ಕನ್ನಡಪ್ರಭ ವಾರ್ತೆ ಮಂಡ್ಯಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಜಿಲ್ಲೆಗಳ ಗಡಿಭಾಗಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣಾ ಕಾರ್ಯವನ್ನು ಕೈಗೊಳ್ಳುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕಟ್ಟುನಿಟ್ಟಾಗಿ ಮಾದರಿ ನೀತಿಸಂಹಿತೆ ಪಾಲನೆ ಮಾಡಬೇಕಿದೆ. ಚಾಮರಾಜನಗರ, ಮಂಡ್ಯ ಜಿಲ್ಲೆಗಳನ್ನು ಸಂಪರ್ಕಿಸುವ ಗಡಿಭಾಗಗಳ ಚೆಕ್ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಪರಸ್ಪರ ಸಮನ್ವಯ ಸಹಕಾರದಿಂದ ಅತ್ಯಂತ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.
ಜಿಲ್ಲೆಗಳ ಗಡಿ ಭಾಗದಲ್ಲಿ ಬರುವ ಚೆಕ್ ಪೋಸ್ಟ್ ಗಳು 24*7 ಅವಧಿಯಲ್ಲೂ ಕಾರ್ಯನಿರ್ವಹಿಸಬೇಕು. ವ್ಯಾಪಕವಾಗಿ ವಾಹನಗಳ ತಪಾಸಣೆ ಮಾಡಬೇಕು. ಗೂಡ್ಸ್ ವಾಹನಗಳಲ್ಲಿ ಸಾಗಿಸಲಾಗುವ ಸಾಮಗ್ರಿಗಳನ್ನು ಪರಿಶೀಲಿಸಬೇಕು. ಸೂಕ್ತ ದಾಖಲೆಗಳು ಇವೆಯೇ ಎಂದು ಪರಿಶೀಲಿಸಬೇಕು. ವಾಣಿಜ್ಯ ತೆರಿಗೆ ಅಧಿಕಾರಿಗಳ ತಂಡ ಸಹ ಸಂಪೂರ್ಣವಾಗಿ ಪರಿಶೀಲನೆ ಮಾಡಬೇಕು ಎಂದರು.ಚೆಕ್ ಪೋಸ್ಟ್ ಗಳಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುವ ಹಣ, ಅಕ್ರಮ ಮದ್ಯ, ಆಮಿಷ ಉಡುಗೊರೆ ವಸ್ತುಗಳು ಕಂಡು ಬಂದಲ್ಲಿ ಕೂಡಲೇ ಕ್ರಮ ಜರುಗಿಸಬೇಕು. ಎರಡು ಜಿಲ್ಲೆಗಳ ಅಧಿಕಾರಿಗಳು ಸೂಕ್ತ ಮಾಹಿತಿ ವಿನಿಮಯ ಮಾಡಿಕೊಂಡು ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಚಾಮರಾಜನಗರ ಜಿಲ್ಲೆಯ ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಮಂಡ್ಯ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಉಭಯ ಜಿಲ್ಲೆಗಳ ಅಬಕಾರಿ, ಕಂದಾಯ, ಪೊಲೀಸ್, ಸಹಾಯಕ ಚುನಾವಣಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.