ಯಾವುದೇ ಕ್ಷೇತ್ರಕ್ಕೆ ಒಂದು ರೂಪಾಯಿ ಅನುದಾನ ನೀಡಿಲ್ಲ: ವಿಜಯೇಂದ್ರ

KannadaprabhaNewsNetwork |  
Published : Sep 20, 2024, 01:31 AM IST
ಫೋಟೋ ಟಿಎಂಕೆ 19ಪಿವಿಡಿ1ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 74ನೇ ಹುಟ್ಟುಹಬ್ಬದ ಅಂಗವಾಗಿ ವಿಜಯೇಂದ್ರ ಅವರು ಗುರುವಾರ ನಗರದ ಶಿರಾ ರಸ್ತೆ ವಿಭಜಕದಲ್ಲಿ ಗಿಡ ನೆಡುವ ಮೂಲಕ ಮೋದಿ ಜನ್ಮದಿನದ ಸ್ಮರಣಾರ್ಥ 74 ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ, ಯಾವುದೇ ವಿಧಾನ ಸಭಾ ಕ್ಷೇತ್ರಕ್ಕೆ ಒಂದು ರೂಪಾಯಿ ಅನುದಾನ ನೀಡಿಲ್ಲ. ಅಭಿವೃದ್ಧಿ ಶೂನ್ಯ ಸರ್ಕಾರ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು

ಕನ್ನಡಪ್ರಭ ವಾರ್ತೆ, ತುಮಕೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ, ಯಾವುದೇ ವಿಧಾನ ಸಭಾ ಕ್ಷೇತ್ರಕ್ಕೆ ಒಂದು ರೂಪಾಯಿ ಅನುದಾನ ನೀಡಿಲ್ಲ. ಅಭಿವೃದ್ಧಿ ಶೂನ್ಯ ಸರ್ಕಾರ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 74ನೇ ಹುಟ್ಟುಹಬ್ಬದ ಅಂಗವಾಗಿ ವಿಜಯೇಂದ್ರ ಅವರು ಗುರುವಾರ ನಗರದ ಶಿರಾ ರಸ್ತೆ ವಿಭಜಕದಲ್ಲಿ ಗಿಡ ನೆಡುವ ಮೂಲಕ ಮೋದಿ ಜನ್ಮದಿನದ ಸ್ಮರಣಾರ್ಥ 74 ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು, ಈ ತಿಂಗಳ 2ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. ರಾಜ್ಯದಲ್ಲೂ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಇಂದು ತುಮಕೂರಿನಲ್ಲಿ ಸದಸ್ಯತ್ವದ ಅಭಿಯಾನದ ಪರಿಶೀಲನೆ ನಡೆಸುವುದಾಗಿ ಹೇಳಿದರು.ಅಭಿವೃದ್ಧಿ ಮರೆತ, ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಳೆದ ಎರಡು ತಿಂಗಳಿನಿಂದಲೂ ನಿರಂತರ ಹೋರಾಟ ಮಾಡುತ್ತಿದೆ. ಮಹರ್ಷಿ ವಾಲ್ಮೀಕಿ ನಿಗಮ ಹಗರಣ, ಮೂಡಾ ಹಗರಣದ ವಿರುದ್ಧ ನಡೆದ ಹೋರಾಟಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹತಾಶರಾಗಿದ್ದಾರೆ ಎಂದರುಜೊತೆಗೆ ಅವರ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಯ ಪೈಪೋಟಿ ಈಗಾಗಲೇ ಶುರುವಾಗಿದೆ. ಈ ಎಲ್ಲಾ ಕಾರಣಗಳಿಂದ ನಿರಾಶರಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ವಿರೋಧ ಪಕ್ಷವನ್ನು ಬೆದರಿಸುವ ತಂತ್ರ ಮಾಡುತ್ತಿದ್ದಾರೆ. ಹಳೆ ಪ್ರಕರಣಗಳನ್ನು ಕೆದಕುತ್ತಿದ್ದಾರೆ. ಬಿಜೆಪಿ ಹತ್ತಿಕ್ಕಲು ನಮ್ಮ ಪಕ್ಷದ ನಾಯಕರನ್ನು ಗುರಿಯಾಗಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಇಂತಹ ತಂತ್ರ ಹೊಸದೇನೂ ಅಲ್ಲ ಎಂದರು.ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಇಲ್ಲಿ ಯಾರನ್ನೂ ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ, ಆದರೆ ಸರಿಯಾದ ರೀತಿ ತನಿಖೆ ಮಾಡದೆ ತರಾತುರಿ ಮಾಡಿದ್ದನ್ನು ರಾಜ್ಯದ ಜನ ಗಮನಿಸಿದ್ದಾರೆ. ತನಿಖೆ ನಂತರ ಸತ್ಯಾಸತ್ಯತೆ ತಿಳಿಯುತ್ತದೆ ಎಂದು ಹೇಳಿದರು.ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಬಗ್ಗೆ ಬೊಬ್ಬೆ ಹೊಡೆಯುತ್ತಿದೆ. ಆದರೆ ಗೃಹಲಕ್ಷ್ಮೀ ಹಣ ಬಂದಿಲ್ಲ, ಗ್ರಾಮಾಂತರ ಪ್ರದೇಶದಲ್ಲಿ ಬಸ್ ವ್ಯವಸ್ಥೆಯಿಲ್ಲದೆ ಜನ, ಶಾಲಾಕಾಲೇಜು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಅಭಿವೃದ್ಧಿಯೂ ಇಲ್ಲ, ಜನರಿಗೆ ಅನುಕೂಲವೂ ಇಲ್ಲ, ಬರ, ಪ್ರವಾಹ ಸಂದರ್ಭದಲ್ಲಿ ಈ ಸರ್ಕಾರ ಹೇಗೆ ನಡೆದುಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು.ಶಾಸಕ ಜಿ.ಬಿ.ಜ್ಯೋತಿಗಣೇಶ್, ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಮಧುಗಿರಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್‌ಗೌಡ, ನಗರ ಬಿಜೆಪಿ ಅಧ್ಯಕ್ಷ ಟಿ.ಹೆಚ್.ಹನುಮಂತರಾಜು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ನಗರ ಪಾಲಿಕೆ ಮಾಜಿ ಸದಸ್ಯರಾದ ಇಂದ್ರಕುಮಾರ್, ಲಕ್ಷ್ಮೀ ನರಸಿಂಹರಾಜು,ಮಂಜುನಾಥ್, ಮುಖಂಡರಾದ ಟಿ.ಆರ್.ಸದಾಶಿವಯ್ಯ, ಧನುಷ್ ನಾಯಕ್, ಸತ್ಯಮಂಗಲ ಜಗದೀಶ್, ನಾಗೇಂದ್ರ,ಲಿಂಗಣ್ಣ, ಪರಿಸರ ಪ್ರೇಮಿ ಬೇವಿನಮರದ ಪ್ರೊ.ಸಿದ್ಧಪ್ಪ ಸೇರಿದಂತೆ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.ನಂತರ ಬಿ.ವೈ.ವಿಜಯೇಂದ್ರ ಅವರು ಸ್ನೇಹ ಸಂಗಮ ಸಹಕಾರ ಸಂಘದ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಸದಸ್ಯತ್ವ ಅಭಿಯಾನದ ಪರಿಶೀಲನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ