ಬಳ್ಳಾರಿ: ವಾಹನ ಮಾಲೀಕರು ಹಾಗೂ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಸಂಚಾರ ಪೊಲೀಸ್ ಅಧಿಕಾರಿ ಅಯ್ಯನಗೌಡ ಪಾಟೀಲ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರ, ಸಂಚಾರ ಪೊಲೀಸ್ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಶ್ರೀಮೇಧಾ ಕಾಲೇಜಿನ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಗುರುವಾರ ನಗರದ ಸರಳಾದೇವಿ ಕಾಲೇಜು ಆವರಣದಿಂದ ಹಮ್ಮಿಕೊಂಡಿದ್ದ ಜಾಗೃತಿ ಜಾಥಾದಲ್ಲಿ ಮಾತನಾಡಿದರು.ಸರ್ಕಾರದ ಆದೇಶದಂತೆ ಪ್ರತಿವರ್ಷವೂ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸಲಾಗುತ್ತದೆ. ಒಂದು ತಿಂಗಳ ಕಾಲ ಕಾರ್ಯಕ್ರಮದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಸ್ತೆ ನಿಯಮಗಳ ಕುರಿತು ಚಾಲಕರಿಗೆ ಮತ್ತು ವಾಹನ ಮಾಲೀಕರಿಗೆ ಜಾಗೃತಿ ಮೂಡಿಸಲಾಗುವುದು ಎಂದರು.
ಅನೇಕ ಅಪಘಾತಗಳು ಮಾನವ ತಪ್ಪುಗಳಿಂದಲೇ ಆಗುತ್ತವೆ. ಅಮಾಯಕರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನು ಬೀದಿಪಾಲು ಮಾಡುತ್ತಾರೆ. ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು. ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಕುಡಿದು ವಾಹನ ಚಾಲನೆ ಮಾಡುವುದು, ಮೊಬೈಲ್‍ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಎಂದು ಸೂಚಿಸಿದರು.ಚಾಲಕರು ರಸ್ತೆ ನಿಯಮಗಳನ್ನು ಹಾಗೂ ಸಂಚಾರ ಚಿಹ್ನೆಗಳನ್ನು ಚೆನ್ನಾಗಿ ಅರಿತುಕೊಳ್ಳಬೇಕು. ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯ ತೋರದೆ ನಿಯಮ ಪಾಲನೆ ಮಾಡಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿರಬೇಕು. ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದರು.
ಬಳಿಕ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಹಸಿರುನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು. ಜಾಥಾವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಾಯಿತು.ಕಾಲೇಜಿನ ಪ್ರಾಚಾರ್ಯರಾದ ಮಂಜುನಾಥ ರೆಡ್ಡಿ, ನೆಹರು ಯುವ ಕೇಂದ್ರದ ಯುವ ಅಧಿಕಾರಿ ಮೊಂಟು ಪಾತರ್ ಅವರು ಸೇರಿದಂತೆ ಸ್ಕೌಟ್ಸ್ ಮತ್ತು ಗೈಡ್ಸ್ ತಂಡ ಮತ್ತು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.