ಬೆಂಗಳೂರು : ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗೂ ಅಂಜುವ ಪ್ರಶ್ನೆಯೇ ಇಲ್ಲ. ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೇನೂ ಅಲ್ಲ ಎಂದು ವಿಜಯೇಂದ್ರ ಹರಿಹಾಯ್ದಿದ್ದಾರೆ.ಮಾನನಷ್ಟ ಮೊಕದ್ದಮೆ ನಾಟಕ ಬಿಟ್ಟು ಬಿಡಿ. ಇದರಿಂದ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಾಗುವುದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಪ್ರಕಟಣೆ ನೀಡಿರುವ ವಿಜಯೇಂದ್ರ, ಅಧಿಕಾರಕ್ಕೆ ಬಂದಾಗಲೆಲ್ಲ ಪಾಳೇಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ ಎರಡು ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ. ಸರಣಿ ಭ್ರಷ್ಟಾಚಾರಗಳು, ಅಭಿವೃದ್ಧಿ ಶೂನ್ಯ ಆಡಳಿತವನ್ನು ಪ್ರಶ್ನಿಸಿ ಹೋರಾಡುತ್ತಿರುವ ವಿರೋಧ ಪಕ್ಷಗಳನ್ನು ಈವರೆಗೂ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಬೆದರಿಸುತ್ತಿದ್ದ ಕಾಂಗ್ರೆಸ್, ಇದೀಗ ಸಾಧನೆಯ ಹೆಸರಿನಲ್ಲಿ ರಾಜ್ಯದ ಜನರಿಗೆ ಸುಳ್ಳು ಹೇಳಲು ಹೊರಟು ಬರಿದಾಗಿರುವ ಬೊಕ್ಕಸವನ್ನು ಮತ್ತಷ್ಟು ಬರಿದು ಮಾಡಲು ದುಂದುವೆಚ್ಚದಲ್ಲಿ ‘ಸಾಧನಾ ಸಮಾವೇಶ’ ಮಾಡಲು ಹೊರಟ ಜನವಿರೋಧಿ ನಡೆಯನ್ನು ಪ್ರಶ್ನಿಸಿ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಮಾಧ್ಯಮಗಳ ಮೂಲಕ ಜಾಹೀರಾತು ಬಿಡುಗಡೆ ಮಾಡಿದರೆ ಅದರಿಂದ ವಿಚಲಿತಗೊಂಡು ಮಾನನಷ್ಟ ಮೊಕದ್ದಮೆ ಹೂಡಲು ಹೊರಟಿದೆ ಎಂದು ಲೇವಡಿ ಮಾಡಿದ್ದಾರೆ.
ಇದಕ್ಕೆ ಸರ್ಕಾರದ ವ್ಯವಸ್ಥೆ ಹಾಗೂ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮದವರನ್ನು ಬೆದರಿಸುವ ಕರಾಳ ಅಧಿಸೂಚನೆ ಹೊರಡಿಸಿದೆ. ಕೇವಲ ಜಾಹೀರಾತಿಗೆ ಇಷ್ಟೊಂದು ಹೆದರಿರುವ ಕಾಂಗ್ರೆಸ್ ಸರ್ಕಾರದ ನಡೆ ಪಲಾಯನವಾದ ಹಾಗೂ ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆʼ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಇವತ್ತು ನಮ್ಮ ವಿರುದ್ಧ ಮೊಕದ್ದಮೆ ಹೂಡಿದ್ದೀರಿ. ನಮ್ಮ ಸರ್ಕಾರ ಇದ್ದಾಗ ನೀವು ಸುಳ್ಳು ಆರೋಪ ಮಾಡಿದ್ದಿರಿ. ನಿಮ್ಮ ಸರ್ಕಾರವು ಬೆಳಿಗ್ಗೆ ಎದ್ದು ಬಳಸುವ ಹಾಲಿನಿಂದ ಆಲ್ಕೋಹಾಲಿನವರೆಗೆ ಎಲ್ಲ ದರಗಳನ್ನೂ ಹೆಚ್ಚಿಸಿದೆ. ಅದನ್ನೇ ನಾವು ಹೇಳಿದ್ದೇವೆ. ಇದರಲ್ಲಿ ಸುಳ್ಳಿದೆಯೇ ಎಂದು ಪ್ರಶ್ನಿಸಿದರು.ಮೂರು ಕಾಸಿನ ಅಭಿವೃದ್ಧಿ ಕೆಲಸ ಮಾಡಿಲ್ಲ; ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ. ಮಾತೆತ್ತಿದರೆ ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ ಎಂದು ಆಕ್ಷೇಪಿಸಿದರು. ನಾವು ನ್ಯಾಯಾಲಯಕ್ಕೆ ಗೌರವ ಕೊಡುತ್ತೇವೆ. ಈ ಮೊಕದ್ದಮೆ ವಿರುದ್ಧ ಹೋರಾಟ ಮಾಡುತ್ತೇವೆ. ಇದರಿಂದ ನೀವು ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು.
ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೇನೂ ಅಲ್ಲ.
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ