ತಿಪಟೂರು: ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಅಜ್ಜಯ್ಯನ ಜಾತ್ರಾ ಮಹೋತ್ಸವ, ಕರಿಬಸವ ಸ್ವಾಮಿಗಳ 232ನೇ ವಾರ್ಷಿಕ ಸ್ಮರಣೋತ್ಸವ ಹಾಗೂ ಕರಿಬಸವದೇಶಿಕೇಂದ್ರ ಸ್ವಾಮಿಗಳ 17ನೇ ವರ್ಷದ ಪುಣ್ಯಾರಾಧನೆ, ರಥೋತ್ಸವ, ಧರ್ಮಸಭೆ ಮತ್ತು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವು ಫೆ.23ರವರೆಗೆ ನಡೆಯಲಿದೆ ಎಂದು ಕಾಡಸಿದ್ದೇಶ್ವರ ಸಂಸ್ಥಾನಮಠದ ಶ್ರೀ ಡಾ.ಕರಿವೃಷಭದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ತಿಳಿಸಿದ್ದಾರೆ.
ಶುಕ್ರವಾರ ಕರಿವೃಷಭದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮಿಗಳ ಸಾನ್ನಿಧ್ಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ತೆವಡಿಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ, ಅರಸೀಕೆರೆಯ ಬೂದಿಹಾಳ್ ಮಠದ ಶಶಿಶೇಖರ ಸಿದ್ದಬಸವ ಸ್ವಾಮೀಜಿ ನೇರವೇರಿಸಿದರು. ಫೆ.22ರಂದು ಬೆಳಗ್ಗೆ 9ಗಂಟೆಗೆ ಕಾಡಸಿದ್ದೇಶ್ವರ ಸ್ವಾಮಿಯ ಅಡ್ಡಪಲ್ಲಕ್ಕಿ ಉತ್ಸವ, ಸಂಜೆ ಕಾಡಸಿದ್ದೇಶ್ವರ ಸ್ವಾಮಿಯ ರಥೋತ್ಸವಕ್ಕೆ ಧಾರವಾಡ ಅಮ್ಮಿನಬಾವಿ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿ, ಹಾವೇರಿ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿ ಚಾಲನೆ ನೀಡುವರು. ಸಂಜೆ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಉದ್ಘಾಟನೆಯನ್ನು ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ ನೆರವೇರಿಸುವವರು. ರಾತ್ರಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ. ಫೆ.23ರಂದು ಬೆಳಗ್ಗೆ 10.30 ಗಂಟೆಗೆ ಧರ್ಮಸಭೆ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದು, ಪ್ರಾಸ್ತವಿಕ ನುಡಿಯನ್ನು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಅಧ್ಯಕ್ಷತೆಯನ್ನು ಶಾಸಕ ಕೆ.ಷಡಕ್ಷರಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೃಹ ಸಚಿವ ಜಿ.ಪರಮೇಶ್ವರ್, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಮುಜರಾಯಿ ಸಚಿವ ರಾಮಲಿಂಗರೆಡ್ಡಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ತು ಸದಸ್ಯರು, ಅಧಿಕಾರಿಗಳು ಭಾಗವಹಿಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಜ್ಜಯ್ಯನ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಡಾ.ಕರಿವೃಷಭದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಕೋರಿದ್ದಾರೆ.