ಬಲವಂತದ ವಿವಾಹ ಪ್ರಕರಣಗಳಿಗೆ ಅಧಿಕಾರಿಗಳೇ ನೇರ ಹೊಣೆ

KannadaprabhaNewsNetwork |  
Published : Jun 12, 2025, 12:58 AM IST
ಪೋಟೋ೧೧ಸಿಎಲ್‌ಕೆ೧ ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯಿತಿ ಇಒ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ  ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಮಾತನಾಡಿದರು. | Kannada Prabha

ಸಾರಾಂಶ

ಚಳ್ಳಕೆರೆ ನಗರದ ತಾಪಂ ಇಒ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಮಾತನಾಡಿದರು.

ತಾಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ ಸಿಇಒ ಸೋಮಶೇಖರ್ ಎಚ್ಚರಿಕೆಕನ್ನಡಪ್ರಭ ವಾರ್ತೆ ಚಳ್ಳಕೆರೆ

ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ಹಂತದಲ್ಲೂ ನಿರ್ಲಕ್ಷ್ಯ ವಹಿಸಿದರೆ ಸರ್ಕಾರದಿಂದ ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ. ಜಿಲ್ಲಾಡಳಿತ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಕರ್ತವ್ಯ ಪಾಲನೆ ಬಗ್ಗೆ ನಿಗಾವಹಿಸಿದ್ದು ಪ್ರತಿಯೊಬ್ಬ ಅಧಿಕಾರಿಯೂ ಸರ್ಕಾರದ ನಿಯಮಗಳನ್ನು ಪಾಲಿಸುವಲ್ಲಿ ಮುಂದಾಗಬೇಕು. ತಾಲೂಕಿನ ಅಭಿವೃದ್ಧಿಪರ ಚಿಂತನೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಬೇಕೆಂದು ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ತಿಳಿಸಿದರು.

ಬುಧವಾರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಗಿಂಕ ದೌರ್ಜನ್ಯ, ಬಲವಂತ ವಿವಾಹದ ಘಟನೆಗಳು ನಡೆಯುತ್ತಿವೆ. ಪತ್ರಿಕೆಗಳಲ್ಲಿ ಈ ವರದಿಯನ್ನು ನೋಡಿದ ಮೇಲೆ ವಿಷಯ ತಿಳಿಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಜಾಗೃತರಾದಲ್ಲಿ ಸಮಸ್ಯೆಗಳನ್ನು ನಿಯಂತ್ರಿಸಬಹುದಾಗಿದೆ. ರೆಡ್ಡಿಹಳ್ಳಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ವಿವಾಹ ಮಾಡಲು ಯತ್ನಿಸಿದ ಐವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸಿಡಿಪಿಒ ಹಾಗೂ ಬಿಇಒಗೆ ಸೂಚಿಸಿದರು.

ಕಳೆದ ತಿಂಗಳು ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ತೃಪ್ತಿ ತಂದಿಲ್ಲ. ಈ ತಾಲೂಕಿನಲ್ಲಿ ಶೇ.62ರ ಸಾಧನೆಯಾಗಿದೆ. ಫಲಿತಾಂಶ ಕಳಪೆಯಾದರೆ ಶಿಕ್ಷಣ ಇಲಾಖೆಯನ್ನೇ ಹೊಣೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮುಖ್ಯ ಶಿಕ್ಷಕರು, ಶಿಕ್ಷಕರ ಸಭೆ ಕರೆದು ಫಲಿತಾಂಶವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು ಎಂದು ಹೇಳಿದರು.

ಇತ್ತೀಚೆಗೆ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕ ನೇಮಕ ಮಾಡುವ ಕುರಿತು ಸರ್ಕಾರ ನಿರ್ದೇಶನ ನೀಡಿದ್ದು, ಇದರ ಅನುಸಾರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು, ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಶಿಕ್ಷಕರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು. ಬಾಲ್ಯ ವಿವಾಹ ನಿಯಂತ್ರಣ ಕುರಿತು ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ಗ್ರಾಪಂ ಆವರಣದಲ್ಲಿ ಬಾಲ್ಯವಿವಾಹದ ಕುರಿತು ಪೋಸ್ಟರ್ ಹಾಕಬೇಕು, ಬಾಲ್ಯವಿವಾಹ ಪ್ರೋತ್ಸಾಹಿಸುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವ ಎಚ್ಚರಿಕೆ ಬಗ್ಗೆ ಜಾಗೃತಿ ಮೂಡಿಸಿ, ವಿಶೇಷವಾಗಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮದಲ್ಲೂ ಅಪ್ರಾಪ್ತ ಬಾಲಕಿಯ ವಿವಾಹ, ದೌರ್ಜನ್ಯದ ವಿರುದ್ಧ ಯತ್ನಿಸಿದರೆ ಕಾನೂನು ಕ್ರಮ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.

ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮಜನರೊಂದಿಗೆ ನಿಕಟ ಸಂಪರ್ಕ ಹೊಂದಿರುತ್ತಾರೆ. ಪ್ರತಿಯೊಂದು ಹಂತದಲ್ಲೂ ಆರೋಗ್ಯವೂ ಸೇರಿದಂತೆ ಹಲವಾರು ವಿಷಯಗಳ ಜಾಗೃತಿ ಕಾರ್ಯಗಾರವನ್ನು ಅವರು ಕೈಗೊಳ್ಳುತ್ತಾ ಬಂದಿದ್ದಾರೆ. ಅವರ ಮೂಲಕವೂ ಬಾಲ್ಯವಿವಾಹ ಜಾಗೃತಿ ಕಾರ್ಯಕ್ರಮ ನಡೆಸಬೇಕು ಎಂದು ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಸಿಡಿಪಿಒ ರಾಜಾನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಎಸ್‌ಟಿ ಕಲ್ಯಾಣಾಧಿಕಾರಿ ಶಿವರಾಜ್, ಸಮಾಜ ಕಲ್ಯಾಣಾಧಿಕಾರಿ ದೇವ್ಲಾನಾಯ್ಕ, ಬಿಸಿಎಂ ಅಧಿಕಾರಿ ರಮೇಶ್, ಆರೋಗ್ಯಾಧಿಕಾರಿ ಡಾ.ಕಾಶಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಬಿ.ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ