ಮಕ್ಕಳ ಗ್ರಾಮ ಸಭೆ ನಡೆಸಲು ಸೂಚನೆ

KannadaprabhaNewsNetwork |  
Published : Jun 15, 2024, 01:10 AM IST
14ಸಿಎಚ್‌ಎನ್‌ಚಾಮರಾಜನಗರದ ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ ಮತ್ತು ನಿಯಂತ್ರಣ ಕಾಯ್ದೆ, ಬಾಲ ನ್ಯಾಯ ಕಾಯ್ದೆ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಅ‍ವರು ನಡೆಸಿದರು.  | Kannada Prabha

ಸಾರಾಂಶ

ಚಾಮರಾಜನಗರದಲ್ಲಿ ಬಾಲ್ಯ ವಿವಾಹ ನಿಷೇಧ ಮತ್ತು ನಿಯಂತ್ರಣ ಕಾಯ್ದೆ, ಬಾಲ ನ್ಯಾಯ ಕಾಯ್ದೆ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯ ಪ್ರತಿ ಗ್ರಾಪಂ ಮಟ್ಟದಲ್ಲಿಯೂ ಕೂಡ ಮಕ್ಕಳ ಗ್ರಾಮ ಸಭೆಯನ್ನು ನಡೆಸಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಅವರು ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಮತ್ತು ನಿಯಂತ್ರಣ ಕಾಯ್ದೆ, ಬಾಲ ನ್ಯಾಯ ಕಾಯ್ದೆ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ನಿಯಂತ್ರಣ ಕ್ರಮಗಳು, ಬಾಲ್ಯ ವಿವಾಹ ತಡೆಗಟ್ಟುವಿಕೆ ಅತ್ಯಂತ ಪ್ರಮುಖವಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಉಂಟು ಮಾಡಬೇಕಾದ ಅಗತ್ಯವಿದೆ. ಮಕ್ಕಳ ರಕ್ಷಣೆಯ ಕಾನೂನು ಕಾಯ್ದೆಗಳ ಬಗ್ಗೆ ತಿಳಿವಳಿಕೆ ನೀಡಬೇಕು ಎಂದರು.

ಈ ಹಿಂದೆ ನಡೆದ ಸಭೆಯಲ್ಲಿ ಚರ್ಚಿಸಿದ ಸಮಸ್ಯೆಗಳ ಕುರಿತು ಪ್ರತಿಕ್ರಿಯೆ ಹಾಗೂ ಆ ಸಮಸ್ಯೆಗೆ ತೆಗೆದುಕೊಂಡ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ಪಡೆದ ವೆಂಕಟೇಶ್ ಅವರು ಸಮಸ್ಯೆಗೆ ಪರಿಹಾರ ದೊರೆಯದಿದ್ದಲ್ಲಿ ಸಂಬಂಧಪಟ್ಟವರ ವಿರುದ್ದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು. ಜಿಲ್ಲೆಯಲ್ಲಿ ನಡೆದಿರುವ ಬಾಲ್ಯ ವಿವಾಹಗಳ ಬಗ್ಗೆ ಮಾಹಿತಿ ಪಡೆದು ಇಂತಹ ಪ್ರಕರಣಗಳಲ್ಲಿ ಯಾವ ಕ್ರಮ ವಹಿಸಲಾಗಿದೆ ಎಂಬ ಬಗ್ಗೆ ವಿವರ ಪಡೆದರು. ಬಾಲ್ಯ ವಿವಾಹ ತಡೆಯುವ ಜವಾಬ್ದಾರಿ ಕೇವಲ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೀಮಿತವಾಗಿರುವುದಿಲ್ಲ. ಶಿಕ್ಷಣ ಇಲಾಖೆ ಹಾಗೂ ಗ್ರಾಪಂ ಸಹಕಾರದೊಂದಿಗೆ ಬಾಲ್ಯ ವಿವಾಹ ತಡೆಗಟ್ಟಬೇಕು. ಪ್ರಕರಣಗಳ ಮಾಹಿತಿ ಸುಳಿವು ದೊರೆತರೆ ಕೂಡಲೇ ತಡೆಯಬೇಕು ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರ, ಶಾಲೆಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ, ಮೂಲ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು. ಮಕ್ಕಳ ಹಕ್ಕುಗಳು ಹಾಗೂ ಸೌಲಭ್ಯಗಳ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದು ತಿಳಿಸಿದರು.

ಎಡಿಸಿ ಗೀತಾ ಹುಡೇದ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್, ಜಿಪಂ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ