ಕುಡಿಯುವ ನೀರಿನ ಲಭ್ಯತೆ ಹಾಗೂ ಸಮಸ್ಯಾತ್ಮಕ ಏರಿಯಾಗಳು ಹಾಗೂ ಗ್ರಾಮಗಳನ್ನು ಗುರುತಿಸಿಕೊಳ್ಳಬೇಕು. ನೀರು ಪೂರೈಕೆಗೆ ಪರ್ಯಾಯ ಮೂಲಗಳನ್ನು ಗುರುತಿಸಿಡಬೇಕು. ಅಗತ್ಯ ಬಿದ್ದರೆ ಖಾಸಗಿ ಬೋರ್‌ವೆಲ್‍ಗಳಿಂದಲೂ ನೀರು ಪಡೆಯಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಬೇಸಗೆ ಆರಂಭವಾಗುತ್ತಿದ್ದು, ಸಾರ್ವಜನಿಕರಿಗೆ, ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಲಭ್ಯತೆ ಹಾಗೂ ಸಮಸ್ಯಾತ್ಮಕ ಏರಿಯಾಗಳು ಹಾಗೂ ಗ್ರಾಮಗಳನ್ನು ಗುರುತಿಸಿಕೊಳ್ಳಬೇಕು. ನೀರು ಪೂರೈಕೆಗೆ ಪರ್ಯಾಯ ಮೂಲಗಳನ್ನು ಗುರುತಿಸಿಡಬೇಕು. ಅಗತ್ಯ ಬಿದ್ದರೆ ಖಾಸಗಿ ಬೋರ್‌ವೆಲ್‍ಗಳಿಂದಲೂ ನೀರು ಪಡೆಯಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
39 ಗ್ರಾಮಗಳಲ್ಲಿ ನೀರಿನ ಕೊರತೆ:
ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಟ್ಯಾಂಕರ್ ಮೂಲಕ ನೀರು ವಿತರಿಸಲು ಟೆಂಡರ್ ಕರೆದು ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ 39 ಗ್ರಾಮಗಳಲ್ಲಿ ಹಾಗೂ ನಗರ, ಪಟ್ಟಣ ಪ್ರದೇಶಗಳ 112 ವಾರ್ಡ್‌ಗಳಲ್ಲಿ ಮುಂಬರುವ ತಿಂಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಅಂದಾಜಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ ಹೆಲ್ಪ್‌ಲೈನ್ ತೆರೆದು, ಸಿಬ್ಬಂದಿ ನೇಮಕ ಮಾಡಬೇಕು. ನೀರಿನ ಶುದ್ಧತೆ ಹಾಗೂ ಗುಣಮಟ್ಟ ಕುರಿತು ಪರಿಶೀಲನೆ ನಡೆಸಬೇಕು ಎಂದರು.
ಹೊಸ ಬೋರ್‌ವೆಲ್‍ಗಳನ್ನು ಕೊರೆಯಲು ಅಗತ್ಯ ಇರುವ ಕಡೆ ಜಾಗ ಗುರುತಿಸಿ ಇಟ್ಟುಕೊಳ್ಳಬೇಕು. ಬರವನ್ನು ಸಮರ್ಥವಾಗಿ ನಿರ್ವಹಿಸಲು ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ತುಂಬೆ ನೇತ್ರಾವತಿ, ಎ.ಎಂ.ಆರ್., ಮಳವೂರು ಅಣೆಕಟ್ಟುಗಳ ನೀರಿನ ಪ್ರಮಾಣದ ಮಾಹಿತಿ ಪಡೆದ ಜಿಲ್ಲಾಧಿಕಾರಿ, ನಿರ್ದಿಷ್ಟ ಪ್ರಮಾಣಕ್ಕಿಂತ ಕೆಳಗೆ ನೀರು ಇಳಿದರೆ, ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ತಿಳಿಸಿದರು.
ತುಂಬೆ ನೇತ್ರಾವತಿ ಡ್ಯಾಂನಲ್ಲಿ ಪ್ರಸ್ತುತ 6 ಮೀ. ನೀರು ಇದೆ. ಮಂಗಳೂರು ಮಹಾನಗರಪಾಲಿಕೆ, 3 ಗ್ರಾಮ ಪಂಚಾಯ್ತಿ, ಮೂಲ್ಕಿ ಮತ್ತು ಉಳ್ಳಾಲ ನಗರ ಪ್ರದೇಶಗಳಿಗೆ ಇಲ್ಲಿಂದ ನೀರು ಪೂರೈಕೆ ಆಗುತ್ತಿದೆ. ತುಂಬೆ ವೆಂಟೆಡ್ ಡ್ಯಾಂ ಕೆಳಭಾಗದ ನೀರನ್ನು ಪ್ರತಿನಿತ್ಯ ತುಂಬೆ ಡ್ಯಾಂಗೆ ಹಾಯಿಸಿ ನದಿ ನೀರಿನ ಮಟ್ಟವನ್ನು ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಇರುವ ಮಂಗಳೂರು ನಗರದ ಎತ್ತರ ಪ್ರದೇಶಗಳಿಗೆ 15 ಟ್ಯಾಂಕರ್‌ಗಳ ಮೂಲಕ ಮಹಾನಗರ ಪಾಲಿಕೆಯು ನೀರು ಪೂರೈಕೆ ಮಾಡುತ್ತಿದೆ ಎಂದರು.
ಮಳವೂರು ಡ್ಯಾಂನಲ್ಲಿ 1.5 ಮೀ. ನೀರು ಲಭ್ಯವಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕವೂ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಮೀಣ ಕುಡಿಯುವ ನೀರು ಎಂಜಿನಿಯರ್ ಸಭೆಗೆ ಮಾಹಿತಿ ನೀಡಿದರು.
ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿರುವ ಅಡ್ಯಾರ್- ಹರೇಕಳ ಡ್ಯಾಂ ಹಾಗೂ ಪುತ್ತೂರು ತಾಲೂಕು ಬಿಳಿಯೂರು ಡ್ಯಾಂನಿಂದಲೂ ಅಗತ್ಯ ಬಿದ್ದರೆ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮಹಾಪಾತ್ರ್ರ, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.