ಮುಖ್ಯಮಂತ್ರಿಗಳ ಜ.೨೯ ರ ತುಮಕೂರು ಪ್ರವಾಸ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ
ಕನ್ನಡಪ್ರಭ ವಾರ್ತೆ ತುಮಕೂರು
ಅಧಿಕಾರಿಗಳು ಸಭೆಗಳಿಗೆ ಆಗಮಿಸುವಾಗ ತಮ್ಮ ಇಲಾಖೆಗೆ ಸಂಬಂಧಿಸಿದ ನಿಖರ ಮಾಹಿತಿಯನ್ನು ತರಬೇಕು. ಸಭೆಗೆ ಬಂದು ಸಬೂಬು ಹೇಳಬಾರದು. ಇನ್ನು ಮುಂದೆ ಇಂತಹ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮುಖ್ಯಮಂತ್ರಿಗಳ ಜ.೨೯ ರ ತುಮಕೂರು ಪ್ರವಾಸ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತುಮಕೂರಿನ ಇತಿಹಾಸದಲ್ಲಿಯೇ ಹಿಂದೆಂದೂ ಕಾಣದಂತಹ ಕಾರ್ಯಕ್ರಮ ಇದಾಗಬೇಕು. ಅಂದಾಜು ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ಸಂಭವವಿದ್ದು, ಈ ಪೈಕಿ ೫೦ ಸಾವಿರ ಫಲಾನುಭವಿಗಳಿರಬೇಕು. ಆಯಾ ಇಲಾಖೆಗಳೇ ಫಲಾನುಭವಿಗಳನ್ನು ಕರೆತರಬೇಕು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಬೇಕು. ಯಾವುದೇ ತಾಂತ್ರಿಕ ತೊಂದರೆಗಳಿದ್ದಲ್ಲಿ ಬಗೆಹರಿಸಿ ಜ.೨೯ ಕ್ಕೆ ಕಾಮಗಾರಿ ಉದ್ಘಾಟನೆಯಾಗಬೇಕು ಎಂದು ಸೂಚಿಸಿದರು.
ಅಂದಾಜು ೭೦೦ ಕೋಟಿ ರು. ಮೊತ್ತದಷ್ಟು ಸವಲತ್ತುಗಳನ್ನು ಸರ್ಕಾರದ ವತಿಯಿಂದ ನೀಡುವ ಕಾರ್ಯಕ್ರಮ ಇದಾಗಿದೆ. ಅಂದು ಸುಮಾರು ೫೦ ಸಾವಿರ ಫಲಾನುಭವಿಗಳು ಸವಲತ್ತುಗಳನ್ನು ಪಡೆದುಕೊಳ್ಳಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳು ಸರ್ಕಾರದಿಂದ ಅನುಮೋದನೆಯಾಗಿ, ಅನುದಾನ ಬಿಡುಗಡೆಯಾಗಿರುವಂತಹ ಕಾರ್ಯಕ್ರಮಗಳಾಗಿವೆ ಎಂದು ತಿಳಿಸಿದರು.
ದೇಶದ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈನಲ್ಲಿ ಎರಡು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಿವೆ. ಸದ್ಯ ಬೆಂಗಳೂರಿನಲ್ಲೂ ಸಹ ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ ಇಲ್ಲಿಯೂ ಸಹ ಮತ್ತೊಂದು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.
ತುಮಕೂರು ನಗರದ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಎಲ್ಲೆಂದರಲ್ಲಿ ತ್ಯಾಜ್ಯಗಳನ್ನು ಸುರಿಯಲಾಗುತ್ತಿದೆ. ಇದರಿಂದ ರೋಗ-ರುಜಿನುಗಳು ಮತ್ತು ನಾಯಿಗಳ ಹಾವಳಿ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತರು ರಾತ್ರಿ ಬೀಟ್‌ಗಳನ್ನು ಹೆಚ್ಚಿಸುವಂತೆ ಸೂಚಿಸಿದರು.
ಕೃಷಿ ಇಲಾಖೆಯಲ್ಲಿ ಹನಿ ನೀರಾವರಿ ಯೋಜನೆಯಡಿ ಅರ್ಜಿ ಸಲ್ಲಿಸುವ ಎಲ್ಲರಿಗೂ ಸಹ ಸ್ಪಿಂಕ್ಲರ್ ಸೆಟ್‌ಗಳನ್ನು ವಿತರಿಸಬೇಕು. ಸ್ಮಾರ್ಟ್ ಸಿಟಿ ವತಿಯಿಂದ ಎಲ್ಲೆಲ್ಲಿ ಕೆರೆ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗಿದೆಯೋ ಅಲ್ಲೆಲ್ಲಾ ವಾಕಿಂಗ್ ಟ್ರ್ಯಾಕ್ ಪಾರ್ಕ್ ಇತ್ಯಾದಿಗಳನ್ನು ಅಭಿವೃದ್ಧಿಪಡಿಸಬೇಕು. ಜಿಲ್ಲೆಯಾದ್ಯಂತ ಅಂದಾಜು ೪೦ ರಿಂದ ೬೦ ಸಾವಿರ ನಿವೇಶನಗಳನ್ನು ಅಭಿವೃದ್ಧಿಪಡಿಸಿ ಮುಂದಿನ ದಿನಗಳಲ್ಲಿ ಅರ್ಹರಿಗೆ ವಿತರಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವಂತಹ ರಾಯದುರ್ಗ-ದಾವಣಗೆರೆ ಭೂಸ್ವಾಧೀನ ಪ್ರಕ್ರಿಯೆಗಳು ಚುರುಕುಗೊಳ್ಳಬೇಕು. ಕಳೆದ ೪ ವರ್ಷಗಳಿಂದ ಎತ್ತಿನ ಹೊಳೆ ಯೋಜನೆ ಕುಂಟುತ್ತಾ ಸಾಗಿದೆ. ಈಗಾಗಲೇ ೧೩೦೦ ಎಕರೆ ಭೂಸ್ವಾಧೀನವಾಗಿದೆ. ಇನ್ನೂ ೧೭೩೭ ಎಕರೆ ಭೂಸ್ವಾಧೀನವಾಗಬೇಕಿದೆ. ಹಣ ಬಿಡುಗಡೆಯಾಗಬೇಕಿದ್ದು, ಮುಂದಿನ ದಿನಗಳಲ್ಲಿ ಈ ಕುರಿತಂತೆ ಸಮಗ್ರವಾಗಿ ಚರ್ಚಿಸಲು ಬೆಂಗಳೂರಿನಲ್ಲಿ ಸಭೆ ಕರೆಯಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಹಕಾರ ಸಚಿವರ ಕೆ.ಎನ್. ರಾಜಣ್ಣ ಅವರು ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ನಕಲಿ ಕಾರ್ಡುಗಳನ್ನು ವಿತರಿಸಿದಂತಹ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಕಾರ್ಮಿಕರ ಮಕ್ಕಳಿಗೂ ಸಹ ಶೈಕ್ಷಣಿಕ ಸವಲತ್ತುಗಳನ್ನು ನೀಡುವ ಮೂಲಕ ಕೂಲಿ ಕಾರ್ಮಿಕರ ಮಕ್ಕಳಿಗೆ ಉತ್ತಮ ಬದುಕು ನೀಡುವಂತೆ ಕಾರ್ಮಿಕ ಅಧಿಕಾರಿ ತೇಜಾವತಿ ಅವರಿಗೆ ಸೂಚಿಸಿದರು.
ಜೆಜೆಎಂ ಯೋಜನೆಯಡಿ ಶಾಶ್ವತ ನೀರಾವರಿ ಮೂಲಗಳನ್ನು ಕಂಡುಕೊಂಡ ನಂತರ ಯೋಜನೆಯ ಅನುಷ್ಠಾನಕ್ಕೆ ಮುಂದಾಗಬೇಕಿದೆ. ಕೊಳವೆ ಬಾವಿಗಳು ಶಾಶ್ವತವಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಸಂಸದ ಜಿ.ಎಸ್. ಬಸವರಾಜು, ಶಾಸಕರುಗಳಾದ ಎಸ್.ವಿ. ರಂಗನಾಥ್, ಶ್ರೀನಿವಾಸ್, ರಾಜೇಂದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಅಶ್ವಿಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕೋಟ್‌ಇಲಾಖೆಗೆ ಮಂಜೂರಾಗಿರುವ ಯೋಜನೆ, ಕಾರ್ಯಕ್ರಮಗಳನ್ನು ನಿಗದಿತ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಂಕುಸ್ಥಾಪನೆ, ಉದ್ಘಾಟನಾ ಕಾರ್ಯಕ್ರಮದ ಪಟ್ಟಿ ಅಂತಿಮಗೊಳ್ಳಬೇಕು. ಪ್ರತಿಯೊಂದು ಇಲಾಖಾ ಮುಖ್ಯಸ್ಥರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಇಲಾಖಾ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಬೇಕು.ಡಾ.ಜಿ. ಪರಮೇಶ್ವರ್, ಗೃಹಸಚಿವರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.