಾವೇರಿಯೂ ಸೇರಿದಂತೆ ಎಲ್ಲಾ ನದಿಗಳಿಗೂ ಕೈಗಾರಿಕೆಗಳ ತ್ಯಾಜ್ಯ ಹಾಗೂ ಒಳಚರಂಡಿ ನೀರು ಸೇರಿ ಕಲುಷಿತಗೊಳಿಸಲಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ನದಿಗಳನ್ನು ಉಳಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿ ಆಗಬೇಕಾದ ಕೆಲಸ. ನದಿಗಳನ್ನು ಉಳಿಸಿಕೊಳ್ಳಲು ಇವತ್ತೇ ಪಣ ತೊಡಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿಎಂ ನರೇಂದ್ರಸ್ವಾಮಿ ತಿಳಿಸಿದರು.ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಉದ್ದೇಶಿಸಿ ಮಾತನಾಡಿ, ನದಿಗಳನ್ನು ಉಳಿಸಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.ಕೊಡಗಿನಿಂದ ತಮಿಳುನಾಡು ಸೇರುವ ಬಿಳಿಗುಂಡ್ಲುವರೆಗೆ ಹಲವು ಕಡೆಗಳಲ್ಲಿ ಕಾವೇರಿ ನದಿಗೆ ಕಲುಷಿತ ನೀರು ಸೇರುತ್ತಿದೆ. ಕಾರ್ಖಾನೆಗಳಿಂದ ಹೊರಬರುತ್ತಿರುವ ಕಲುಷಿತ ನೀರು, ಗೃಹಬಳಕೆಯ ತ್ಯಾಜ್ಯಗಳು ಸಂಸ್ಕರಿಸದೆ ನದಿಗಳನ್ನು ಸೇರುತ್ತಿವೆ. ಇದರಿಂದ ದೊಡ್ಡ ಮಟ್ಟದ ಜಲ ಮಾಲಿನ್ಯವಾಗುತ್ತಿದೆ ಎಂದರು.ಪ್ರತಿ ತಿಂಗಳು ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನದಿಗಳ ನೀರಿನ ಗುಣಮಟ್ಟವನ್ನು ಮಾಪನ ಮಾಡಿ ನೀರಿನ ಗುಣಮಟ್ಟವನ್ನು ಪ್ರಾದೇಶಿಕ ಪ್ರಯೋಗಾಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಇದರಿಂದ ನದಿಗಳು ಕಲುಷಿತಗೊಳ್ಳುತ್ತಿರುವುದು ಬಹಳ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಈಗಲಾದರೂ ನಾವೆಲ್ಲ ಜಾಗೃತರಾಗಬೇಕಾಗಿದೆ ಎಂದು ನರೇಂದ್ರಸ್ವಾಮಿ ಕರೆಕೊಟ್ಟರು.
1972ರಲ್ಲಿ ಮಂಡಳಿ ಸ್ಥಾಪನೆ:ಜಲ ಮಾಲಿನ್ಯ ತುಂಬಾ ಭಯಂಕರವಾದುದು. ಇದರ ಬಗ್ಗೆ ದೇಶದಲ್ಲಿ ಮೊದಲ ಬಾರಿಗೆ ಗಮನ ಹರಿಸಿದವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ. ಅವರು 1974ರಲ್ಲಿ ಜಲ ಮಾಲಿನ್ಯ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದರು. ಇದಕ್ಕೂ ಮೊದಲು ಎಲ್ಲಾ ಬಗೆಯ ಮಾಲಿನ್ಯವನ್ನು ತಡೆಯಬೇಕೆಂದು 1972ರಲ್ಲಿ ಇಂದಿರಾ ಅವರು ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಸ್ಥಾಪಿಸಿದರು. ಈಗ ಮಂಡಳಿ 50 ವರ್ಷ ಪೂರೈಸಿದ್ದು ಸುವರ್ಣ ಮಹೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಬಗ್ಗೆ ದೊಡ್ಡ ಮಟ್ಟದಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.ಇಂದಿರಾ ಗಾಂಧಿಯಿಂದ ಕಾಯಿದೆ:ಇಂದಿರಾ ಗಾಂಧಿ ಅವರು ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪನೆ ಮಾಡಿರುವುದು ಮಾತ್ರವಲ್ಲ, ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹಲವು ಕಾಯಿದೆಗಳನ್ನು ಜಾರಿಗೆ ತಂದರು. 1972ರಲ್ಲಿ ರಾಷ್ಟ್ರೀಯ ಪರಿಸರ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಿದರು. ಅದೇ ವರ್ಷ ಅಳಿವಿನಂಚಿನಲ್ಲಿರುವ ಪ್ರಾಣಿ-ಪಕ್ಷಿಗಳ ಪ್ರಭೇದಗಳನ್ನು ರಕ್ಷಿಸಲು ವನ್ಯಜೀವಿ ಸಂರಕ್ಷಣಾ ಕಾಯ್ದೆ - 1972 ಅನ್ನು ಜಾರಿಗೆ ತಂದರು. 1973ರಲ್ಲಿ ಅಳಿವಿನಂಚಿನಲ್ಲಿರುವ ಹುಲಿಗಳನ್ನು ಮತ್ತು ಅವುಗಳ ಆವಾಸಸ್ಥಾನಗಳನ್ನು ರಕ್ಷಿಸಲು ಪ್ರಾಜೆಕ್ಟ್ ಟೈಗರ್ ಎಂಬ ವನ್ಯಜೀವಿ ಸಂರಕ್ಷಣಾ ಯೋಜನೆಯನ್ನು ರೂಪಿಸಿದರು. ಅದೇ ವರ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧೀನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿದರು. 1981ರಲ್ಲಿ ವಾಯು (ಮಾಲಿನ್ಯ ತಡೆ ಮತ್ತು ನಿಯಂತ್ರಣ) ಕಾಯ್ದೆ ಜಾರಿಗೆ ತಂದರು. ಸುವರ್ಣ ಮಹೋತ್ಸವದ ವೇಳೆ ಈ ಕಾಯಿದೆಗಳನ್ನು ಹಾಗು ಕಾಯಿದೆಗಳನ್ನು ಜಾರಿಗೆ ತಂದ ಇಂದಿರಾ ಗಾಂಧಿ ಅವರನ್ನು ಸ್ಮರಿಸುವುದು ಮಂಡಳಿಯ ಉದ್ದೇಶ ಎಂದು ವಿವರಿಸಿದರು.
15 ಕಡೆ ಸುವರ್ಣ ಮಹೋತ್ಸವ:ರಾಜ್ಯದ 15 ಕಡೆ ಸುವರ್ಣ ಮಹೋತ್ಸವದ ಬೃಹತ್ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆಯಾದರೂ ರಾಜ್ಯದ ಎಲ್ಲಾ ಜಿಲ್ಲೆಗಳನ್ನೂ ಒಳಗೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ ವಿಧಾನಸಭಾ ಕ್ಷೇತ್ರ ಮಟ್ಟದಲ್ಲೂ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಹತ್ತು-ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಸಚಿವ ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳೀಗೌಡ, ಮಧು ಮಾದೇಗೌಡ, ಶಾಸಕರಾದ ರವಿ ಗಣಿಗ, ರಾಜೇಶ್ ಗೌಡ ಮತ್ತಿರರಿದ್ದರು.
ಗ್ರಾಮಾಂತರ ಪ್ರದೇಶಗಳಿಂದ ಹಿಡಿದು, ತಾಲೂಕು, ಜಿಲ್ಲೆ ಸೇರಿದಂತೆ ರಾಜ್ಯ ಮಟ್ಟದವರೆಗೆ ಏಕ ಕಾಲಕ್ಕೆ ದೊಡ್ಡ ಪ್ರಮಾಣದಲ್ಲಿ ಪರಿಸರ ಜಾಗೃತಿ ಮೂಡಿಸುವ ಹಾಗು ಮಾಲಿನ್ಯ ನಿಯಂತ್ರಣ ಮಾಡಬೇಕಾದ ಅಗತ್ಯದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ನರೇಂದ್ರಸ್ವಾಮಿ ತಿಳಿಸಿದರು.