ಗದಗ: ಜಿಲ್ಲೆಯಲ್ಲಿ ಕೊಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ಕೊಟ್ಪಾ ಕಾಯ್ದೆ ಉಲ್ಲಂಘನೆಯಾದಲ್ಲಿ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋಟ್ಪಾ ಕಾಯ್ದೆ ಉಲ್ಲಂಘನೆ ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಂತಹ ಅಂಗಡಿಗಳ ವ್ಯಾಪಾರ ಪರವಾನಗಿ ರದ್ದುಗೊಳಿಸಬೇಕು ಎಂದರು.
ಕೋಟ್ಪಾ ದಾಳಿ ಹಮ್ಮಿಕೊಳ್ಳುವುದರ ಮೂಲಕ ವ್ಯಾಪಾರಸ್ಥರು, ತಂಬಾಕು ಬಳಕೆದಾರರಿಗೆ ಹಾಗೂ ಸಾರ್ವಜನಿಕರಲ್ಲಿ ಕೋಟ್ಪಾ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗಿದೆ ಹಾಗೂ ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಂಡು ಈವರೆಗೆ 71 ಕೋಟ್ಪಾ ದಾಳಿ ನಡೆಸಿ 1055 ಪ್ರಕರಣಗಳನ್ನು ದಾಖಲಿಸಲಾಗಿದ್ದು, 172350 ದಂಡ ಸಂಗ್ರಹಿಸಲಾಗಿದೆ.
ಕೋಟ್ಪಾ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದ ಮೂಲಕ ಈ ವರ್ಷ ಒಟ್ಟು 4140 ಅರ್ಥಿಗಳಿಗೆ ಆಪ್ತ ಸಮಾಲೋಚನೆ ಮಾಡಲಾಗಿದೆ. ಅದೆ ರೀತಿ ಸಮುದಾಯ ಮಟ್ಟದಲ್ಲಿ ಕೇಂದ್ರಿಕೃತ ಗುಂಪು ಚರ್ಚೆಯ ಮೂಲಕ ಒಟ್ಟು 78 ಎಫ್.ಜಿ.ಡಿ. ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಎಂದು ಸಭೆಗೆ ತಿಳಿಸಿದರು.ಈ ಸಂದರ್ಭದಲ್ಲಿ ಜಿ.ಪಂ. ಸಿಇಒ ಭರತ್ ಎಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಡಿಎಚ್‌ಒ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಿ.ಸಿ. ಕರಿಗೌಡರ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಉಪಸ್ಥಿತರಿದ್ದರು.