ಕನ್ನಡಪ್ರಭ ವಾರ್ತೆ ಯಾದಗಿರಿ
ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನೂತನ ಸದಸ್ಯರ ಆಯ್ಕೆಗೆ ಚುನಾವಣೆ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಸುಶೀಲಾ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಮೇ 9ರಂದು ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ಮೇ 16ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಮೇ 17ಕ್ಕೆ ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಮೇ 20ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂ. 3ರಂದು ಬೆ.8ರಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದ್ದು, ಜೂ.6ಕ್ಕೆ ಮತ ಎಣಿಕೆ ಕಾರ್ಯ ನಡೆದು, ಒಟ್ಟಾರೆಯಾಗಿ ಜೂ.12 ರೊಳಗೆ ಎಲ್ಲಾ ಚುನಾವಣಾ ಪ್ರಕ್ರಿಯೆ ಮುಗಿಯಲಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿ ಡಾ. ಸುಶೀಲಾ, ಪ್ರಚುರಪಡಿಸಿದ ನಾಮಪತ್ರಗಳ ನಮೂನೆಗಳನ್ನು ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಚುನಾವಣೆ ಶಾಖೆಯಿಂದ ಪಡೆಯಬಹುದು ಎಂದರು.ಈ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ದೃಶ್ಯ ಮಾಧ್ಯಮ ತಂಡ ಹಾಗೂ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಇದು ಸಂಪೂರ್ಣ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳುವರೆಗೂ ದಿನದ 24 ಗಂಟೆಯೂ ( 24/7) ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ದೂ. 08473- 253950 ಸಂಖ್ಯೆಗೆ ಕರೆಮಾಡಿ ತಮ್ಮ ಅಹವಾಲು ಹಾಗೂ ದೂರುಗಳನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಅವರು ತಿಳಿಸಿದರು.
ಚುನಾವಣೆ ತಹಸೀಲ್ದಾರ್ ಸಂತೋಷಿರಾಣಿ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಈಟೇ, ಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಮ್ ದಾದೂ, ಜೆಡಿಎಸ್ ಪಕ್ಷದ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಶಾಂತಪ್ಪ ಜಾಧವ್ ಸೇರಿದಂತೆ ಚುನಾವಣೆ ಸಿಬ್ಬಂದಿ ವರ್ಗದವರಿದ್ದರು.