ಶಿಗ್ಗಾಂವಿ: ಮಣ್ಣಿನ ಆರೋಗ್ಯ ಸಂರಕ್ಷಣೆ ಹಾಗೂ ಸುಸ್ಥಿರ ಕೃಷಿಯನ್ನು ಉತ್ತೇಜಿಸುವ ಉದ್ದೇಶದಿಂದ ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯನ್ನು ನಿಯಂತ್ರಿಸುವುದು. ನೈಸರ್ಗಿಕ ಕೃಷಿ ಪದ್ಧತಿಗಳನ್ನು ಉತ್ತೇಜಿಸುವುದು ಹಾಗೂ ಮಣ್ಣು ಪರೀಕ್ಷೆ ಆಧಾರಿತ ಗೊಬ್ಬರ ಬಳಕೆಯ ಬಗ್ಗೆ ರೈತರಿಗೆ ಅರಿವು ಮೂಡಿಸುವುದು ಈ ಅಭಿಯಾನದ ಪ್ರಮುಖ ಗುರಿಗಳಾಗಿವೆ ಎಂದು ಸಹಾಯಕ ಕೃಷಿ ನಿರ್ದೇಶಕ ಕೋಟ್ರೇಶ್ ಗೆಜ್ಲಿ ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಿಜ್ಞಾನಿ ಡಾ. ರಶ್ಮಿ, ಇತ್ತೀಚಿನ ದಿನಗಳಲ್ಲಿ ಯೂರಿಯಾ ಸೇರಿದಂತೆ ಕೆಲವು ರಸಗೊಬ್ಬರಗಳ ಅತಿಯಾದ ಬಳಕೆಯಿಂದ ಮಣ್ಣಿನಲ್ಲಿನ ಪೋಷಕಾಂಶಗಳ ಸಮತೋಲನ ಹದಗೆಡುತ್ತಿದ್ದು, ಬೆಳೆಗಳ ಉತ್ಪಾದನಾ ಸಾಮರ್ಥ್ಯ ಕುಂಠಿತವಾಗುತ್ತಿದೆ. ಮಣ್ಣಿನ ಪರೀಕ್ಷಾ ವರದಿಯನ್ನು ಆಧರಿಸಿ ಬೆಳೆಗಳಿಗೆ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗೊಬ್ಬರಗಳನ್ನು ಬಳಸುವುದರಿಂದ ಉತ್ಪಾದನಾ ವೆಚ್ಚ ಕಡಿಮೆಯಾಗುವ ಜತೆಗೆ ಗುಣಮಟ್ಟದ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದರು.
ಸಮತೋಲಿತ ರಸಗೊಬ್ಬರ ಬಳಕೆಯ ಮಹತ್ವ, ಸಾವಯವ ಮತ್ತು ಜೈವಿಕ ಗೊಬ್ಬರಗಳ ಉಪಯೋಗ, ಹಸಿರು ಗೊಬ್ಬರ ಬೆಳೆಗಳ ಅಳವಡಿಕೆ, ಮಣ್ಣಿನ ಆರೋಗ್ಯ ಸಂರಕ್ಷಣೆ ಹಾಗೂ ಸಮಗ್ರ ಪೋಷಕಾಂಶ ನಿರ್ವಹಣೆ ಕುರಿತು ರೈತರಿಗೆ ವಿವರವಾದ ಮಾಹಿತಿ ನೀಡಿದರು. ರೈತರು ಮಣ್ಣಿನ ಆರೋಗ್ಯ ಕಾರ್ಡ್‌ಗಳನ್ನು ಸಮರ್ಪಕವಾಗಿ ಬಳಸಿಕೊಂಡು ವೈಜ್ಞಾನಿಕ ಶಿಫಾರಸುಗಳಂತೆ ಗೊಬ್ಬರ ಬಳಕೆ ಮಾಡುವಂತೆ ಕರೆ ನೀಡಿದರು.ಕೆಎಮ್‌ಎಫ್. ನಿರ್ದೇಶಕ ತಿಪ್ಪಣ್ಣ ಸಾತಣ್ಣವರ, ಕೃಷಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಮಣ್ಣಿನ ಫಲವತ್ತತೆ ಕುಸಿತ ಹಾಗೂ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಗಟ್ಟಲು ವೈಜ್ಞಾನಿಕ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಇಂದು ಅಗತ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಮೂಲಕ ರೈತರಿಗೆ ಮಣ್ಣಿನ ಆರೋಗ್ಯ ಸಂರಕ್ಷಣೆ, ಸಮತೋಲಿತ ಪೋಷಕಾಂಶ ನಿರ್ವಹಣೆ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಅರಿವು ಮೂಡಿಸಲಾಯಿತು.