ಅಧಿಕಾರಿ-ಸಿಬ್ಬಂದಿ ಕರ್ತವ್ಯಲೋಪ ವಿರುದ್ಧ ಗಮನಕ್ಕೆ ತನ್ನಿ

KannadaprabhaNewsNetwork | Updated : Aug 05 2024, 12:33 AM IST

ಸಾರಾಂಶ

ಚನ್ನಗಿರಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಮಾಜ ಜವಾಬ್ದಾರಿಯುತ ನಾಗರಿಕರು ಕೈ ಜೋಡಿಸಬೇಕಾಗಿದೆ. ಸಮಾಜದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಆಗಾಗ್ಗೆ ಮಾಹಿತಿಯನ್ನು ನೀಡಬೇಕು. ಆ ಮೂಲಕ ಸಮಾಜಘಾತುಕ ದುಷ್ಟಶಕ್ತಿಗಳನ್ನು ಮಟ್ಟಹಾಕಲು ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.

- ಪೊಲೀಸ್ ಇಲಾಖೆ ಜನಸಂಪರ್ಕ ಸಭೆಯಲ್ಲಿ ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ - - - ಕನ್ನಡಪ್ರಭ ವಾರ್ತೆ ಚನ್ನಗಿರಿ

ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಮಾಜ ಜವಾಬ್ದಾರಿಯುತ ನಾಗರಿಕರು ಕೈ ಜೋಡಿಸಬೇಕಾಗಿದೆ. ಸಮಾಜದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಆಗಾಗ್ಗೆ ಮಾಹಿತಿಯನ್ನು ನೀಡಬೇಕು. ಆ ಮೂಲಕ ಸಮಾಜಘಾತುಕ ದುಷ್ಟಶಕ್ತಿಗಳನ್ನು ಮಟ್ಟಹಾಕಲು ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.

ಶನಿವಾರ ಸಂಜೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅವರು ಮಾತನಾಡಿದರು.

ಈ ಸಭೆಯಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಕರ್ತವ್ಯಲೋಪಗಳು, ಟ್ರ್ಯಾಕ್ಟರ್‌ಗಳಿಗೆ ರಿಫ್ಲೆಕ್ಟರ್‌ಗಳ ಅಳವಡಿಕೆ, ಗಾಂಜಾ ಮಾರಾಟ, ಅಕ್ರಮ ಮಧ್ಯ ಮಾರಾಟದ ಬಗ್ಗೆ ದೂರುಗಳು ಬಂದಿವೆ. ಇಲಾಖೆಯಲ್ಲಿ ಯಾರಾದರೂ ಸಿಬ್ಬಂದಿ ಕರ್ತವ್ಯ ಲೋಪ ಮಾಡಿದರೆ ತಕ್ಷಣವೇ ಗಮನಕ್ಕೆ ತರಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಾಲೂಕಿನ ನಲ್ಲೂರು ಗ್ರಾಮದ ಪೊಲೀಸ್ ಠಾಣೆಯನ್ನು ಉನ್ನತ ದರ್ಜೆಗೆ ಏರಿಸಲು ಈಗಾಗಲೇ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅದಷ್ಟು ಶೀಘ್ರದಲ್ಲಿಯೇ ಈ ಪೊಲೀಸ್ ಠಾಣೆಯನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ತಾವರೆಕೆರೆ ಗ್ರಾಮದ ಪೊಲೀಸ್ ಠಾಣೆಯ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದೆ. ಇದನ್ನು ತೆರವುಗೊಳಿಸಲು ಶಿಫಾರಸು ಮಾಡಿದ್ದು, ತಾತ್ಕಾಲಿಕವಾಗಿ ಬೇರೆ ಕಟ್ಟಡದಲ್ಲಿ ಪೊಲೀಸ್ ಠಾಣೆ ನಡೆಸಲು ಇಲಾಖೆಯಿಂದ ಅನುಮತಿ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ಮುಖಂಡ ಗಿರೀಶ್ ಮಾತನಾಡಿ. ಚನ್ನಗಿರಿ ಪಟ್ಟಣದಲ್ಲಿ ಪುಟ್ ಪಾತ್‌ ಜಾಗಗಳ ಮೇಲೆ ಗೂಡಂಗಡಿಗಳನ್ನು ಇಟ್ಟುಕೊಳ್ಳುವುದು ಹೆಚ್ಚಾಗಿದೆ. ಇದರಿಂದ ಪಾದಾಚಾರಿಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಪಟ್ಟಣದ ಆಯ್ದ ಕೆಲ ಭಾಗಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಬೇಕು ಎಂದು ಇಲಾಖೆಗೆ ಸಲಹೆ ನೀಡಿದರು.

ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಜೆ.ದರ್ಶನ್ ಮಾತನಾಡಿ, ಚನ್ನಗಿರಿಯಲ್ಲಿ ಅಕ್ರಮವಾಗಿ ಮತಾಂತರ ಮತ್ತು ರಾತ್ರಿಯ ಸಮಯದಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆ ಸಿಬ್ಬಂದಿಗೆ ಹಲವಾರು ಬಾರಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು.

ಆಗ ಎಸ್‌ಪಿ ಅವರು ಪ್ರತಿಕ್ರಿಯಿಸಿ, ಅಕ್ರಮವಾಗಿ ಮತಾಂತರ ಮಾಡುವವರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು. ರಾತ್ರಿ ಸಮಯದಲ್ಲಿ ವ್ಹೀಲಿಂಗ್ ಮಾಡುತ್ತಿರುವ ಘಟನೆಗಳ ಪ್ರದೇಶಗಳಲ್ಲಿ ಪೊಲೀಸ್ ಬೀಟ್‌ಗಳನ್ನು ಹೆಚ್ಚಿಸಬೇಕು ಎಂದು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಂತೋಷ್, ಮಂಜುನಾಥ್, ಡಿವೈಎಸ್‌ಪಿ ರುದ್ರಪ್ಪ ಉಜ್ಜನಕೊಪ್ಪ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ.ಕಟ್ಟಿಮನಿ, ಮುಸ್ಲಿಂ ಸಮಾಜದ ಮುಖಂಡರಾದ ಅಮಾನುಲ್ಲಾ, ಸರ್ದಾರ್, ರವಿಚಂದ್ರ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.

- - -

ಕೋಟ್‌ ಕಳೆದ 10 ವರ್ಷಗಳಿಂದ ಗಾಂಜಾ ಮಾರಾಟ ಪ್ರಕರಣಗಳು ಕಡಿಮೆಯಾಗಿವೆ. ಗಾಂಜಾ ಮಾರಾಟವನ್ನು ಸಂಪೂರ್ಣವಾಗಿ ಮಟ್ಟಹಾಕಲು ಸಾರ್ವಜನಿಕರ ಸಹಕಾರ ಬಹಳ ಮುಖ್ಯವಾಗಿದೆ

- ಉಮಾ ಪ್ರಶಾಂತ, ಜಿಲ್ಲಾ ಎಸ್‌ಪಿ, ದಾವಣಗೆರೆ

- - -3ಕೆಸಿಎನ್‌ಜಿ2:

ಚನ್ನಗಿರಿ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳ ಆಲಿಸಿ ಪರಿಹಾರಕ್ಕೆ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಿದರು.

Share this article