ಬೆಳಗಾವಿ : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಹಿಂದೆಯೇ ಬೆಳಗಾವಿಯ ಬಿಮ್ಸ್ ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 6 ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಹಾಗೂ ಒಂದು ವರ್ಷದ ಅವಧಿಯಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಇದು ಜನರಲ್ಲಿ ತೀವ್ರ ಆತಂಕ ಮೂಡಿಸಿದೆ.
2024ರ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ಜಿಲ್ಲೆಯಲ್ಲಿ 29 ಬಾಣಂತಿಯರ ಸಾವಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದಿರುವುದು, ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಸೇರಿದಂತೆ ಹಲವು ಕಾರಣದಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿಕೊಂಡಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 2024ರ ಜನವರಿಯಿಂದ 322 ಶಿಶುಗಳು ಮೃತಪಟ್ಟಿವೆ. ಈ ಪೈಕಿ ಬಿಮ್ಸ್ ಆಸ್ಪತ್ರೆಯಲ್ಲಿ 172 ಶಿಶುಗಳು ಮೃತಪಟ್ಟಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಪ್ರತಿ ತಿಂಗಳು 30-40 ಸರಾಸರಿಯಲ್ಲಿ ನವಜಾತ ಶಿಶುಗಳು ಮರಣ ಹೊಂದಿವೆ. ತೂಕ ಕಡಿಮೆ, ಸರಿಯಾಗಿ ಬೆಳವಣಿಗೆ ಆಗದೆ ಇರುವುದು, ಸೂಕ್ತ ಸಮಯದಲ್ಲಿ ಆಮ್ಲಜನಕ ಚಿಕಿತ್ಸೆ ಸಿಗದಿರುವುದು, ನ್ಯುಮೋನಿಯಾ, ಉಸಿರುಗಟ್ಟುವಿಕೆ ಮತ್ತು ಅಪೌಷ್ಟಿಕತೆಯಿಂದ ಶಿಶುಗಳು ಮೃತಪಟ್ಟಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ 29 ಬಾಣಂತಿಯರು ಹಾಗೂ ಒಂದು ವರ್ಷದ ಅವಧಿಯಲ್ಲಿ 322 ಶಿಶುಗಳು ಮೃತಪಟ್ಟಿವೆ ಎಂದು ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಶರಣಪ್ಪ ಗಡೇದ ತಿಳಿಸಿದ್ದಾರೆ.
ಬಳ್ಳಾರಿಯ ಬಿಮ್ಸ್‌ನಲ್ಲಿ ಬಾಣಂತಿಯರ ಸಾವಿನ ಪ್ರಕರಣದ ಹಿನ್ನೆಲೆಯಲ್ಲಿ ಇತ್ತೀಚಿಗೆ ಬೆಳಗಾವಿ ಜಿಲ್ಲಾಸ್ಪತ್ರೆ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಳಗಾವಿ ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ 8 ಅಧಿಕಾರಿಗಳಿಂದ ಉಗ್ರಾಣದಲ್ಲಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪಿಬಿಪಿ ಸಂಸ್ಥೆ ಸರಬರಾಜು ಮಾಡಿರುವ ಐವಿ ಗ್ಲುಕೋಸ್ ಬಾಕ್ಸ್ಗಳು ಪತ್ತೆಯಾಗಿದ್ದವು.
ಬೆಳಗಾವಿ ಜಿಲ್ಲೆಯಾದ್ಯಂತ ಏಪ್ರಿಲ್ ತಿಂಗಳಲ್ಲೇ ಆರ್ಎಲ್ಎಸ್ ಐವಿ ಗ್ಲುಕೋಸ್ ಪೂರೈಕೆಯಾಗಿದ್ದು, ಎಲ್ಲೆಲ್ಲಿ ಪೂರೈಕೆಯಾಗಿದೆ ಎಂಬ ಬಗ್ಗೆ ಉಗ್ರಾಣ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗಿತ್ತು. ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಪೂರೈಕೆ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು.
ಬೆಳಗಾವಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ನವಜಾತ ಶಿಶುಗಳ ಸರಣಿ ಸಾವು ದುರದೃಷ್ಟಕರ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
- ಲಕ್ಷ್ಮೀ ಹೆಬ್ಬಾಳಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ.