ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ 2025ನೇ ಸಾಲಿನ ಮೊದಲನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲೆಯಿಂದ ಹೊರಗುಳಿದ ಮಕ್ಕಳ ಮುಖ್ಯವಾಹಿನಿಗೆ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಹೇಳಿದರು.
ಮಕ್ಕಳು ಶಾಲೆಯಿಂದ ಹೊರಗುಳಿದರೆ ಫಲಿತಾಂಶದ ಮೇಲೆ ಪ್ರಭಾವ, ಬಾಲ್ಯವಿವಾಹ ಹೆಚ್ಚಳ ಸೇರಿದಂತೆ ಅನೇಕ ಸಮಸ್ಯೆಗಳು ಉದ್ಭವಿಸುತ್ತವೆ. ಹಾಗಾಗಿ ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಸಮನ್ವಯ ಹಾಗೂ ಪರಿಣಾಮಕಾರಿಗಾಗಿ ಕಾರ್ಯನಿರ್ವಹಿಸುವ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.ಸಮಿತಿ ಸದಸ್ಯ ಡಿ.ಒ.ಮುರಾರ್ಜಿ ಮಾತನಾಡಿ, ಚಳ್ಳಕೆರೆ ತಾಲೂಕಿನಲ್ಲಿ 30 ಮಕ್ಕಳು ಕೌಟುಂಬಿಕ ಕಲಹದಿಂದ ಶಾಲೆಯಿಂದ ಹೊರಗುಳಿದಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿರುವುದು ಆಘಾತಕಾರಿ ಸಂಗತಿ. ಕೌಟುಂಬಿಕ ಕಲಹದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದರು.
ಶಾಲೆಯಿಂದ ಹೊರಗುಳಿದ ಒಟ್ಟು 245 ಮಕ್ಕಳಲ್ಲಿ 184 ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗಿದೆ. ಚಳ್ಳಕೆರೆ ತಾಲೂಕಿನಲ್ಲಿ 30, ಚಿತ್ರದುರ್ಗ-2, ಹಿರಿಯೂರು-6, ಹೊಳಲ್ಕೆರೆ-12 ಹಾಗೂ ಮೊಳಕಾಲ್ಮುರು ತಾಲೂಕಿನಲ್ಲಿ 11 ಮಕ್ಕಳು ಸೇರಿ ಜಿಲ್ಲಾದ್ಯಂತ 61 ಮಕ್ಕಳು ವಿವಿಧ ಕಾರಣಗಳಿಂದ ಮುಖ್ಯವಾಹಿನಿಗೆ ಬಂದಿರುವುದಿಲ್ಲ. ಮುಂದಿನ ದಿನಗಳಲ್ಲಿ ಮುಖ್ಯವಾಹಿನಿಗೆ ತರಲು ಕ್ರಮವಹಿಸಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳ ಆಯೋಜನೆಗೆ ವ್ಯವಸ್ಥಿತವಾಗಿ ಕ್ರಿಯಾಯೋಜನೆ ರೂಪಿಸಿ, ಗುರಿ ನಿಗಧಿಪಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಜಿಲ್ಲಾ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಾದ ನವಕೋಟಿ, ಬೋರಸ್ವಾಮಿ, ಹೇಮೆಗೌಡ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.