ಗೊಲ್ಲರಹಟ್ಟಿಯಲ್ಲಿ 2-3 ತಿಂಗಳಿನಿಂದ ನೀರಿಲ್ಲ

KannadaprabhaNewsNetwork |  
Published : Nov 24, 2026, 12:15 AM IST
ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಳಕಟ್ಟೆ ಗೊಲ್ಲರಹಟ್ಟಿಯಲ್ಲಿ ಕಳೆದ ಎರಡು-ಮೂರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. | Kannada Prabha

ಸಾರಾಂಶ

ತಾಲೂಕಿನ ಹಾಗಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಳಕಟ್ಟೆ ಗೊಲ್ಲರಹಟ್ಟಿಯಲ್ಲಿ ಕಳೆದ ಎರಡು-ಮೂರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ತಾಲೂಕಿನ ಹಾಗಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಳಕಟ್ಟೆ ಗೊಲ್ಲರಹಟ್ಟಿಯಲ್ಲಿ ಕಳೆದ ಎರಡು-ಮೂರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಗ್ರಾಮದ ಮುಖಂಡ ಸಣ್ಣಿರಯ್ಯ ಮಾತನಾಡಿ, ಹರಳಕಟ್ಟೆ ಗ್ರಾಮದಲ್ಲಿ ಕಾಡುಗೊಲ್ಲ ಸಮುದಾಯದ ಸುಮಾರು 70 ಕುಟುಂಬಗಳು ವಾಸಿಸುತ್ತಿವೆ. ಕಳೆದ 2-3 ತಿಂಗಳಿನಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಕುರಿತು ಹಾಗಲವಾಡಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಾಗೂ ಶಾಸಕ ಎಸ್.ಆರ್. ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರೂ ಇದುವರೆಗೂ ಕ್ರಮ ಕೈಗೊಂಡಿಲ್ಲ. ಬೇಸಿಗೆಯ ಸಂದರ್ಭದಲ್ಲಿ ಜನರು ಮಾತ್ರವಲ್ಲದೆ ಜಾನುವಾರುಗಳಿಗೂ ಕುಡಿಯುವ ನೀರು ಸಿಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅಧಿಕಾರಿಗಳು ಸ್ಪಂದಿಸಿ ನೀರಿನ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಹಾಗಲವಾಡಿ ಗ್ರಾಮ ಪಂಚಾಯಿತಿ ಹಾಗೂ ಗುಬ್ಬಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಗ್ರಾಮದ ಮಹಿಳೆ ಕಮಲಮ್ಮ ಮಾತನಾಡಿ, ಹರಳಕಟ್ಟೆ ಗ್ರಾಮದಲ್ಲಿ ಸಮರ್ಪಕ ರಸ್ತೆ ಸೌಲಭ್ಯವೂ ಇಲ್ಲ, ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲದೆ ಬದುಕು ದುಸ್ತರವಾಗಿದೆ. ಚುನಾವಣೆ ಸಂದರ್ಭದಲ್ಲಿ ಮತ ಕೇಳಲು ಬರುವ ಜನಪ್ರತಿನಿಧಿಗಳು ಭರವಸೆ ನೀಡಿ ಹೋಗುತ್ತಾರೆ. ಆದರೆ ನಂತರ ನಮ್ಮ ಗ್ರಾಮದ ಕಡೆ ತಿರುಗಿಯೂ ನೋಡುವುದಿಲ್ಲ. ಸುಮಾರು 70 ಮನೆಗಳಿರುವ ನಮ್ಮ ಗ್ರಾಮದಲ್ಲಿ ಒಂದೇ ಒಂದು ಬೋರ್‌ವೆಲ್ ಇಲ್ಲ. ಪಕ್ಕದ ಹಳ್ಳಿಗಳಿಂದ ನೀರು ತರುವ ಪರಿಸ್ಥಿತಿ ಎದುರಾಗಿದೆ. ಮನೆಮನೆಗೆ ನಲ್ಲಿ ಸಂಪರ್ಕ ಕಲ್ಪಿಸುವ ಕಾಮಗಾರಿಯೂ ಕಳಪೆಯಾಗಿದ್ದು, ಹಣ ಖರ್ಚು ಮಾಡಿದರೂ ಪ್ರಯೋಜನವಾಗಿಲ್ಲ. ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ನಮ್ಮ ಗ್ರಾಮದತ್ತ ಗಮನಹರಿಸಿ ಬೋರ್‌ವೆಲ್ ಕೊರೆಸಿ ಶಾಶ್ವತವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕನಿಷ್ಠ ಟ್ಯಾಂಕರ್ ಮೂಲಕವಾದರೂ ನೀರು ಪೂರೈಸುವಲ್ಲಿ ಗ್ರಾಮ ಪಂಚಾಯಿತಿ ವಿಫಲವಾಗಿದೆ. ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.ಈ ಕುರಿತು ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಹಾಗಲವಾಡಿ ಭಾಗದಲ್ಲಿ ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂಬುದನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಈಗಾಗಲೇ ಈ ಭಾಗದಲ್ಲಿ ಸಾಕಷ್ಟು ಬೋರ್‌ವೆಲ್‌ಗಳನ್ನು ಕೊರೆಸಲಾಗಿದೆ. ಹರಳಕಟ್ಟೆ ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಬೋರ್‌ವೆಲ್ ಕೊರೆಸಿ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗಿರಿಜಮ್ಮ, ನಾಗಮ್ಮ, ಚಿತ್ತಮ್ಮ, ಲತಾ, ಪವಿತ್ರ, ಚೈತ್ರ, ಲಕ್ಷಮ್ಮ, ಕರೇರಂಗಯ್ಯ, ಶ್ರೀರಾಂಪುರ ಕೆಂಪಣ್ಣ, ಸ್ವಾಮಿ, ಭೈರಪ್ಪ, ಬಸವರಾಜು, ರಮೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೃಜನತ್ಮಕ ಸಾಧ್ಯತೆಗಳ ಗುರುತಿಸಿ ಮುನ್ನಡೆಯಿರಿ
ಖಂಡೇರಾಯನಪಲ್ಲಿಯಲ್ಲಿ ವಿದ್ಯುತ್‌ ಉಪಕೇಂದ್ರ ಉದ್ಘಾಟನೆ