ಅಧಿಕಾರಿಗಳು ಮಾತೃ ಹೃದಯದಿಂದ ಕಾರ್ಯ ನಿರ್ವಹಿಸಿ: ಡಾ. ನಾಗಲಕ್ಷ್ಮಿ ಚೌಧರಿ

KannadaprabhaNewsNetwork |  
Published : May 20, 2026, 12:45 AM IST
ಮಹಿಳಾ ಸ್ಪಂದನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಬಂಧಿತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಾ. ನಾಗಲಕ್ಷ್ಮಿ ಚೌಧರಿ ಮಾತನಾಡಿದರು. | Kannada Prabha

ಸಾರಾಂಶ

ಧಾರವಾಡ ಜಿಲ್ಲೆಯಲ್ಲಿ ಅಕ್ಕಾ ಪಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರ ರಕ್ಷಣೆ ಹಾಗೂ ಜಾಗೃತಿಯಲ್ಲಿ ಮಹತ್ವದ ಪಾತ್ರವಹಿಸಿದೆ.

ಧಾರವಾಡ:

ಅಧಿಕಾರಿಗಳು ಮಾತೃ ಹೃದಯದಿಂದ ಕರ್ತವ್ಯ ನಿರ್ವಹಿಸಿದಾಗ ನೊಂದ ಮಹಿಳೆಯರ ಬದುಕಿನಲ್ಲಿ ನ್ಯಾಯ, ತೃಪ್ತಿಯ ಆಶಾಕಿರಣಗಳು ಮೂಡುತ್ತವೆ. ಅಧಿಕಾರಿಗಳಲ್ಲಿ ಬದ್ಧತೆ ಇದ್ದಾಗ ಮಾತ್ರ ಮಹಿಳಾ ಅಭಿವೃದ್ಧಿ ಕಾಣಲು ಸಾಧ್ಯ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಮಹಿಳಾ ಸ್ಪಂದನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಬಂಧಿತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಕ್ಕಾ ಪಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರ ರಕ್ಷಣೆ ಹಾಗೂ ಜಾಗೃತಿಯಲ್ಲಿ ಮಹತ್ವದ ಪಾತ್ರವಹಿಸಿದೆ. ಅಕ್ಕಾ ಪಡೆ ಸದಸ್ಯರೊಂದಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಸಮಸ್ಯೆ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಬೇಕೆಂದು ಪೊಲೀಸ್‌ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಬಗ್ಗೆ ಅರಿವು, ಸಾಮಾಜಿಕ ಜಾಲತಾಣಗಳ ದುರುಪಯೋಗ, ಆನ್‌ಲೈನ್ ವಂಚನೆ ಹಾಗೂ ಡಿಜಿಟಲ್ ಸುರಕ್ಷತೆ ಕುರಿತು ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾತನಾಡಿ, ಮಹಿಳೆಯರ ಸುರಕ್ಷತೆ, ಮಕ್ಕಳ ಕಲ್ಯಾಣ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯ ಶಾಲೆ, ಕಾಲೇಜು, ಹಾಸ್ಟೆಲ್, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಶೀ ಬಾಕ್ಸ್ ವ್ಯವಸ್ಥೆಯನ್ನು ಪರಿಣಾಮಕಾರಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.

ಸಾರ್ವಜನಿಕರು ವಿಶೇಷವಾಗಿ ಮಹಿಳೆಯರು ಸಾಲ ಪಡೆಯುವ ವೇಳೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗಿಂತ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳ ಮೂಲಕ ಸಾಲ ಪಡೆಯಬೇಕು ಎಂಬ ಸಲಹೆ ನೀಡಿದರು.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಮಾತನಾಡಿ, ಡ್ರಗ್ಸ್ ಸಂಬಂಧಿತ ಪ್ರಕರಣ ತಡೆಯಲು ವಿಶೇಷ ಕಾರ್ಯಾಚರಣೆ ನಡೆಯುತ್ತಿವೆ. ಯುವಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿಯೂ ಇದೆ. ಶಾಲೆ-ಕಾಲೇಜುಗಳ ಸುತ್ತಮುತ್ತ ಕಟ್ಟುನಿಟ್ಟಿನ ನಿಗಾವಹಿಸಲಾಗಿದ್ದು, ಡ್ರಗ್ಸ್ ಜಾಲದ ವಿರುದ್ಧ ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಸ್ವಾಗತಿಸಿದರು. ಜಿಪಂ ಸಿಇಒ ಭುವನೇಶ ಪಾಟೀಲ, ಎಸ್ಪಿ ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತೆ ಶ್ರುತಿ ಎನ್.ಎಸ್. ಇದ್ದರು.

200 ಅಹವಾಲು ಸ್ವೀಕಾರ...

ಮಹಿಳಾ ಸ್ಪಂದನ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಮಹಿಳೆಯರಿಂದ 100ಕ್ಕೂ ಹೆಚ್ಚು ವೈಯಕ್ತಿಕ ಅಹವಾಲುಗಳನ್ನು ಮಹಿಳಾ ಆಯೋಗದ ಅಧ್ಯಕ್ಷರು ಸ್ವೀಕರಿಸಿದರು. ಆಸ್ತಿ ವಿಷಯದಲ್ಲಿ ಗಂಡ, ಸಹೋದರರು, ಸಂಬಂಧಿಕರಿಂದ ವಂಚನೆ ಪ್ರಕರಣ, ಗಂಡನಿಂದ ಪರಿತ್ಯಕ್ತೆ ಮಹಿಳೆಯರು, ಗಂಡನ ಅನೈತಿಕ ಸಂಬಂಧ, ಅತ್ತೆ-ನಾದಿನಿಯರಿಂದ ಕಿರುಕುಳ, ಗಂಡನಿಂದ ಕುಟುಂಬ ನಿರ್ಲಕ್ಷ, ಜಮೀನು ವಿವಾದ, ಮಹಿಳಾ ಸುರಕ್ಷತೆ, ಸರ್ಕಾರಿ ಸೌಲಭ್ಯಗಳ ವಿಳಂಬ, ಪಿಂಚಣಿ, ಮೂಲಭೂತ ಸೌಕರ್ಯಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಮಹಿಳೆಯರು ತಮ್ಮ ಅಹವಾಲು, ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿತ್ತನೆ ಬೀಜಗಳಿಗೆ ಏಕರೂಪ ದರ ನಿಗದಿಗೊಳಿಸುವಂತೆ ಆಗ್ರಹ
ಬಿಸಿಲೂರು ಬಳ್ಳಾರಿಯಲ್ಲಿ ಮಳೆ-ಗುಡುಗಿನ ಆರ್ಭಟ