ಮುಂದಿನ ವರ್ಷ ನಡೆಯಲಿರುವ ಕಾರ್ಕಳದ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ವ್ಯವಸ್ಥೆ ಮೇಲ್ವಿಚಾರಣೆಗೆ ಶೀಘ್ರದಲ್ಲೇ ನೋಡಲ್ ಅಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಕಾರ್ಕಳದ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ವ್ಯವಸ್ಥೆ ಮೇಲ್ವಿಚಾರಣೆಗೆ ಶೀಘ್ರದಲ್ಲೇ ನೋಡಲ್ ಅಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.ಮಂಗಳವಾರ ಗಮನ ಸೆಳೆಯುವ ಸೂಚನೆಯಡಿ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್ ಪ್ರಸ್ತಾಪಿಸಿದ ಈ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಉತ್ತರಿಸಿದ ಅವರು, ಕಾರ್ಕಳದ ಬಾಹುಬಲಿ ಮಹಾಮಸ್ತಕಾಭಿಷೇಕ ಮುಂದಿನ ವರ್ಷ ಇದೆ ಎಂಬ ಕಾರಣಕ್ಕೆ ನಿರ್ಲಕ್ಷ್ಯ ಮಾಡಲ್ಲ. ಈಗಾಗಲೇ ಮಹಾಮಸ್ತಕಾಭಿಷೇಕ ಸಂಬಂಧ ಸುಮಾರು 77 ಕೋಟಿ ರು. ಮೊತ್ತದ ಅಂದಾಜು ಪಟ್ಟಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ದಸರಾ ಮಾದರಿ ಸಮಿತಿ: ವ್ಯವಸ್ಥೆ ಮೇಲ್ವಿಚಾರಣೆ ಮಾಡಲು ನೋಡಲ್ ಅಧಿಕಾರಿ ನೇಮಕ ಜೊತೆಗೆ ದಸರಾ ಮಾದರಿಯಲ್ಲಿ ಎಲ್ಲಾ ಇಲಾಖೆಗಳನ್ನು ಒಳಗೊಂಡ ಸಮಿತಿ ರಚಿಸಿ ಜಬಾಬ್ದಾರಿ ಹಂಚಿಕೆ ಮಾಡಲಾಗುವುದು. ಈ ಸಂಬಂಧ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪ್ರಕ್ರಿಯೆ ಪ್ರಾರಂಭಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಇದಕ್ಕೂ ಮೊದಲು ಮಾತನಾಡಿದ ಸುನೀಲ್‌ಕುಮಾರ್, ಮುಂದಿನ ವರ್ಷ ಫೆಬ್ರವರಿಯಲ್ಲಿ ಕಾರ್ಕಳದ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ನಡೆಯಲಿದೆ. ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸಲಿದ್ದಾರೆ. ಮೂಲಸೌಕರ್ಯ ಸೇರಿ ಇತರೆ ಸೌಲಭ್ಯ ಒದಗಿಸಲು ವಿಶೇಷ ಅನುದಾನ ಒದಗಿಸಬೇಕು. ಧಾರ್ಮಿಕ ಕಾರ್ಯದ ಜೊತೆಗೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು. ಈ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಮಾಡಲಾಗುವ ವ್ಯವಸ್ಥೆ ಮೇಲ್ವಿಚಾರಣೆಗೆ ಎಸಿ ಮಟ್ಟದ ನೋಡಲ್ ಅಧಿಕಾರಿ ನೇಮಿಸಬೇಕು ಎಂದು ಒತ್ತಾಯಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.