ರಾಮನಗರ: ಜಿಲ್ಲೆಯಲ್ಲಿ ಬಾಲ ಕಾರ್ಮಿಕರು ಕಂಡುಬರುವ ಸ್ಥಳಗಳಲ್ಲಿ ಕಾರ್ಮಿಕ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ಬಾಲ ಕಾರ್ಮಿಕ ರಹಿತ ಜಿಲ್ಲೆಯನ್ನಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜೂನ್ 12ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಕಾರ್ಯಕ್ರಮದ ಆಚರಣೆಯನ್ನು ಮಾಡಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಹಾಗೂ ನಗರದ ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾ ಪಂಚಾಯತ್ ವರೆಗೆ ಜಾಥಾವನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.
ಜೂನ್ 12ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ತಮ್ಮ ಕಚೇರಿಯಲ್ಲಿ ಹಾಗೂ ಶಾಲಾ ಕಾಲೇಜುಗಳು, ಜಿಲ್ಲೆಯ ಎಲ್ಲಾ ಗ್ರಾಮಾಂತರ ಪ್ರದೇಶಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಪ್ರತಿಜ್ಞಾ ವಿಧಿ ಸ್ವೀಕರಿಸುವಂತೆ ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಚಂದ್ರಯ್ಯರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಯಿತು.