ಕೊಪ್ಪಳ: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾ ವೀಕ್ಷಕ ಶಿವಕುಮಾರ ಕೆ.ಬಿ. ಅವರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದರು.
ಯಾವುದೇ ಭಯ ಅಥವಾ ಒತ್ತಡವಿಲ್ಲದೆ ಮತದಾರರು ಶಾಂತಿಯುತವಾಗಿ ಮತ ಚಲಾಯಿಸಲು ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ಡಿ. 30, 2025ರಂದು ಪ್ರಕಟಿಸಿದ ಮತದಾರರ ಪಟ್ಟಿಯ ನಂತರ ಸೆ. 29ರ ವರೆಗೆ ಸ್ವೀಕೃತವಾದ ನಮೂನೆ-19ರ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಿ, ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಬೇಕು ಎಂದು ಸೂಚಿಸಿದರು.
ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು, ಸಹಾಯಕ ಆಯುಕ್ತರು ಹಾಗೂ ತಹಸೀಲ್ದಾರರು ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಸೌಕರ್ಯಗಳ ಲಭ್ಯತೆ ಖಚಿತಪಡಿಸಿಕೊಳ್ಳಬೇಕು. ಮತದಾನಕ್ಕೆ ಅಗತ್ಯವಾದ ನಮೂನೆಗಳು, ಲಕೋಟೆಗಳು ಹಾಗೂ ಇತರ ಲೇಖನ ಸಾಮಗ್ರಿಗಳನ್ನು ಮಸ್ಟರಿಂಗ್ ದಿನದಂದು ಮತಗಟ್ಟೆ ಅಧಿಕಾರಿಗಳಿಗೆ ಒದಗಿಸಬೇಕು ಎಂದರು.ವೆಬ್‌ಕಾಸ್ಟಿಂಗ್ ಮೂಲಕ ನಿಗಾ: ಕ್ಷೇತ್ರದ ಎಲ್ಲ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಿ ಚುನಾವಣಾ ಪ್ರಕ್ರಿಯೆಯ ಮೇಲೆ ನಿಗಾ ವಹಿಸಬೇಕು. ಮೈಕ್ರೋ ವೀಕ್ಷಕರು ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಅ. 12 ಮತ್ತು 17ರಂದು ಎರಡು ಹಂತಗಳಲ್ಲಿ ತರಬೇತಿ ನೀಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಚುನಾವಣಾಧಿಕಾರಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಸಹಾಯಕ ಚುನಾವಣಾಧಿಕಾರಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಇಕ್ರಂ ಶರೀಫ್, ಜಿಪಂ ಸಿಇಒ ರಾಹುಲ ಸಂಕನೂರ್, ಮಹಾನಗರ ಪಾಲಿಕೆ ಆಯುಕ್ತರಾದ ಅವಿನಾಶ ಶಿಂಧೆ, ಜುಬೇನ್ ಮೋಹಪಾತ್ರ, ಪ್ರಮೀಳಾ ಎಂ.ಕೆ., ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಉಪಸ್ಥಿತರಿದ್ದರು.