ಕೊಪ್ಪಳ: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಅ. 23ರಂದು ನಡೆಯಲಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಅನುಕೂಲವಾಗುವಂತೆ ಜಿಲ್ಲಾಡಳಿತ ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಜಾರಿಗೊಳಿಸಿದೆ.
ಮತಗಟ್ಟೆಗಳ ಸುತ್ತ ನಿಷೇಧಾಜ್ಞೆ: ಮತದಾನ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಅ. 22ರ ರಾತ್ರಿ 10 ಗಂಟೆಯಿಂದ ಅ. 23ರ ರಾತ್ರಿ 11 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ನಿಷೇಧಿತ ಪ್ರದೇಶದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಅನಗತ್ಯವಾಗಿ ಗುಂಪು ಸೇರುವುದು, ಸಭೆ-ಸಮಾರಂಭ, ಮೆರವಣಿಗೆ ಹಾಗೂ ಚುನಾವಣಾ ಪ್ರಚಾರ ನಡೆಸುವುದನ್ನು ನಿರ್ಬಂಧಿಸಲಾಗಿದೆ. ಮತಗಟ್ಟೆಗಳ ಸುತ್ತಲಿನ 100 ಮೀಟರ್ ಪ್ರದೇಶವನ್ನು ಸಂಪೂರ್ಣ ನಿರ್ಬಂಧಿತ ವಲಯವೆಂದು ಘೋಷಿಸಲಾಗಿದ್ದು, ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ, ಘೋಷಣೆ ಕೂಗುವುದು ಹಾಗೂ ಮತದಾರರ ಓಲೈಕೆಗೆ ಅವಕಾಶವಿಲ್ಲ. ಶಾಂತಿ-ಸುವ್ಯವಸ್ಥೆಗೆ ಭಂಗ ತರುವ ಪ್ರಚೋದನಾತ್ಮಕ ಚಟುವಟಿಕೆ, ವ್ಯಕ್ತಿಗಳ ತೇಜೋವಧೆ ಮಾಡುವ ಚಿತ್ರಗಳ ಪ್ರದರ್ಶನ ಹಾಗೂ ದಹನಕ್ಕೂ ನಿಷೇಧ ಹೇರಲಾಗಿದೆ.ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ವಿನಾಯಿತಿ ನೀಡಲಾಗಿದ್ದರೂ, ಚುನಾವಣಾ ನೀತಿ ಸಂಹಿತೆ ಹಾಗೂ ಕಾನೂನು-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಿಯಮ ಪಾಲಿಸುವುದು ಕಡ್ಡಾಯವಾಗಿದೆ.
ಮದ್ಯ ಮಾರಾಟ ಸಂಪೂರ್ಣ ನಿಷೇಧ: ಚುನಾವಣೆಯ ಹಿನ್ನೆಲೆಯಲ್ಲಿ ಅ. 21ರ ಅಪರಾಹ್ನ 4 ಗಂಟೆಯಿಂದ ಅ. 23ರ ರಾತ್ರಿ 11 ಗಂಟೆ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 135(ಸಿ) ಹಾಗೂ ಕರ್ನಾಟಕ ಅಬಕಾರಿ ಪರವಾನಗಿಗಳ ನಿಯಮಾವಳಿಗಳ ಅನ್ವಯ ಈ ಆದೇಶ ಜಾರಿಗೊಳಿಸಲಾಗಿದೆ.