ಏ.19ಕೊನೆ ದಿನ । ಮೇ.7 ರಂದು ಚುನಾವಣೆ । ಡಿಸಿ, ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್ ಮಾಹಿತಿ
ಕನ್ನಡಪ್ರಭ ವಾರ್ತೆ ಕೊಪ್ಪಳಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದ್ದು, ಏ. 12 ರಿಂದ ಏ.19ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳಿಂದ ನಾಮಪತ್ರ ಸ್ವೀಕರಿಸಲಾಗುವುದು. ನಾಮಪತ್ರ ಸಲ್ಲಿಸಲು ಇಚ್ಛಿಸುವವರು ಸಾರ್ವತ್ರಿಕ ರಜಾ ದಿನ ಹೊರತುಪಡಿಸಿ ಏ.12 ರಿಂದ ಏ.19ರವರೆಗೆ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು.ಏ.20ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಏ.22 ರ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ವಾಪಸ್ ಪಡೆದುಕೊಳ್ಳಲು ಅವಕಾಶವಿದ್ದು, ನಂತರ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳಿಗೆ ಚುನಾವಣಾ ಚಿಹ್ನೆಯ ಹಂಚಿಕೆ ಕಾರ್ಯ ಕೈಗೊಳ್ಳಲಾಗುವುದು. ಮೇ 7ರಂದು ಮತದಾನ ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿಗಳ ಕೊಠಡಿಗೆ ಅಭ್ಯರ್ಥಿ ಸೇರಿದಂತೆ ಗರಿಷ್ಠ 5 ಜನರಿಗೆ ಮಾತ್ರ ಪ್ರವೇಶಿಸಲು ಅವಕಾಶವಿರುತ್ತದೆ. ಚುನಾವಣಾಧಿಕಾರಿಗಳ ಕಚೇರಿಯ 100 ಮೀಟರ್ ವ್ಯಾಪ್ತಿಯ ಮುಖ್ಯದ್ವಾರದವರೆಗೆ ಉಮೇದುವಾರಿಕೆಯನ್ನು ಸಲ್ಲಿಸುವ ಅಭ್ಯರ್ಥಿಗೆ ಗರಿಷ್ಠ 3 ವಾಹನಗಳನ್ನು ಬಳಕೆ ಮಾಡಲು ಅವಕಾಶವಿರುತ್ತದೆ.ಚುನಾವಣಾಧಿಕಾರಿಗಳ ಕಚೇರಿಯ ಆವರಣದಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯ ಮೇರೆಗೆ ಅಭ್ಯರ್ಥಿಗಳ ವಾಹನ ಹಾಗೂ ಅಭ್ಯರ್ಥಿಗಳ ಪ್ರವೇಶಾತಿಯನ್ನು ನಿಯಂತ್ರಿಸಲು ಹಾಗೂ ಜಿಲ್ಲಾಡಳಿತ ಭವನದ ನೌಕರರು, ಅಧಿಕಾರಿಗಳ ಪ್ರವೇಶಕ್ಕೆ ಮತ್ತು ದೈನಂದಿನ ಕಚೇರಿ ಕೆಲಸಕ್ಕೆ ಆಗಮಿಸುವ ಸಾರ್ವಜನಿಕರಿಗೆ ಕಚೇರಿ ಪ್ರವೇಶಿಸಲು ಪ್ರತ್ಯೇಕವಾದ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.
ಚುನಾವಣಾಧಿಕಾರಿಗಳ ಕಚೇರಿಯ ಆವರಣದಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯ ಮೇರೆಗೆ ಅಭ್ಯರ್ಥಿಗಳ ವಾಹನ ಹಾಗೂ ಅಭ್ಯರ್ಥಿಗಳ ಪ್ರವೇಶಾತಿಯನ್ನು ನಿಗಾವಹಿಸಲು ಉಪ ಪೊಲೀಸ್ ಅಧೀಕ್ಷಕರು, ಕೊಪ್ಪಳ ಇವರ ನೇತೃತ್ವದಲ್ಲಿ 2 ವೃತ್ತ ನಿರೀಕ್ಷಕರು, 3 ಸಬ್ ಇನ್‌ಸ್ಪೆಕ್ಟರ್‌ಗಳು, 5 ಸಹಾಯಕ ಸಬ್ ಇನ್‌ಸ್ಪೆಕ್ಟರ್‌ಗಳು, ಮಹಿಳಾ ಪೊಲೀಸ್ ಹಾಗೂ ಇನ್ನಿತರೆ ಪೊಲೀಸ್ ಕಾನ್‌ಸ್ಟೇಬಲ್‌ಗಳು, ಗೃಹ ರಕ್ಷದ ದಳದ ಸಿಬ್ಬಂದಿ ಸೇರಿದಂತೆ ಸುಮಾರು 70 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಕಾರ್ಯಕ್ಕೆ ನಿಯೋಜನೆ ಮಾಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.