ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಎನ್.ಎಸ್.ಭೋಸರಾಜು ಸೂಚನೆ

KannadaprabhaNewsNetwork | Published : Mar 27, 2025 1:00 AM

ಸಾರಾಂಶ

ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಮಾಹಿತಿ ಪಡೆದರು.

ಕನ್ನಡಪ್ರಭ ವಾರ್ತೆ ವಿರಾಜಪೇಟೆ

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬಾರದಂತೆ ಎಚ್ಚರವಹಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಾಕೀತು ಮಾಡಿದ್ದಾರೆ.ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಮಾತನಾಡಿದರು.ತಹಸೀಲ್ದಾರರು ಮತ್ತು ತಾ.ಪಂ. ಇಒಗಳು ಕುಡಿಯುವ ನೀರು ಪೂರೈಕೆಗೆ ವಿಶೇಷ ಗಮನಹರಿಸಬೇಕು. ಜೊತೆಗೆ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಕುಂದುಕೊರತೆ ಆಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.ನಾಗರಹೊಳೆ ಶಾಲೆ ಮೂಲಸೌಲಭ್ಯ ಕೊರತೆ:

ನಾಗರಹೊಳೆಯಲ್ಲಿನ ಗಿರಿಜನ ಆಶ್ರಮ ಶಾಲೆಯಲ್ಲಿ ಮೂಲಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದಾರೆ. ಸರ್ಕಾರ ಹಲವು ಯೋಜನಾ ಕಾರ್ಯಕ್ರಮಗಳು ಜಾರಿಗೊಳಿಸಿದ್ದರೂ ಸಹ ಪರಿಪೂರ್ಣವಾಗಿ ತಲುಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಶಾಸಕರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಲ್ಲಿ ಸರ್ಕಾರದ ಗಮನಕ್ಕೆ ತರಬಹುದಾಗಿದೆ. ಯಾವುದೇ ಮಾಹಿತಿ ನೀಡದಿದ್ದಲ್ಲಿ ಸಮಸ್ಯೆ ಬಗೆ ಹರಿಸುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ಭೋಸರಾಜು ತರಾಟೆಗೆ ತೆಗೆದುಕೊಂಡರು.ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಿಸಬೇಕು. ಸರ್ಕಾರ ಸಾಕಷ್ಟು ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಿದ್ದು, ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದವರಿಗೆ ನಿಲಯ ಪ್ರವೇಶಕ್ಕೆ ಅವಕಾಶ ಮಾಡಬೇಕು. ಕೊರತೆಗಳಿದ್ದಲ್ಲಿ ಗಮನಕ್ಕೆ ತರುವಂತಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕಾಳಜಿ ವಹಿಸಬೇಕು ಎಂದು ಸೂಚಿಸಿದರು.ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆಯ ರಸ್ತೆ ಅಭಿವೃದ್ಧಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆ ನಿಟ್ಟಿನಲ್ಲಿ ರಸ್ತೆ ಸುಧಾರಿಸಬೇಕು. ರಸ್ತೆಗಳ ನಿರ್ವಹಣೆಗೆ ಸರ್ಕಾರ ಹಣ ನೀಡಿದ್ದು, ಸರಿಯಾಗಿ ಬಳಸಬೇಕು ಎಂದು ಎನ್.ಎಸ್.ಭೋಸರಾಜು ಅವರು ಹೇಳಿದರು.

ಎಲ್ಲ ಇಲಾಖೆಗಳಲ್ಲಿ ಶೇ.91ರಿಂದ ಶೇ.95ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ವರದಿ ನೀಡಲಾಗಿದೆ. ಆದರೆ ಕೆಲವು ಕಡೆ ಸಮಸ್ಯೆಗಳು ಇತ್ಯರ್ಥವಾಗದೆ ಇರುವುದಕ್ಕೆ ಉತ್ತಮ ಉದಾರಣೆ ನಾಗರಹೊಳೆ ಗಿರಿಜನ ವಸತಿ ಶಾಲೆಯೇ ಸಾಕ್ಷಿ ಎಂದು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.ಸಾರ್ವಜನಿಕರಿಂದ ಕುಂದುಕೊರತೆ ಸಂಬಂಧ ಹೆಚ್ಚು ಹೆಚ್ಚು ಮನವಿಗಳು ಸಲ್ಲಿಕೆಯಾಗುತ್ತಿವೆ ಎಂಬುದು ಕಂಡುಬಂದರೆ, ತಳಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಭಾವಿಸಬೇಕಾಗುತ್ತದೆ. ಆದ್ದರಿಂದ ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸಲಹೆ ನೀಡಿದರು.ಎಲ್ಲ ಹಂತದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು. ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ ಹೀಗೆ ಹಲವು ಕಾರ್ಯಕ್ಕೆ ಸರ್ಕಾರದಿಂದ ಸಹಾಯಧನ ದೊರೆಯಲಿದ್ದು, ಅವುಗಳನ್ನು ಬಳಸಿಕೊಳ್ಳಲು ಮುಂದಾಗಬೇಕು ಎಂದರು.ತಾಲೂಕುವಾರು ಕೆಡಿಪಿ ಸಭೆ:

ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಮುಂದಿನ ವಾರದಲ್ಲಿ ತಾಲೂಕುವಾರು ಕುಡಿಯುವ ನೀರು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಕೆಡಿಪಿ ಸಭೆ ನಡೆಸಲಾಗುವುದು. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಆಗಬೇಕು. ವಿರಾಜಪೇಟೆ ಮತ್ತು ಗೋಣಿಕೊಪ್ಪದಲ್ಲಿ ಸಂಚಾರ ನಿಯಂತ್ರಣ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಮಾಡದೆ ಮೂಲಸೌಲಭ್ಯ ಕಲ್ಪಿಸಲು ಮುಂದಾಗಬೇಕು. ಯಾವುದೇ ಕಾರಣಕ್ಕೂ ತಕರಾರು ತೆಗೆಯಬಾರದು. ಸಾರ್ವಜನಿಕ ಕೆಲಸಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸಿದಲ್ಲಿ ಸದಾ ಸ್ಮರಿಸಲಿದ್ದಾರೆ. ಆ ನಿಟ್ಟಿನ್ಲಲಿ ಹೆಚ್ಚಿನ ಕಾಳಜಿ ವಹಿಸುವಂತೆ ಪೊನ್ನಣ್ಣ ಸೂಚಿಸಿದರು.

ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ಇಲ್ಲದಿದ್ದಲ್ಲಿ ಶಾಸಕರು, ತಹಸೀಲ್ದಾರರ ಹಾಗೂ ಜಿಲ್ಲಾಧಿಕಾರಿಯವರ ಗಮನಕ್ಕೆ ತರಬೇಕು. ಆ ನಿಟ್ಟಿನಲ್ಲಿ ನಿವೇಶನ ಒದಗಿಸಲಾಗುವುದು. ಆ ದಿಸೆಯಲ್ಲಿ ಬೇಡಿಕೆಗೆ ತಕ್ಕಂತೆ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.ನಾಗರಹೊಳೆ ಗಿರಿಜನ ಆಶ್ರಮ ಶಾಲೆಗೆ ಜಾಗ ಅಂತಿಮಗೊಳಿಸಬೇಕು. ತುರ್ತಾಗಿ ಈ ಕಾರ್ಯ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಸೂಚಿಸಿದರು. ಗಿರಿಜನ ಆಶ್ರಮ ಶಾಲೆಯಲ್ಲಿ ಬೋರ್‌ವೆಲ್ ಕೊರೆಸುವಂತೆ ಸೂಚಿಸಿದರು.ಈ ಸಂದರ್ಭ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ, ಬಿಡುಗಡೆಯಾದ ಅನುದಾನವನ್ನು ಸರಿಯಾಗಿ ಬಳಸಬೇಕು. ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಸೌಲಭ್ಯವನ್ನಾದರೂ ಕಲ್ಪಿಸಬೇಕು ಎಂದು ತಾಕೀತು ಮಾಡಿದರು.ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್(ಪೊನ್ನಂಪೇಟೆ), ಜಾನ್ಸನ್(ವಿರಾಜಪೇಟೆ), ತಹಸೀಲ್ದಾರರು, ತಾ.ಪಂ. ಇಒಗಳು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Share this article