ಕನ್ನಡಪ್ರಭ ವಾರ್ತೆ ಮಡಿಕೇರಿ
ಅ.17 ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋದ್ಭವ ಸಂಬಂಧ ಎಲ್ಲ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ.ಭಾಗಮಂಡಲ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪವಿತ್ರ ತೀರ್ಥೋದ್ಭವ ಸಂಬಂಧ ತಲಕಾವೇರಿಯಲ್ಲಿ ಭಕ್ತಾದಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಅಧಿಕಾರಿಗಳು ಗಮನಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ಈ ಬಾರಿ ಅ. 17 ರಂದು ಬೆಳಗ್ಗೆ 7.40 ಗಂಟೆಗೆ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿಂದ ರಾತ್ರಿ ವೇಳೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ಸಚಿವರು ಸೂಚಿಸಿದರು.
ಕೂಡಲೇ ರಸ್ತೆ ನಿರ್ವಹಣೆ: ಮಳೆ ಕಡಿಮೆಯಾಗಿದ್ದು, ಕೂಡಲೇ ರಸ್ತೆ ನಿರ್ವಹಣೆ ಕೈಗೊಳ್ಳಬೇಕು. ರಸ್ತೆ ಬದಿ ಕಾಡನ್ನು ಕಡಿಬೇಕು. ಗಿಡ ಗಂಟೆ ಸಂಬಂಧ ಅರಣ್ಯ ಅಧಿಕಾರಿಗಳು ತಗಾದೆ ತೆಗೆಯಬಾರದು ಎಂದು ನಿರ್ದೇಶನ ನೀಡಿದರು.ಪೊಲೀಸ್ ಇಲಾಖೆ ಅಧಿಕಾರಿಗಳು ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಬಂದೋಬಸ್ತ್ ಮಾಡಬೇಕು ಎಂದು ಎನ್.ಎಸ್.ಭೋಸರಾಜು ಅವರು ನಿರ್ದೇಶನ ನೀಡಿದರು.
ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಬಸ್ ಸೌಲಭ್ಯ ಒದಗಿಸುವುದು, ಕಾವೇರಿ ನೀರಾವರಿ ನಿಗಮ, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಹಂತದಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದರು.ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಮಾತನಾಡಿ, ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ಸೂಚಿಸಿದರು.
ನಾಡಿನ ಜೀವನದಿ ತಲಕಾವೇರಿಯ ಪವಿತ್ರ ತೀರ್ಥೋದ್ಭವ ಒಂದು ವಿಶಿಷ್ಟವಾಗಿದ್ದು, ಪವಿತ್ರ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಭಕ್ತಾದಿಗಳಿಗೆ ಅಗತ್ಯ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು.ಮಡಿಕೇರಿ- ಭಾಗಮಂಡಲ, ಕರಿಕೆ- ಭಾಗಮಂಡಲ, ವಿರಾಜಪೇಟೆ- ಭಾಗಮಂಡಲ ರಸ್ತೆಗುಂಡಿ ಮುಚ್ಚಬೇಕು. ರಸ್ತೆ ನಿರ್ವಹಣೆ ಮಾಡಬೇಕು. ಹಾಗೆಯೇ ಭಾಗಮಂಡಲ-ತಲಕಾವೇರಿ ರಸ್ತೆ ಸರಿಪಡಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ರಸ್ತೆ ಗಿಡಗಂಟೆ ಕಡಿಯುವ ಸಂಬಂಧ ಲೋಕೋಪಯೋಗಿ, ಅರಣ್ಯ ಮತ್ತು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ಮಾಡಿ ತುರ್ತು ಕ್ರಮವಹಿಸುವಂತೆ ಸೂಚಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಪ್ರತೀ ಬಾರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗುತ್ತದೆ. ಇದನ್ನು ನಿಯಂತ್ರಿಸಲು ಭಕ್ತಾದಿಗಳು ಸಹಕರಿಸಬೇಕು ಎಂದು ಕೋರಿದರು.
ಈ ಬಾರಿ ಬೆಳಗಿನ ವೇಳೆ ತೀರ್ಥೋದ್ಭವ ಸಂಭವಿಸುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆ ಆಗಮಿಸಲಿದ್ದಾರೆ. ಆದ್ದರಿಂದ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗುವುದು ಎಂದರು.ಕೆಎಸ್‌ಆರ್‌ಟಿಸಿ ವಿಭಾಗದ ಅಧಿಕಾರಿ ಅವರು ಮಾಹಿತಿ ನೀಡಿ ತೀರ್ಥೋದ್ಭವಕ್ಕೆ ಅಗತ್ಯ ಬಸ್ ಸೌಲಭ್ಯವನ್ನು ಕಳೆದ ಬಾರಿಯಂತೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಕರಿಕೆ ಗ್ರಾಮದ ಕೋಡಿ ಪೊನ್ನಪ್ಪ ಮಾತನಾಡಿ, ಕರಿಕೆ-ಭಾಗಮಂಡಲ ರಸ್ತೆ ತುಂಬಾ ಹದಗೆಟ್ಟಿದ್ದು ಕೂಡಲೇ ರಸ್ತೆ ಅಭಿವೃದ್ಧಿಯಾಗಬೇಕು. ಹಾಗೆಯೇ ಅರಂತೋಡು-ಭಾಗಮಂಡಲ ಮಾರ್ಗ ರಸ್ತೆ ಸರಿಪಡಿಸಿ ಭಕ್ತಾದಿಗಳಿಗೆ ಅನುಕೂಲ ಮಾಡಬೇಕು ಎಂದು ಕೋರಿದರು.ನೀರಾವರಿ ಇಲಾಖೆಯ ಇಇ ಪುಟ್ಟಸ್ವಾಮಿ ಅವರು ಮೇಲ್ಸೇತುವೆ ಸಂಬಂಧಿಸಿದಂತೆ ಸುಣ್ಣ ಬಣ್ಣ ಬಳಿಯಲಾಗುವುದು, ಮಳೆ ನೀರು ಸರಾಗವಾಗಿ ಸರಿಯುವಂತಾಗಲು ಅಗತ್ಯ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭ ಮಾತನಾಡಿದ ಹೊಸೂರು ಸತೀಶ್ ಕುಮಾರ್ ಅವರು ಮೇಲ್ಸುತುವೆ ನಿರ್ಮಾಣ ಮಾಡಿದ್ದು, ಅಲ್ಲಲ್ಲಿ ನೀರು ನಿಲ್ಲುತ್ತಿದ್ದುದನ್ನು ಸರಿಪಡಿಸುವಂತಾಗಬೇಕು ಎಂದು ಹೇಳಿದರು.ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ ಅವರು ರಸ್ತೆ ನಿರ್ವಹಣೆ ಸಂಬಂಧಿಸಿದಂತೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದ್ದು, ಕೂಡಲೇ ಇನ್ನೊಂದು ವಾರದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಪುಲಿಯಂಡ ಜಗದೀಶ್ ಮಾತನಾಡಿ, ಯಾವುದೇ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಶಾಸಕರು ಸ್ಥಳ ಪರಿಶೀಲಿಸಿದಲ್ಲಿ ಕಾಮಗಾರಿ ವೇಗ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ತಿಳಿಯಲಿದೆ. ಆ ನಿಟ್ಟಿನಲ್ಲಿ ಆಗಾಗ ಪರಿಶೀಲಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.ಪ್ರಮುಖರಾದ ಎಂ.ಬಿ.ದೇವಯ್ಯ ಅವರು ಮಾತನಾಡಿ ಮಡಿಕೇರಿ- ತಲಕಾವೇರಿ ಮಾರ್ಗ ಸಿಮೆಂಟ್ ರಸ್ತೆ ನಿರ್ಮಿಸಿದಲ್ಲಿ ಶಾಶ್ವತವಾಗಿ ರಸ್ತೆ ಇರುತ್ತದೆ ಎಂದು ಹೇಳಿದರು.
ಸೆಸ್ಕ್ ಇಇ ಅನಿತಾ ಬಾಯಿ ಮಾತನಾಡಿ, ಅಗತ್ಯ ವಿದ್ಯುತ್ ಪೂರೈಸಲಾಗುವುದು. ಹೆಚ್ಚುವರಿ ವಿದ್ಯುತ್ ಪರಿವರ್ತಕ ಅಳವಡಿಕೆಗೆ ಕೂಡಲೇ ಕ್ರಮವಹಿಸಲಾಗುವುದು ಎಂದು ಹೇಳಿದರು.ಈ ಕುರಿತು ಮಾತನಾಡಿದ ಪ್ರಮುಖರಾದ ಬಿ.ಎಸ್.ತಮ್ಮಯ್ಯ, ತಲಕಾವೇರಿ ತೀರ್ಥೋದ್ಭವ ಒಂದು ತಿಂಗಳ ಕಾಲ ವಿದ್ಯುತ್ ಪೂರೈಕೆ ಇಲ್ಲದೆ ತುಂಬಾ ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ಗಮನಕ್ಕೆ ತಂದರು.
ಸ್ಥಳೀಯರಾದ ಸುನಿಲ್ ಪತ್ರಾವೋ ತಲಕಾವೇರಿ ಭಾಗದಲ್ಲಿ ವಿದ್ಯುತ್ ಪೂರೈಕೆ ಇಲ್ಲದೆ ತುಂಬಾ ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದರು.ಈ ಕುರಿತು ಮಾತನಾಡಿದ ಅನಿತಾ ಬಾಯಿ ಭಾಗಮಂಡಲ ತಲಕಾವೇರಿ ಮಾರ್ಗದಲ್ಲಿ ವಿದ್ಯುತ್ ಮಾರ್ಗವನ್ನು ರಸ್ತೆ ಬದಿಗೆ ಸ್ಥಳಾಂತರಿಸಿ ಸರಿಪಡಿಸಿ ವಿದ್ಯುತ್ ಪೂರೈಕೆಗೆ ಕೂಡಲೇ ಕ್ರಮವಹಿಸಲಾಗುವುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಜಾತ್ರೆಗೆ ಅಗತ್ಯ ವೈದ್ಯರನ್ನು ನಿಯೋಜಿಸಲಾಗುವುದು ಎಂದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಾತ್ರಾ ಪ್ರಯುಕ್ತ ಸ್ಥಳೀಯ ಸಾಂಸ್ಕೃತಿಕ ಹಾಡುಗಾರಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ, ತೀರ್ಥೋದ್ಭವ ಸಂದರ್ಭದಲ್ಲಿ ಕುಂಕುಮ ಹೂ ಇಟ್ಟು ತೀರ್ಥವನ್ನು ಕಲುಷಿತ ಮಾಡಬಾರದು. ಆದಷ್ಟು ಹೂ ಮತ್ತು ಕುಂಕುಮವನ್ನು ಕಡಿಮೆ ಮಾಡಬೇಕು ಎಂದು ಅವರು ಸಲಹೆ ಮಾಡಿದರು.ಕೊನೆಯಲ್ಲಿ ಮಾತನಾಡಿದ ಶಾಸಕರಾದ ಎ.ಎಸ್.ಪೊನ್ನಣ್ಣ ಧಾರ್ಮಿಕ ಆಚರಣೆ ಮತ್ತು ವಿಚಾರಗಳಿಗೆ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ದೇವಾಲಯ ಸಮಿತಿಯವರು ಕುಳಿತು ನಿರ್ಧಾರ ತೆಗೆದುಕೊಳ್ಳಬೇಕು. ಈ ಬಗ್ಗೆ ಹಿರಿಯರ ಜೊತೆ ಚರ್ಚಿಸಬೇಕು. ಯಾರಿಗೂ ನೋವು ಉಂಟಾಗದಂತೆ ಗಮನಹರಿಸುವುದು ಅತ್ಯವಶ್ಯಕ ಎಂದು ಹೇಳಿದರು.
ಸಮಸ್ಯೆ ಆಗದಂತೆ ಗಮನ ಅಗತ್ಯ: ಆಡಳಿತ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ನಿರ್ಲಕ್ಷ್ಯ ಕಂಡುಬಂದಲ್ಲಿ ಕೂಡಲೇ ಗಮನಕ್ಕೆ ತರುವಂತಾಗಬೇಕು. ಭಕ್ತಾದಿಗಳಿಗೆ ಸಮಸ್ಯೆ ಆಗದಂತೆ ಗಮನಹರಿಸುವುದು ಅತ್ಯಗತ್ಯ ಎಂದು ಹೇಳಿದರು.ಸ್ಥಳೀಯರಾದ ಪ್ರಮೋದ್, ಕೆ.ಜೆ.ಭರತ್ ಇತರರು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಬಲ್ಲಡ್ಕ ಅಪ್ಪಾಜಿ, ಕಾಳನ ರವಿ, ಇತರರು ಇದ್ದರು.